ಕನ್ನಡಪ್ರಭ ವಾರ್ತೆ ಕನಕಪುರ
ನಗರದ ಮೇಳೆಕೋಟಿ ಬಳಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಬಾಬಾ ಸಾಹೇಬರು ರಚಿಸಿದ ಸಂವಿಧಾನ ಜಾರಿಯಾಗಿ ಏಳು ದಶಕಗಳು ಕಳೆದರೂ ಸಹ ಆಳುವ ಸರ್ಕಾರಗಳು ದೇಶದ ಜನರಿಗೆ ಇನ್ನೂ ಮೂಲಭೂತ ಸೌಲಭ್ಯ ಕಲ್ಪಿಸಿಕೊಟ್ಟಿಲ್ಲ. ಜನರಿಗೆ ಉಚಿತ ಶಿಕ್ಷಣ,ಆರೋಗ್ಯ, ಉದ್ಯೋಗ ಹಾಗೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಬೇಕಾಗಿದ್ದ ಆಳುವ ಸರ್ಕಾರಗಳು ಕೇವಲ ತಮ್ಮ ಹಾಗೂ ತಮ್ಮ ಪಕ್ಷದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿವೆ ಎಂದು ಆರೋಪಿಸಿದರು.
ಈ ಕ್ಷೇತ್ರದಿಂದ ಮೂರು ಬಾರಿ ಸಂಸದರಾದ ಡಿ.ಕೆ. ಸುರೇಶ್ ಅವರು ಈ ಭಾಗದ ರೈತರ,ಬಡವರ ಪರವಾಗಿ ಶಾಶ್ವತವಾದ ಒಂದೇ ಒಂದು ಯೋಜನೆಯನ್ನು ಜಾರಿಗೆ ತಂದಿಲ್ಲ. ಆದರೆ ಈಗ ತಮ್ಮ ಚುನಾವಣಾ ಪ್ರಚಾರದಲ್ಲಿ ಕೋವಿಡ್ ಸಂದರ್ಭದಲ್ಲಿ ನಾನು ಯಾರೂ ಮಾಡದ ಕೆಲಸವನ್ನು ಮಾಡಿದ್ದೇನೆ ಎಂದು ಬರೀ ಪ್ರಚಾರ ತೆಗೆದುಕೊಳ್ಳುತ್ತಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ಸಹ ಕೋವಿಡ್ ವೇಳೆ ಅನಾಥ ಶವಗಳಿಗೆ ಮುಕ್ತಿ ನೀಡಿದ್ದಲ್ಲದೆ ಅವರ ಕುಟುಂಬಗಳಿಗೆ ತಮ್ಮ ಕೈಲಾದಷ್ಟು ನೆರವನ್ನು ನೀಡಿದ್ದು, ಆದರೆ ಇದನ್ನು ನಮ್ಮ ಚುನಾವಣಾ ಪ್ರಚಾರಕ್ಕೆ ಬಳಸಿ ಕೊಳ್ಳುವ ಹೀನಾಯ ಸ್ಥಿತಿಗೆ ತಲುಪಿಲ್ಲ ಎಂದರು.ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಮೇಕೆದಾಟು ಯೋಜನೆ ಜಾರಿ ಮಾಡುವುದಾಗಿ ಇಡೀ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಸಾವಿರಾರು ಜನರನ್ನು ಸೇರಿಸಿ ಪಾದಯಾತ್ರೆ ಎಂಬ ದೊಂಬರಾಟ ಮಾಡಿ, ಈಗ ಅವರದೇ ಸರ್ಕಾರವಿದ್ದರೂ ಮೌನವಾಗಿದ್ದು, ಕೇವಲ ಚುನಾವಣಾ ಪ್ರಚಾರಕ್ಕೆ ಮೇಕೆದಾಟು ಯೋಜನೆಯನ್ನು ಬಳಸಿಕೊಂಡರು ಎಂದು ದೂರಿದರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅನ್ನದಾನಪ್ಪ, ಜಿಲ್ಲಾಧ್ಯಕ್ಷ ಕೃಷ್ಣಪ್ಪ ಬಿಎಸ್ಪಿ ರಾಜ್ಯ ಉಸ್ತುವಾರಿ ಎಂ.ನಾಗೇಶ್, ಜಿಲ್ಲಾ ಸಂಯೋಜಕ ಉಮೇಶ್, ವೆಂಕಟಾಚಲ, ಜಿಲ್ಲಾ ಉಪಾಧ್ಯಕ್ಷ ಮಹದೇವ್, ಕಾರ್ಯದರ್ಶಿ ರಮೇಶ್, ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಕಾಂತರಾಜು ಸೇರಿ ಪಕ್ಷದ ಕಾರ್ಯಕರ್ತರು, ಮುಖಂಡರು ಭಾಗಿಯಾಗಿದ್ದರು.