ಜನಾದೇಶ ಸಹಿಸದೆ ಬಿಜೆಪಿಯಿಂದ ಆರೋಪ: ಮಂಜುನಾಥ ಗೌಡ

KannadaprabhaNewsNetwork |  
Published : Jul 15, 2025, 11:45 PM IST
ಬಳ್ಳಾರಿಯಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಯುವ ಕಾಂಗ್ರೆಸ್  ಕಾರ್ಯಕಾರಿಣಿ ಸಭೆಗೆ ಪಕ್ಷದ ಗಣ್ಯರು ಚಾಲನೆ ನೀಡಿದರು.  | Kannada Prabha

ಸಾರಾಂಶ

ಕಾಂಗ್ರೆಸ್‌ನ ಜನಪರ ಕೆಲಸನ್ನು ನೋಡಿ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಜನ ಈ.ತುಕಾರಾಂ ಅವರನ್ನು ಗೆಲ್ಲಿಸಿದ್ದಾರೆ. ಈ ಜನಾದೇಶ ಸಹಿಸಲಾಗದೆ ಬಿಜೆಪಿ ವಾಲ್ಮೀಕಿ ನಿಗಮ ಹಗರಣದ ಆರೋಪ ಮಾಡಿತು.

ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಕೆಪಿವೈಸಿಸಿ ರಾಜ್ಯಾಧ್ಯಕ್ಷ

ಕನ್ನಡಪ್ರಭ ವಾರ್ತೆ ಬಳ್ಳಾರಿ

ಕಾಂಗ್ರೆಸ್‌ನ ಜನಪರ ಕೆಲಸನ್ನು ನೋಡಿ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಜನ ಈ.ತುಕಾರಾಂ ಅವರನ್ನು ಗೆಲ್ಲಿಸಿದ್ದಾರೆ. ಈ ಜನಾದೇಶ ಸಹಿಸಲಾಗದೆ ಬಿಜೆಪಿ ವಾಲ್ಮೀಕಿ ನಿಗಮ ಹಗರಣದ ಆರೋಪ ಮಾಡಿತು. ಆದರೆ, ವಾಲ್ಮೀಕಿ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರಿಗೆ ಎಸ್‌ಐಟಿ ಕ್ಲೀನ್ ಚಿಟ್ ನೀಡಿದೆ. ಇಡಿ ದಾಳಿ ಮಾಡಿದರೂ ಯಾವುದೇ ಆಧಾರವಿಲ್ಲದೆ ಸುಳ್ಳು ಆರೋಪಪಟ್ಟಿ ಸಲ್ಲಿಸಿದ್ದಾರೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ (ಕೆಪಿವೈಸಿಸಿ) ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ತಿಳಿಸಿದರು.

ನಗರದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್ ಮತ್ತು ಡಾ. ಎನ್.ಟಿ. ಶ್ರೀನಿವಾಸ್ ಅವರ ಮೇಲೆ ಐಟಿ-ಇಡಿ ದಾಳಿ ನಡೆಸಿ ಕೇಂದ್ರದ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡಿದೆ. ಗಣಿ ಲೂಟಿ ಮಾಡಿದ ಜನಾರ್ದನ ರೆಡ್ಡಿ ಅವರ ಮೇಲೆ ಶಿಕ್ಷೆ ಪ್ರಕಟವಾಗಿದ್ದರೂ ಬಿಜೆಪಿಯವರು ಅವರನ್ನು ಹೊತ್ತು ಮೆರೆಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕರ ವಿರುದ್ಧ ವಿನಾಕಾರಣ ಐಟಿ, ಇಡಿ ದಾಳಿ ನಡೆಸಿ, ಕಾಂಗ್ರೆಸ್ ನಾಯಕರನ್ನು ಕುಗ್ಗಿಸುವ ಷಡ್ಯಂತ್ರ ನಡೆಸಿದೆ. ಆದರೆ, ಕಾಂಗ್ರೆಸ್ ನಾಯಕರು ಎಂದೂ ಕುಗ್ಗುವುದಿಲ್ಲ. ಯಾವುದೇ ತನಿಖಾ ಸಂಸ್ಥೆಗಳಿಗೆ ಜಗ್ಗದೆ ಜನಪರ ಹೋರಾಟಗಳನ್ನು ಮುಂದುವರಿಸುತ್ತಾರೆ ಎಂದು ಹೇಳಿದರು.

ಐತಿಹಾಸಿಕ ಬಳ್ಳಾರಿ ಜಿಲ್ಲೆಯು ಕಾಂಗ್ರೆಸ್‌ನ ಭದ್ರಕೋಟೆಯಾಗಿ ಮುಂದುವರಿಯಲಿದೆ. ಜಿಲ್ಲೆಯಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ. ಕಾಂಗ್ರೆಸ್‌ ಶಾಸಕರು ಹಾಗೂ ಸಂಸದರು ಜನಪರವಾಗಿ ಕಾರ್ಯನಿರ್ವಹಿಸುವ ಮೂಲಕ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಹತ್ತಿರವಾಗಿದ್ದಾರೆ ಎಂದರಲ್ಲದೆ, ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾಗಾಂಧಿ ಅವರು ಸ್ಪರ್ಧಿಸಿ ಗೆಲುವು ಪಡೆದಿದ್ದ ಬಳ್ಳಾರಿ ಜಿಲ್ಲೆಗೆ ಐತಿಹಾಸಿಕ ಹಿನ್ನಲೆಯಿದ್ದು ಈ ಜಿಲ್ಲೆಯ ಜನರು ಈ ಹಿಂದಿನಿಂದಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಚುನಾಯಿಸಿಕೊಂಡು ಬರುತ್ತಿದ್ದಾರೆ. ಹೀಗಾಗಿ ಬಳ್ಳಾರಿ ಜಿಲ್ಲೆ ಕಾಂಗ್ರೆಸ್‌ನ ಭದ್ರಕೋಟೆ ಎಂದೇ ಹೆಸರಾಗಿದೆ ಎಂದು ವಿಶ್ಲೇಷಿಸಿದರು.

ಕಾಂಗ್ರೆಸ್ ಹಿರಿಯ ಮುಖಂಡ ಕಲ್ಲುಕಂಬ ಪಂಪಾಪತಿ, ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್, ಎಲ್.ಮಾರೆಣ್ಣ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಶ್ರೀಕಾಂತ್ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಹಾಗೂ ಯುವ ಕಾಂಗ್ರೆಸ್‌ನ ಜಿಲ್ಲಾ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.ಬಳಿಕ ಜರುಗಿದ ಕಾರ್ಯಕಾರಿಣಿ ಸಭೆಯಲ್ಲಿ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವುದು, ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡುವುದು, ಪಕ್ಷದ ಸೈದ್ಧಾಂತಿಕ ನಿಲುವುಗಳು ಹಾಗೂ ಬಡವರ ಪರವಾದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕೆಲಸ ಪಕ್ಷದ ಯುವ ನಾಯಕರು ಹಾಗೂ ಕಾರ್ಯಕರ್ತರು ಮಾಡಬೇಕು. ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತಷ್ಟೂ ಸಂಘಟನಾತ್ಮಕವಾಗಿ ಗಟ್ಟಿಗೊಳ್ಳಬೇಕು. ಪಕ್ಷದಲ್ಲಿ ಯುವಕರ ಸಂಖ್ಯೆಯೂ ಹೆಚ್ಚಾಗಬೇಕು. ಈ ಹಿನ್ನೆಲೆ ಪಕ್ಷದ ಪದಾಧಿಕಾರಿಗಳು ಹೆಚ್ಚು ಸಂಘಟನಾತ್ಮಕ ಕೆಲಸದಲ್ಲಿ ತೊಡಗಿಸಿಕೊಳ್ಳಿ ಎಂದು ಮಂಜುನಾಥ ಗೌಡ ಕರೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ