ಭದ್ರಾವತಿಯಲ್ಲಿ ಅಂಬೇಡ್ಕರ್‌ ಜನ್ಮದಿನದಂದೇ ಭವನ ಉದ್ಘಾಟನೆ

KannadaprabhaNewsNetwork |  
Published : Apr 14, 2026, 01:45 AM IST
ಭದ್ರಾವತಿಯಲ್ಲಿ ನಿರ್ಮಾಣಗೊಂಡಿರುವ ನೂತನ ಡಾ. ಬಿ.ಆರ್ ಅಂಬೇಡ್ಕರ್ ಭವನ. | Kannada Prabha

ಸಾರಾಂಶ

ಕ್ಷೇತ್ರದಲ್ಲಿ ಸುಮಾರು ೪ ದಶಕಗಳ ಹೋರಾಟಕ್ಕೆ ಇದೀಗ ಫಲ ಲಭಿಸಿದ್ದು, ವಿಶ್ವಜ್ಞಾನಿ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಏ.14ರ ಮಂಗಳವಾರ ಉದ್ಘಾಟನೆಗೊಳ್ಳುತ್ತಿದೆ.

ಅನಂತಕುಮಾರ್

ಕನ್ನಡಪ್ರಭ ವಾರ್ತೆ ಭದ್ರಾವತಿ

ಕ್ಷೇತ್ರದಲ್ಲಿ ಸುಮಾರು ೪ ದಶಕಗಳ ಹೋರಾಟಕ್ಕೆ ಇದೀಗ ಫಲ ಲಭಿಸಿದ್ದು, ವಿಶ್ವಜ್ಞಾನಿ, ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಭವನ ಏ.14ರ ಮಂಗಳವಾರ ಉದ್ಘಾಟನೆಗೊಳ್ಳುತ್ತಿದೆ.

ದಲಿತ ಚಳವಳಿ ಹುಟ್ಟಿದ ನೆಲದಲ್ಲಿ ಅದರ ಮೂಲ ಪ್ರೇರಕ ಶಕ್ತಿ, ಜಗತ್ತಿನ ಶ್ರೇಷ್ಠ ಜ್ಞಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಡಾ.ಬಿ.ಆರ್.ಅಂಬೇಡ್ಕರ್‌ ಭವನದ ಕನಸು ಇದೀಗ ನನಸಾಗುತ್ತಿದೆ. ಕ್ಷೇತ್ರದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಬೇಕೆಂದು ವಿವಿಧ ದಲಿತಪರ ಸಂಘಟನೆಗಳು ಸುಮಾರು ೪ ದಶಕಗಳ ಹಿಂದೆ ಆರಂಭಿಸಿದ ಹೋರಾಟ ಇದೀಗ ಅಂತ್ಯಗೊಳ್ಳುವಂತಾಗಿದೆ.

ಆರಂಭದ ಹೋರಾಟದಲ್ಲಿ ಜಯ ಲಭಿಸಿದಾದರೂ ನಿರೀಕ್ಷೆಯಂತೆ ಸುಸಜ್ಜಿತ ಭವನ ನಿರ್ಮಾಣಗೊಳ್ಳಲಿಲ್ಲ. ಆರಂಭದಲ್ಲಿ ನಗರದ ಬಿ.ಎಚ್ ರಸ್ತೆ ಅಪ್ಪರ್ ಹುತ್ತಾ ರೈಲ್ವೆ ಕೆಳಸೇತುವೆ ಬಳಿ ಅತಿ ಚಿಕ್ಕದಾದ, ಗುಡಿಸಲಿನ ಮಾದರಿಯ ಭವನ ನಿರ್ಮಾಣಗೊಂಡಿತು. ಆದರೆ ಈ ಭವನವನ್ನು ಯಾರು ಸಹ ಅಂಬೇಡ್ಕರ್ ಭವನವೆಂದು ಸ್ವೀಕರಿಸಲು ಸಿದ್ದರಿರಲಿಲ್ಲ. ಈ ಹಿನ್ನಲೆಯಲ್ಲಿ ಈ ಭವನ ಸುಮಾರು ೪-೫ ವರ್ಷಗಳವರೆಗೆ ಪಾಳು ಬಿದ್ದಿತ್ತು. ನಂತರದ ದಿನಗಳಲ್ಲಿ ಈ ಭವನವನ್ನು ನಗರಸಭೆ ಆಡಳಿತ ಸಾರ್ವಜನಿಕ ಗ್ರಂಥಾಲಯಕ್ಕೆ ಬಿಟ್ಟುಕೊಡುವ ಮೂಲಕ ಇದರ ನಿರ್ವಹಣೆ ಜವಾಬ್ದಾರಿಯನ್ನು ಗ್ರಂಥಾಲಯ ಇಲಾಖೆಗೆ ವಹಿಸಿದೆ.

ದಲಿತ ಹೋರಾಟದಿಂದ ಜಾಗ ಹುಡುಕಾಟ:

ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಪುನಃ ದಲಿತಪರ ಸಂಘಟನೆಗಳು ಹೋರಾಟ ಮುಂದುವರಿಸಿದ ಪರಿಣಾಮ ನಗರಸಭೆ ವ್ಯಾಪ್ತಿಯಲ್ಲಿ ಜಾಗ ಹುಡುಕುವ ಪ್ರಕ್ರಿಯೆ ಆರಂಭಗೊಂಡಿತು. ಮೊದಲು ಹೊಸಮನೆ ಮುಖ್ಯರಸ್ತೆಯಲ್ಲಿರುವ ಹಳೇ ಸಂತೆ ಮೈದಾನದಲ್ಲಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಸಲಾಯಿತು. ಆದರೆ ಈ ಸ್ಥಳ ಸೂಕ್ತವಲ್ಲ ಬೇರೆಡೆ ನಿರ್ಮಿಸಬೇಕೆಂದು ಒತ್ತಾಯಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೈಬಿಡಲಾಯಿತು. ನಂತರ ಜಟ್‌ಪಟ್ ನಗರದಲ್ಲಿ ಭವನಕ್ಕೆ ಜಾಗ ಮಂಜೂರಾತಿ ಪಡೆದುಕೊಂಡರೂ ಈ ಜಾಗ ಸಹ ಸೂಕ್ತವಲ್ಲ ಎಂದು ಕೈಬಿಡಲಾಯಿತು. ಕೊನೆಯದಾಗಿ ತಾಲೂಕು ಕಚೇರಿ ರಸ್ತೆ(ಡಾ. ಪುನೀತ್ ರಾಜಕುಮಾರ್ ರಸ್ತೆ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗ ನಗರಸಭೆಗೆ ಸೇರಿದ ಖಾಲಿ ಜಾಗದಲ್ಲಿ ಭವನ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು. ೨೦೧೭ರಲ್ಲಿ ಅಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿಯವರು ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದರು. ಸುಮಾರು ೯ ವರ್ಷಗಳ ನಂತರ ಬಹುತೇಕ ಪೂರ್ಣಗೊಂಡು ಉದ್ಘಾಟನೆಗೊಳ್ಳುತ್ತಿದೆ.

ಅನುದಾನ ಬಿಡುಗಡೆಯಾದರೂ ಕಾಮಗಾರಿ ವಿಳಂಬ, ₹೪.೬೨ ಕೋಟಿ ವೆಚ್ಚ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಭವನ ನಿರ್ಮಿಸಲಾಗಿದೆ. ಆರಂಭದಲ್ಲಿ ಇಲಾಖೆಗೆ ಸರ್ಕಾರದಿಂದ ರು. ೧ ಕೋ. ಅನುದಾನ ಬಿಡುಗಡೆಗೊಂಡಿದ್ದು, ಈ ಅನುದಾನ ಬಳಸಿಕೊಂಡು ಮೊದಲ ಹಂತದ ಕಾಮಗಾರಿ ನಡೆಸಲಾಯಿತು. ಹೆಚ್ಚಿನ ಅನುದಾನ ಅಗತ್ಯತೆ ಹಿನ್ನಲೆಯಲ್ಲಿ ಪುನಃ ಇಲಾಖೆಗೆ ೧ ಕೋಟಿ ರು. ಅನುದಾನ ಸರ್ಕಾರದಿಂದ ಬಿಡುಗಡೆ ಮಾಡಲಾಗಿದೆ. ಇದರ ಜತೆಗೆ ನಗರಸಭೆ ವತಿಯಿಂದ ೫೦ ಲಕ್ಷ ರು. ಬಿಡುಗಡೆಗೊಳಿಸಲಾಗಿದೆ. ಅಲ್ಲದೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ೩೭.೩೭ ಲಕ್ಷ ರು. ಹಾಗೂ ಸಂಸದರ ನಿಧಿಯಿಂದ ೨೫ ಲಕ್ಷ ರು. ಸೇರಿದಂತೆ ಒಟ್ಟು ೩.೧೨ ಕೋ. ರು. ಅನುದಾನ ಲಭ್ಯವಾದರೂ ಸಹ ಭವನ ಪೂರ್ಣಗೊಳ್ಳಲಿಲ್ಲ. ಈ ನಡುವೆ ಸರ್ಕಾರ ಹೆಚ್ಚುವರಿಯಾಗಿ ಪುನಃ ೧.೫೦ ಕೋ.ರು. ಅನುದಾನ ಬಿಡುಗಡೆಗೊಳಿಸಿತ್ತು. ಆದರೂ ಸಹ ಕಾಮಗಾರಿ ಪೂರ್ಣಗೊಳಿಸುವಲ್ಲಿ ನಿರ್ಮಿತಿ ಕೇಂದ್ರ ವಿಳಂಬ ಧೋರಣೆ ಅನುಸರಿಸಿತ್ತು. ಈ ನಡುವೆ ಹೋರಾಟಗಳು ತೀವ್ರಗೊಂಡು ಭವನ ಕಾಮಗಾರಿ ಪೂರ್ಣಗೊಳಿಸುವಂತೆ ಎಚ್ಚರಿಸಿದ ಹಿನ್ನೆಲೆ ಇದೀಗ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೊಳ್ಳುತ್ತಿದೆ.

ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಉದ್ಘಾಟನೆ:

ಸಮಾಜವಾದಿ, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಪುತ್ರ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಡಾ. ಬಿ.ಆರ್ ಅಂಬೇಡ್ಕರ್ ಭವನ ಉದ್ಘಾಟಿಸುತ್ತಿದ್ದಾರೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ.ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಸಿ ಮಹಾದೇವಪ್ಪ, ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಇತರರು ಉಪಸ್ಥಿತರಿರುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಗಳಿಂದ ಸಾಮಾಜಿಕ, ಆರ್ಥಿಕ ಶಕ್ತಿ: ಸಿದ್ದು
ಪಶುವೈದ್ಯೆ ಸಮೀಕ್ಷಾ ಸಾವಿಗೆ ಕಾರಣವಾಗಿದ್ದ ನೀರಾನೆ ಸಾವು