ಹೊನ್ನಾವರ: ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ರಾಜ್ಯದ ಎಲ್ಲ ವರ್ಗದ ಮಹಿಳೆಯರಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಅನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಸರ್ವ ಪ್ರಯತ್ನ ಮಾಡೋಣ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಮಂಗಳವಾರ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿದ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಮಹಿಳೆಯರಿಗೆ ವಿಶೇಷ ಪ್ರಾಮುಖ್ಯತೆ ನೀಡುವುದಕ್ಕಾಗಿಯೇ ನನ್ನನ್ನು ಉತ್ತರಕನ್ನಡ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಿದ್ದು, ಗೆಲುವಿಗೆ ಶಕ್ತಿ ಮೀರಿ ಪ್ರಯತ್ನಿಸುವಂತೆ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್. ತೆಂಗೇರಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿರೋಧ ಪಕ್ಷಗಳು ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಹೊರಗಿನ ಅಭ್ಯರ್ಥಿಯೆಂದು ಅಪಪ್ರಚಾರ ಮಾಡುತ್ತಿರುವುದನ್ನು ಕಂಡರೆ ಅವರು ಈಗಾಗಲೇ ಸೋಲನ್ನು ಒಪ್ಪಿಕೊಂಡಂತಾಗಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿನಾಥ ಗಾಂವಕರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ ಮಾತನಾಡಿದರು.ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಲಂಭೋದರ ನಾಯ್ಕ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ ಮೇಸ್ತ ವಂದಿಸಿದರು. ವೇದಿಕೆಯಲ್ಲಿ ಪುಷ್ಫಲತಾ ಮಂಕಾಳು ವೈದ್ಯ, ಕೆಪಿಸಿಸಿ ಸದಸ್ಯ ಎಂ.ಎನ್. ಸುಬ್ರಮಣ್ಯ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಹಿರಿಯ ಮುಖಂಡ ರಾಮಾ ಮೊಗೇರ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಎಚ್. ನಾಯ್ಕ, ಡಿಸಿಸಿ ಕಾರ್ಯದರ್ಶಿ ಬಾಲಚಂದ್ರ ನಾಯ್ಕ ಮತ್ತು ರವಿ ಶೆಟ್ಟಿ, ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ ನಾಯ್ಕ, ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಜಕ್ರಿಯ್ಯಾ ಶೇಖ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಮಹೇಶ್ ಇನ್ನೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.