ಬೆಂಗಳೂರು : ಅತಿವೇಗವಾಗಿ ದ್ವಿಚಕ್ರ ವಾಹನ ಚಲಾಯಿಸುವಾಗ ರಸ್ತೆ ಹಂಪ್ ಬಳಿ ನಿಯಂತ್ರಣ ಕಳೆದುಕೊಂಡು ಬಿದ್ದ ಪರಿಣಾಮ ಸವಾರ ಮೃತಪಟ್ಟಿರುವ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬಿಟಿಎಂ ಲೇಔಟ್‌ನ ಅರಕೆರೆ ನಿವಾಸಿ ಅರ್ಜುನ್ (20) ಮೃತ ಸವಾರ. ರಾಜಸ್ಥಾನ ಮೂಲದ ಅರ್ಜುನ್ ಕಳೆದ ಕೆಲ ವರ್ಷಗಳಿಂದ ಅರಕೆರೆಯಲ್ಲಿ ನೆಲೆಸಿದ್ದ. ನಗರದ ಖಾಸಗಿ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದನು ಕುಟುಂಬದವರು ರಾಜಸ್ಥಾನಕ್ಕೆ ತೆರಳಬೇಕಿದ್ದ ಹಿನ್ನೆಲೆಯಲ್ಲಿ ರೈಲು ಟಿಕೆಟ್ ಬುಕ್ ಮಾಡಲು ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ಮನೆಯಿಂದ ಜಯನಗರ ಬಿಡಿಎ ಸಂಕೀರ್ಣಕ್ಕೆ ಬರುವಾಗ ಮಾರ್ಗ ಮಧ್ಯೆ ಜಯನಗರ 7ನೇ ಬ್ಲಾಕ್‌ನ ಮಹಾವೀರ್ ಮಾರ್ಕೆಟ್ ಬಳಿ ಈ ಅಪಘಾತ ಸಂಭವಿಸಿದೆ.
ಅರ್ಜುನ್ ವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿದ್ದಾನೆ. ಈ ವೇಳೆ ರಸ್ತೆ ಹಂಪ್ ಎದುರಾಗಿದ್ದು, ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ನಿಯಂತ್ರಣ ಕಳೆದುಕೊಂಡು ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾನೆ. ಈ ಸಂಬಂಧ ಬನಶಂಕರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-ಖಾಸಗಿ ಬಸ್‌ಗೆ ಬೈಕ್ ಸವಾರ ಬಲಿ
ಬೆಂಗಳೂರು : ವೇಗವಾಗಿ ಬಂದ ಖಾಸಗಿ ಬಸ್ ಹಿಂದಿನಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಪೀಣ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಹಾಸನ ಮೂಲದ ಯೋಗೇಶ್ (21) ಮೃತ ಸವಾರ. ನೆಲಮಂಗಲದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಅಲ್ಲೇ ತಂಗಿದ್ದ.
ಭಾನುವಾರ ರಾತ್ರಿ 8.45ರ ಸುಮಾರಿಗೆ ದ್ವಿಚಕ್ರ ವಾಹನದಲ್ಲಿ ನೆಲಮಂಗಲ ಕಡೆಯಿಂದ ನಗರಕ್ಕೆ ಬರುತ್ತಿದ್ದ. ಜಾಲಹಳ್ಳಿ ಕ್ರಾಸ್ ಬಳಿ ಬರುವಾಗ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಏಕಾಏಕಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಸವಾರ ಯೋಗೇಶ್ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಘಟನೆ ಬಳಿಕ ಖಾಸಗಿ ಬಸ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವ ಚಾಲಕನ ಬಂಧನಕ್ಕೆ ಬಲೆ ಬೀಸಲಾಗಿದೆ. ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.