ಕನ್ನಡಪ್ರಭ ವಾರ್ತೆ ಪುತ್ತೂರು
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ರಾಜ್ಯದಲ್ಲಿ ೧೨ ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ಅನಧಿಕೃತವೆಂದು ಗುರುತಿಸಿ ರದ್ದುಗೊಳಿಸಲು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಮೂಲಕ ಮುಂದಾಗಿದೆ ಎಂದು ತಿಳಿದು ಬದಿದೆ. ಬಡವರ ಬಿಪಿಎಲ್ ಕಾರ್ಡ್ ರದ್ದುಗೊಳಿಸದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಲಿದೆ ಎಂದು ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ.ಅವರು ವಿಧಾನ ಪರಿಷತ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಪುತ್ತೂರಿಗೆ ಆಗಮಿಸಿದ್ದ ಸಂದರ್ಭ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಉಡುಪಿ ಜಿಲ್ಲೆಯಲ್ಲಿ ಸುಮಾರು ೩೮ ಸಾವಿರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ೫೦ ಸಾವಿರ ಬಿಪಿಎಲ್ ಕಾರ್ಡ್‌ಗಳನ್ನು ಅನಧಿತೃತವೆಂದು ಗುರುತಿಸಲಾಗಿದೆ. ಶ್ರೀಮಂತರಲ್ಲಿ ಬಿಪಿಎಲ್ ಕಾರ್ಡ್‌ಗಳಿದ್ದರೆ ರದ್ದು ಮಾಡುವುದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಬಡವರಿಗೆ ಅನ್ಯಾಯ ಆಗಬಾರದು. ೧೨ ಲಕ್ಷ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಗೃಹಲಕ್ಷ್ಮೀಯ ಹಣವನ್ನು ಒಂದಷ್ಟು ಉಳಿತಾಯ ಮಾಡಬಹುದು ಎಂಬ ಲೆಕ್ಕಾಚಾರ ಸರ್ಕಾರದಲ್ಲಿದೆಯೇ ಎಂಬ ಅನುಮಾನವಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರ್, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ಕೋಡಿಬೈಲು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್, ಪುತ್ತೂರು ಕ್ಷೇತ್ರದ ಚುನಾವಣಾ ಉಸ್ತುವಾರಿಗಳಾದ ನಿತೀಶ್ ಕುಮಾರ್ ಶಾಂತಿವನ, ಸಂತೋಷ್ ರೈ ಹಾಜರಿದ್ದರು.