ಮೊಬೈಲ್ ಬಳಕೆ ದುಷ್ಪರಿಣಾಮ ಎಚ್ಚರ ವಹಿಸಿ: ಮಾರುತಿ ಬಾಗಡೆ

KannadaprabhaNewsNetwork |  
Published : Nov 25, 2026, 02:30 AM IST
ಚಿತ್ರ :  23ಎಂಡಿಕೆ1 : ಸುರಕ್ಷಿತ ಬಾಲ್ಯ ಅಭಿಯಾನ’ಕ್ಕೆ ಚಾಲನೆ.  | Kannada Prabha

ಸಾರಾಂಶ

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆಯಿಂದ ಮಕ್ಕಳ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿದ್ದು, ಮಕ್ಕಳ ಮಾನಸಿಕ ಮತ್ತು ಭಾವನಾತ್ಮಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಮಾರುತಿ ಎಸ್.ಬಾಗಡೆ ಸಲಹೆ ನೀಡಿದ್ದಾರೆ.

ಮಡಿಕೇರಿ : ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆಯಿಂದ ಮಕ್ಕಳ ಮೇಲೆ ಹಲವು ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿದ್ದು, ಮಕ್ಕಳ ಮಾನಸಿಕ ಮತ್ತು ಭಾವನಾತ್ಮಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಮಾರುತಿ ಎಸ್.ಬಾಗಡೆ ಸಲಹೆ ನೀಡಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರ್ಕಾರಿ ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಮತ್ತು ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಗರದ ನ್ಯಾಯಾಲಯದ ಆವರಣದಲ್ಲಿ ‘ಸುರಕ್ಷಿತ ಬಾಲ್ಯ ಅಭಿಯಾನ’ ಪ್ರಯುಕ್ತ ಶಿಕ್ಷಕರಿಗೆ ನಡೆದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮೊಬೈಲ್ ಮತ್ತು ಇಂಟರ್ನೆಟ್ ಮೂಲಕವೂ ಮಕ್ಕಳು ವಿವಿಧ ರೀತಿಯ ಶೋಷಣೆಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿದ್ದು, ಮಕ್ಕಳನ್ನು ಉತ್ತಮ ರೀತಿಯಲ್ಲಿ ಬೆಳೆಸಲು ವಿಶೇಷ ಗಮನಹರಿಸಬೇಕು ಎಂದರು.

ಮಕ್ಕಳ ಸುರಕ್ಷತೆ ಕುರಿತು ಸೂಕ್ತ ಮಾರ್ಗದರ್ಶನ ನೀಡಿ, ಅವರ ಸಮಸ್ಯೆಗಳನ್ನು ಆಲಿಸಿ, ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಯೋಗಿಕವಾಗಿ ಕಾರ್ಯನಿರ್ವಹಿಸಬೇಕು. ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸರ್ಕಾರದ ಪ್ರಯತ್ನಗಳಿಗೆ ಸಾರ್ವಜನಿಕರೂ ಕೈಜೋಡಿಸಬೇಕು ಎಂದು ಸಲಹೆ ನೀಡಿದರು.

3ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಸುರೇಂದ್ರ ಜಿ. ಮಾತನಾಡಿ, ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಹಾಗೂ ಅವರ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಶಿಕ್ಷಕರು ಹೆಚ್ಚಿನ ಆದ್ಯತೆ ನೀಡಬೇಕು. ಮಕ್ಕಳ ಶೈಕ್ಷಣಿಕ ಪ್ರಗತಿ, ವರ್ತನೆ, ಹಾಜರಾತಿ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಇದ್ದಕ್ಕಿದ್ದಂತೆ ಕಂಡುಬರುವ ಬದಲಾವಣೆಗಳನ್ನು ಶಿಕ್ಷಕರು ಸೂಕ್ಷ್ಮವಾಗಿ ಗಮನಿಸಬೇಕು ಎಂದು ಸಲಹೆ ನೀಡಿದರು.

ಮಕ್ಕಳು ದಿನದ ಹೆಚ್ಚಿನ ಸಮಯವನ್ನು ಶಾಲೆಯಲ್ಲಿಯೇ ಕಳೆಯುವುದರಿಂದ ಶಾಲೆಯ ವಾತಾವರಣ ಸುರಕ್ಷಿತ ಹಾಗೂ ಸ್ನೇಹಪರವಾಗಿರಬೇಕು. ಗುಡ್ ಟಚ್ ಮತ್ತು ಬ್ಯಾಡ್ ಟಚ್ ಕುರಿತು ನಿರಂತರ ಅರಿವು ಮೂಡಿಸುವುದು ಅತ್ಯಂತ ಮುಖ್ಯ ಎಂದರು.

ಸರ್ಕಾರಿ ಅಭಿಯೋಜನಾ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎಸ್.ರುದ್ರಪ್ರಸನ್ನ ಮಾತನಾಡಿ, ಶಿಕ್ಷಕರಿಗೆ ಸಮಾಜದಲ್ಲಿ ವಿಶೇಷ ಹಾಗೂ ಗೌರವಯುತ ಸ್ಥಾನವಿದೆ. ಶಿಕ್ಷಕರನ್ನು ದೇವರ ಸ್ಥಾನದಲ್ಲಿ ಕಾಣಲಾಗುತ್ತದೆ. ಆದ್ದರಿಂದ ಶಿಕ್ಷಕರ ಕರ್ತವ್ಯ ಕೇವಲ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವುದು, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸುವುದಕ್ಕೆ ಸೀಮಿತವಾಗಬಾರದು ಎಂದರು.

ವಕೀಲರ ಸಂಘದ ಅಧ್ಯಕ್ಷ ಸಿ.ಟಿ.ಜೋಸೆಫ್ ಅವರು ಮಾತನಾಡಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಕೊಡಗು ಜಿಲ್ಲಾ ಪೊಲೀಸ್ ಇಲಾಖೆಯ ಸೈಬರ್ ಕ್ರೈಂ ವಿಭಾಗದ ಜಿ.ಆರ್.ಅಜಯ್ ಅವರು ಸೈಬರ್ ಕ್ರೈಂ ಅಪರಾಧದ ಕುರಿತು ಮಾಹಿತಿ ನೀಡಿದರು. ಅಭಿಲಾಶ್ ಗೌಡ ಮೊಬೈಲ್ ಅಪ್ಲಿಕೇಶನ್ ಕುರಿತು ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ವಿವಿಧ ಶಾಲೆಯ ಶಿಕ್ಷಕರು ಇದ್ದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ನಿರೂಪಿಸಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾವೇರಿ ಸಂರಕ್ಷಣೆಗೆ ಯೋಜನೆ ರೂಪಿಸಿ: ರವಿಶಂಕರ್ ಗುರೂಜಿ
ಮಾದಕ ದ್ರವ್ಯ ಮುಕ್ತ ಭಾರತ ನಿರ್ಮಾಣಕ್ಕೆ ಜಾಗೃತಿ ಅಗತ್ಯ: ಡಾ. ಮಹಾಬಲ ಶೆಟ್ಟಿ