ತುಮಕೂರಿಗೆ ರಾಜ್ಯ ಬಜೆಟ್‌ನಲ್ಲಿ ದೊಡ್ಡ ಕೊಡುಗೆ

KannadaprabhaNewsNetwork | Published : Feb 19, 2024 1:31 AM

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಅಭಿವೃದ್ಧಿಪರವಾದ ಉತ್ತಮ ಬಜೆಟ್ ಮಂಡನೆ ಮಾಡಿ ತುಮಕೂರು ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಶನಿವಾರ ನಗರದ ಬಿಜಿಎಸ್ ವೃತ್ತದಲ್ಲಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಅಭಿವೃದ್ಧಿಪರವಾದ ಉತ್ತಮ ಬಜೆಟ್ ಮಂಡನೆ ಮಾಡಿ ತುಮಕೂರು ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಶನಿವಾರ ನಗರದ ಬಿಜಿಎಸ್ ವೃತ್ತದಲ್ಲಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಗೌಡ, ಜಿಲ್ಲೆಯ ಸಚಿವರಾದ ಡಾ.ಜಿ. ಪರಮೇಶ್ವರ್‌, ಕೆ.ಎನ್. ರಾಜಣ್ಣ, ಶಾಸಕ ಟಿ.ಬಿ. ಜಯಚಂದ್ರ ಹಾಗೂ ಶಾಸಕರು ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ನೀಲಿ ನಕ್ಷೆ ಸಿದ್ಧಪಡಿಸಿ ಸರ್ಕಾರಕ್ಕೆ ನೀಡಿದ್ದು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಆ ಯೋಜನೆಗಳಿಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾದ ಮೆಟ್ರೋ ರೈಲು ಸೇವೆಯನ್ನು ಬೆಂಗಳೂರಿನಿಂದ ತುಮಕೂರು ನಗರಕ್ಕೆ ವಿಸ್ತರಿಸುವ ಯೋಜನೆ ಘೋಷಣೆ ಮಾಡಿದ್ದಾರೆ. ಬಜೆಟ್‌ನಲ್ಲಿ ತುಮಕೂರು ನಗರ ಪಾಲಿಕೆಗೆ 200 ಕೋಟಿ ರು.ಗಳ ಅನುದಾನ ಮೀಸಲಿಟ್ಟಿದ್ದಾರೆ. ವಸಂತನರಸಾಪುರದಲ್ಲಿ ಇಂಟಿಗ್ರೆಟೆಡ್ ಟೌನ್‌ಶಿಪ್ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಜೊತೆಗೆ ಎತ್ತಿನಹೊಳೆ, ಭದ್ರಾಮೇಲ್ದಂಡೆ ಯೋಜನೆಗಳಿಗೆ ಆದ್ಯತೆ ನೀಡಿ ಕುಡಿಯುವ ನೀರಿನ ಯೋಜನೆಗಳಿಗೆ ಹೆಚ್ಚು ಹಣ ಒದಗಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಮುಖ್ಯಮಂತ್ರಿಗಳುನ್ನು ಅಭಿನಂದಿಸಿದರು.

ಮುಖಂಡ ಇಕ್ಬಾಲ್ ಅಹ್ಮದ್ ಮಾತನಾಡಿ, ತುಮಕೂರು ನಗರದ ವೇಗವಾಗಿ ಬೆಳವಣಿಗೆ ಆಗುತ್ತಿದೆ. ತಕ್ಕಂತೆ ಪೂರಕ ಆಭಿವೃದ್ಧಿ ಕಾರ್ಯಗಳಿಗೆ ಸಿದ್ದರಾಮಯ್ಯ ಸರ್ಕಾರ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಿದೆ. ತುಮಕೂರಿಗೆ ಮೆಟ್ರೋ ಯೋಜನೆ ವಿಸ್ತರಿಸುವ ಮಹತ್ವದ ಯೋಜನೆಯನ್ನು ಘೋಷಿಸಿಲಾಗಿದೆ ಎಂದರು.

ಬಜೆಟ್‌ನಲ್ಲಿ ತುಮಕೂರು ಜಿಲ್ಲೆಗೆ ವಿಶೇಷ ಕೊಡುಗೆ ನೀಡಿದ್ದಾರೆ. 166.9ನೇ ಕಿ.ಮೀವರೆಗೆ ತುಮಕೂರು ಹೇಮಾವತಿ ನಾಲೆ ಆಧುನೀಕರಣಕ್ಕೆ ಆದ್ಯತೆ ನೀಡಲಾಗಿದೆ. ಶ್ರೀರಂಗ ಕುಡಿಯುವ ನೀರು ಯೋಜನೆಯ ಪೈಪ್‌ಲೈನ್ ಕಾಮಗಾರಿ, ಗುಬ್ಬಿ ತಾಲೂಕು ಮಠದಹಳ್ಳಿ ಹೇಮಾವತಿ ಕುಡಿಯು ನೀರಿನ ಯೋಜನೆ, ಮಧುಗಿರಿ ಏಕಶಿಲಾ ಬೆಟ್ಟಕ್ಕೆ ರೋಪ್ ವೇ ಅಳವಡಿಸಲು ಹಣ ಮೀಸಲಿಡಲಾಗಿದೆ ಎಂದು ಹೇಳಿದರು.

ವಸಂತನರಸಾಪುರದಲ್ಲಿ ಇಂಟಿಗ್ರೆಟೆಡ್ ಟೌನ್‌ಶಿಪ್, ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ತುಮಕೂರು ಮಹಾನಗರ ಪಾಲಿಕೆಗೆ 200 ಕೋಟಿ ರು., ಜಿಲ್ಲೆಯ ಪಟ್ಟಣಗಳಿಗೆ ಅಮೃತ ಯೋಜನೆಯಡಿ ಕುಡಿಯುವ ನೀರಿನ ಯೋಜನೆಗೆ ಬಜೆಟ್‌ನಲ್ಲಿ ಹಣ ಮೀಸಲಿಟ್ಟಿದ್ದಾರೆ ಎಂದು ಹೇಳಿದರು.

ನಗರ ಪಾಲಿಕೆ ಮಾಜಿ ಸದಸ್ಯರಾದ ಟಿ.ಎಂ. ಮಹೇಶ್, ನಯಾಜ್ ಅಹ್ಮದ್, ಇನಾಯತ್ ಉಲ್ಲಾ ಖಾನ್, ಮುಖಂಡರಾದ ವಾಲೆ ಚಂದ್ರಯ್ಯ, ತರುಣೇಶ್, ಪಿ. ಶಿವಾಜಿ, ಸುಜಾತಾ, ಕೆಂಪರಾಜು, ಉಬೇದ್, ರವಿ, ಮಂಜುನಾಥ್, ಆರೀಫ್, ಕವಿತಾ, ರೂಪಕಲಾ, ಭಾಗ್ಯ, ನಾಗಮಣಿ, ಯಶೋಧಾ, ಸಾಹೇನಾ ಮೊದಲಾದವರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share this article