ಹುಟ್ಟುಹಬ್ಬ: ತಿರುಪತಿಯಲ್ಲಿ ದೇವೇಗೌಡರ ಪೂಜೆ

KannadaprabhaNewsNetwork | Updated : May 19 2025, 09:31 AM IST
Follow Us

ಸಾರಾಂಶ

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾನುವಾರ 93ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದು, ತಿರುಪತಿ ತಿರುಮಲ ಕ್ಷೇತ್ರಕ್ಕೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

  ಬೆಂಗಳೂರು : ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾನುವಾರ 93ನೇ ವಸಂತಕ್ಕೆ ಪಾದಾರ್ಪಣೆ ಮಾಡಿದ್ದು, ತಿರುಪತಿ ತಿರುಮಲ ಕ್ಷೇತ್ರಕ್ಕೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಳಗ್ಗೆಯೇ ತಿರುಮಲ ಕ್ಷೇತ್ರ ತಲುಪಿದ ಅವರನ್ನು ಟಿಟಿಡಿ ಅಧಿಕಾರಿಗಳು ಬರಮಾಡಿಕೊಂಡರು. ನಂತರ ಅವರು ವೆಂಕಟೇಶ್ವರ ಸ್ವಾಮಿಯ ದರ್ಶನ ಮಾಡಿ ಬೆಂಗಳೂರಿಗೆ ವಾಪಸಾದರು.

ಬಳಿಕ ಜೆಡಿಎಸ್‌ ಮುಖಂಡರು ಮತ್ತು ಕಾರ್ಯರ್ತರು ಪಕ್ಷದ ರಾಜ್ಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ತಮ್ಮ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಅವರು ಬೃಹತ್‌ ಕೇಕ್‌ ಕತ್ತರಿಸಿ ಸಂಭ್ರಮಿಸಿದರು.

ಗಣ್ಯರಿಂದ ಶುಭಾಶಯದ ಸುರಿಮಳೆ

ಇದೇ ವೇಳೆ ದೇವೇಗೌಡರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದ ಗಣ್ಯಾತಿಗಣ್ಯ ನಾಯಕರು ಜನ್ಮದಿನದ ಶುಭಾಶಯ ಕೋರಿದರು.

‘ನಮ್ಮ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರು ತಮ್ಮ ಮುತ್ಸದ್ದಿತನ ಮತ್ತು ಸಾರ್ವಜನಿಕ ಸೇವೆಯಿಂದಾಗಿ ವ್ಯಾಪಕವಾಗಿ ಗೌರವಿಸಲ್ಪಡುತ್ತಾರೆ. ಹಲವಾರು ವಿಷಯಗಳ ಕುರಿತು ಅವರ ಜ್ಞಾನ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ದೇವರು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ’ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದ ಮೂಲಕ ಹಾರೈಸಿದ್ದಾರೆ.

ರಾಜ್ಯಪಾಲರಾದ ಥಾವರಚಂದ್ ಗೆಹ್ಲೋತ್‌, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಸಚಿವ ಜಮೀರ್ ಅಹಮದ್ ಖಾನ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಮಾಜಿ ಪ್ರಧಾನಿಗಳಿಗೆ ಶುಭ ಕೋರಿದ್ದಾರೆ.

ಇದೇ ವೇಳೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಅವರು ದೇವೇಗೌಡ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.

Read more Articles on