ಹೊಸದುರ್ಗ: ಕರ್ನಾಟಕ ಶೋಷಿತ ಸಮಯದಾಯಗಳ ಒಕ್ಕೂಟ ಹಾಗೂ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದವತಿಯಿಂದ ಚಿತ್ರದುರ್ಗದ ಬಸವ ಮೂರ್ತಿ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಜ.28ರ ಭಾನುವಾರದಂದು ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಆಯೋಜಿಸಲಾಗಿದ್ದು, ಅಂದು ತಾಲೂಕಿನಿಂದ ಅಹಿಂದಾ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟದ ಮುಖಂಡ ಬಿ.ಟಿ.ಜಗದೀಶ್ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶೋಷಿತರ ಜಾಗೃತಿ ಸಮಾವೇಶದ ಅಂಗವಾಗಿ ನಡೆದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯದ ಶೋಷಿತ ಸಮುದಾಯಗಳ ಸಚಿವರು, ಮುಖಂಡರು ಭಾಗವಹಿಸಲಿದ್ದಾರೆ. ಅಂದಾಜು 5 ಲಕ್ಷ ಸಾರ್ವಜನಿಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಎಚ್.ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಿ ಯಥವತ್ತಾಗಿ ಅಂಗೀಕರಿಸಿ ಅನುಷ್ಠಾನಗೊಳಿಸಬೇಕು. ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕೆ ಸಮೀಕ್ಷೆ ನಡೆಸಬೇಕು ಎಂದರು.ಅಹಿಂದ ಮುಖಂಡ ಮಧುರೆ ನಟರಾಜ್ ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರಿಗೆ ನೀಡಿದ ಶೇ.10ರಷ್ಟು ಮೀಸಲು ಸೌಲಭ್ಯ ರದ್ದುಪಡಿಸಬೇಕು. ಮಹಿಳಾ ಮೀಸಲಾತಿ ಕಾಯಿದೆಯನ್ನು ಜಾರಿಗೆ ತರಬೇಕು. ರಾಜಕೀಯ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ಮಹಿಳೆಯರಿಗೆ ಮೀಸಲಾತಿ ನೀಡಬೇಕು. ಜನಸಂಖ್ಯೆಗೆ ಅನುಗುಣವಾಗಿ ಶೇಕಡಾವಾರು ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲು ಸೌಲಭ್ಯ ವಿಸ್ತರಿಸಬೇಕು. ರಾಜಕೀಯದಲ್ಲಿ ಒಳಮೀಸಲು ಸೌಲಭ್ಯ ಕಲ್ಪಿಸಬೇಕು. ಹಿಂದುಳಿದ ಜಾತಿಗಳಿಗೆ ಹಾಗೂ ಅಲ್ಪಸಂಖ್ಯಾತರಿಗೆ ರಾಜಕೀಯ ಮೀಸಲಾತಿ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ನೀಡಬೇಕು ಎಂಬ ಬೇಡಿಕೆಗಳನ್ನು ಸಮಾವೇಶದಲ್ಲಿ ಮಂಡಿಸಲಾಗುವುದು ಎಂದರು.
ನಿಗಮ ಮಂಡಳಿ ಮಾಜಿ ಅಧ್ಯಕ್ಷ ಗೋ.ತಿಪ್ಪೇಶ್, ಕರ್ನಾಟಕ ಶೋಷಿತ ಜಾಗೃತಿಗಾಗಿ ಒಕ್ಕೂಟದ ಮುಖಂಡ ಸಿ.ಟಿ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಕಾರೇಹಳ್ಳಿ ಬಸವರಾಜ್, ಚಿತ್ರದುರ್ಗ ನಗರಸಭೆ ಮಾಜಿ ಅಧ್ಯಕ್ಷರಾದ ಎಚ್.ಮಂಜಪ್ಪ, ದುರ್ಗೇಶ್, ಕೆಪಿಸಿಸಿ ಸದಸ್ಯರಾದ ಎಂ.ಪಿ.ಶಂಕರ್, ಅಲ್ತಾಪ್ ಪಾಷ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ವೆಂಕಟೇಶ್, ಪುರಸಬೆ ಮಾಜಿ ಸದಸ್ಯ ರಾಮಚಂದ್ರಪ್ಪ, ತುಂಬಿನಕೆರೆ ಬಸವರಾಜ್ ಮತ್ತಿತರಿದ್ದರು.