ರಾಮನಗರ: ತೀವ್ರ ಕುತೂಹಲ ಕೆರಳಿಸಿದ್ದ ಬಿಡದಿ ಪುರಸಭೆಯನ್ನು ಜೆಡಿಎಸ್ ತನ್ನ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ನಿಂದ ಹರಿಪ್ರಸಾದ್, ಕಾಂಗ್ರೆಸ್‌ನಿಂದ ಬಿ.ರಾಮಚಂದ್ರಯ್ಯ ಹಾಗೂ ಬಿಸಿಎಂ(ಎ) ಮಹಿಳೆಗೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ನಿಂದ ಮಂಜುಳಾ, ಕಾಂಗ್ರೆಸ್‌ನಿಂದ ಬಿಂದ್ಯಾ ನಾಮಪತ್ರ ಸಲ್ಲಿಸಿದ್ದರು.
ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹರಿಪ್ರಸಾದ್ 15 ಮತ ಪಡೆದರೆ, ಪ್ರತಿಸ್ಪರ್ಧಿ ರಾಮಚಂದ್ರಯ್ಯ (9 ಮತ) ವಿರುದ್ಧ 6 ಮತ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಂಜುಳಾ 15 ಮತ ಪಡೆದು ಪ್ರತಿಸ್ಪರ್ಧಿ ಬಿಂದ್ಯಾ (9 ಮತ)ಅವರನ್ನು 6 ಮತಗಳ ಅಂತರದಿಂದ ಪರಾಭವಗೊಳಿಸಿದರು.ಈ ಚುನಾವಣೆಯಲ್ಲಿ ಬಿಜೆಪಿ ಸಂಸದ ಡಾ.ಮಂಜುನಾಥ್ ಜೆಡಿಎಸ್ ಪರ ಮತ ಚಲಾಯಿಸಿದರೆ, ಕಾಂಗ್ರೆಸ್ ಶಾಸಕ ಬಾಲಕೃಷ್ಣ ಗೈರಾಗಿದ್ದರು. ಫಲಿತಾಂಶ ಹೊರ ಬೀಳುತ್ತಿದ್ದಂತೆ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ತಹಸೀಲ್ದಾರ್ ತೇಜಸ್ವಿನಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಬಿಡದಿ ಪುರಸಭೆ ಅಧಿಕಾರ ಹಾಲಿ ಶಾಸಕ ಬಾಲಕೃಷ್ಣ ಮತ್ತು ಮಾಜಿ ಶಾಸಕ ಎ.ಮಂಜುನಾಥ್ ಅವರಿಗೆ ಪ್ರತಿಷ್ಠೆ ಪ್ರಶ್ನೆಯಾಗಿತ್ತು. ಜೆಡಿಎಸ್ ನಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದ ಕಾರಣ ಮೂವರಿಗೆ ತಲಾ 10 ತಿಂಗಳು ಅಧಿಕಾರ ಹಂಚಿಕೆ ಮಾಡಲಾಗಿದೆ. ಈ ಆಕಾಂಕ್ಷಿಗಳ ಪೈಕಿ ಯಾರಾದರು ಬಂಡಾಯ ಅಭ್ಯರ್ಥಿಯಾದಲ್ಲಿ ಅವರನ್ನು ಬೆಂಬಲಿಸಲು ಅಥವಾ ಅವರು ತಟಸ್ಥರಾಗಿ ಉಳಿದು ಕಾಂಗ್ರೆಸ್ ಅಭ್ಯರ್ಥಿಗೆ ಪರೋಕ್ಷವಾಗಿ ಬೆಂಬಲಿಸುವಂತೆ ಮಾಡಲು ಕಾಂಗ್ರೆಸ್ ರಣತಂತ್ರ ರೂಪಿಸಿತ್ತು. ಇದರ ಸುಳಿವು ಅರಿತ ಜೆಡಿಎಸ್ ನಾಯಕರು ಅಧಿಕಾರ ಹಂಚಿಕೆ ಸೂತ್ರ ಅನುಸರಿಸಿ ಸದಸ್ಯರಲ್ಲಿ ಯಾರೂ ಬಂಡಾಯ ಏಳದಂತೆ ಮನವೊಲಿಸುವಲ್ಲಿ ಯಶಸ್ವಿಯಾದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ನೂತನ ಅಧ್ಯಕ್ಷ - ಉಪಾಧ್ಯಕ್ಷರನ್ನು ಅಭಿನಂದಿಸಿದರು.
ಆನೆ ಬಲ ಬಂದಂತಾಗಿದೆ: ಎ.ಮಂಜುನಾಥ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷಕ್ಕೆ ಜನರು ಆಶೀರ್ವಾದ ಮಾಡಿ ಬಿಡದಿ ಪುರಸಭೆ ಆಡಳಿತ ನಡೆಸಲು ಅವಕಾಶ ನೀಡಿದ್ದರು. ಅವರ ನಿರೀಕ್ಷೆಯಂತೆ ಪಟ್ಟಣದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಲಿದ್ದಾರೆ ಎಂದರು.
ಬಾಕ್ಸ್..............
ರಾಮನಗರ: ಬಿಡದಿ ಪುರಸಭೆ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಜನರಿಗೆ ಮೂಲ ಸೌಲಭ್ಯ ಕಲ್ಪಿಸಿ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಂಸದ ಡಾ. ಮಂಜುನಾಥ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾಯಿತ ಪ್ರತಿನಿಧಿಗಳು ಆಡಳಿತ ನಡೆಸಿದಲ್ಲಿ ರಸ್ತೆ, ಚರಂಡಿ ನಿರ್ಮಾಣ, ಕುಡಿಯುವ ನೀರು ಪೂರೈಕೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸಲು ಅನುಕೂಲವಾಗಲಿದೆ ಎಂದರು.ನೂತನ ಅಧ್ಯಕ್ಷ - ಉಪಾಧ್ಯಕ್ಷರು ಜನೋಪಯೋಗಿ ಕೆಲಸಗಳನ್ನು ಮಾಡುವುದರ ಮೂಲಕ ಜನರ ಪ್ರೀತಿಗೆ ಪಾತ್ರರಾಗಬೇಕು. ಪಟ್ಟಣದ ಅಭಿವೃದ್ಧಿಗೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಮಂಜುನಾಥ್ ಭರವಸೆ ನೀಡಿದರು.
19ಕೆಆರ್ ಎಂಎನ್ 3.ಜೆಪಿಜಿಬಿಡದಿ ಪುರಸಭೆ ನೂತನ ಅಧ್ಯಕ್ಷ ಹರಿಪ್ರಸಾದ್ ಹಾಗೂ ಉಪಾಧ್ಯಕ್ಷೆ ಮಂಜುಳಾ ಅವರನ್ನು ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಅಭಿನಂದಿಸಿದರು.