ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
ಕನ್ನಡಪ್ರಭ ವಾರ್ತೆ ಭದ್ರಾವತಿ
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭರವಸೆ ನೀಡಿದರು.
ತಾಲೂಕಿನ ಬಿ.ಆರ್.ಪಿ ಕರಾವಳಿ ಆಸ್ಪತ್ರೆ ಸಮೀಪದ ಬಯಲು ರಂಗ ಮಂದಿರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸರ್ಕಾರದ ಪಂಚ ಗ್ಯಾರಂಟಿ ಪ್ರಾಧಿಕಾರದ ಸಮಿತಿ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಯಾವುದೇ ಬಾಕಿ ಉಳಿಸಿಕೊಳ್ಳದೆ ಸಮರ್ಪಕವಾಗಿ ಅವರ ಖಾತೆಗಳಿಗೆ ಹಣ ಜಮಾ ಮಾಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಗುರಿ ಸಾಧಿಸಲಾಗುವುದು. ಉಳಿದಂತೆ ಶಕ್ತಿ ಯೋಜನೆಯನ್ನು ಬಹುತೇಕ ಮಹಿಳೆಯರು ಸದ್ಬಳಕೆ ಮಾಡಿಕೊಂಡಿದ್ದು, ಈ ಯೋಜನೆಯಲ್ಲೂ ಕ್ಷೇತ್ರದಲ್ಲಿ ಯಾವುದೇ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲಾಗುತ್ತಿದೆ. ಅಲ್ಲದೆ ಯೋಜನೆಗೆ ವ್ಯಯವಾಗಿರುವ ಸುಮಾರು ೩೦೦ ಕೋಟಿ ರು. ಅನುದಾನ ಸಹ ಸರ್ಕಾರದಿಂದ ಬಿಡುಗಡೆ ಮಾಡಿಸಲಾಗಿದೆ ಎಂದರು.
ಸುಮಾರು ೫೭ ಕೋ.ರು. ವೆಚ್ಚದಲ್ಲಿ ಈ ವ್ಯಾಪ್ತಿಯಲ್ಲಿ ಬರುವ ಸಿಂಗನಮನೆ, ನೆಲ್ಲಿಸರ, ಮಾಳೇನಹಳ್ಳಿ, ಗೋಣಿಬೀಡು, ಹುಣಸೇಕಟ್ಟೆ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಕೆರೆಗಳನ್ನು ನಿರ್ಮಾಣ ಮಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ ಜನವರಿ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್. ಮಣೆಶೇಖರ್, ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಸಿಂಗನಮನೆ ಗ್ರಾಮ ಪಂಚಾಯಿತಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು, ಪ್ರಿಯಾಂಕ ಗಣೇಶ್, ಮಾಲಾಗೌಡ, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.