ಲಕ್ಷ್ಮೇಶ್ವರ: ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಜ್ಯಪಾಲರ ಮೂಲಕ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಸ್ಥಿರಗೊಳಿಸುವ ಕಾರ್ಯ ಮಾಡುತ್ತಿರುವುದು ಖಂಡನೀಯ ಎಂದು ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ ಹೇಳಿದರು.
ಬಿಜೆಪಿ ಕೈಗೊಂಬೆಯಾಗಿರುವ ರಾಜ್ಯಪಾಲರು ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನ್ಯಾಯಾಂಗ ತನಿಖೆ ನಡೆಯಬೇಕು ಎಂದು ರಾಜ್ಯಪಾಲರು ಆದೇಶ ನೀಡಿರುವುದು ಖಂಡನೀಯ. ಗ್ಯಾರಂಟಿ ಮೂಲಕ ಜನ ಸಾಮಾನ್ಯರ ಬದುಕಿನಲ್ಲಿ ಹೊಸ ಭರವಸೆ ಮೂಡಿಸಿದ ಸಿದ್ದರಾಮಯ್ಯ ಮೇಲೆ ವಿನಾಕಾರಣ ಆರೋಪ ಹೊರಿಸಿ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಸರ್ಕಾರವನ್ನು ಕಿತ್ತೊಗೆಯುವ ಹುನ್ನಾರ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಕಳೆದ 40 ವರ್ಷಗಳಿಂದ ಆಡಳಿತ ನಡೆಸುತ್ತಿರುವ ಸರ್ಕಾರವನ್ನು ಉರುಳಿಸುವ ಹಗಲು ಕನಸು ಕಾಣುತ್ತಿರುವ ಬಿಜೆಪಿ ಪಕ್ಷದ ಕನಸು ನನಸಾಗಲು ಬಿಡುವುದಿಲ್ಲ. ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಜಿನಾಮೆ ನೀಡುವುದಿಲ್ಲ, ರಾಜ್ಯದ ಕಾಂಗ್ರೆಸ್ ಪಕ್ಷದ ೧೩೫ ಶಾಸಕರು ಬೆಂಬಲ ನೀಡುತ್ತಾರೆ, ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.ಈ ವೇಳೆ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಟಿ.ಈಶ್ವರ, ಚನ್ನಪ್ಪ ಜಗಲಿ, ವಿ.ಜಿ.ಪಡಗೇರಿ, ಶಿಗ್ಲಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಣ್ಣ ಲಮಾಣಿ, ಶೇಖಣ್ಣ ಕಾಳೆ, ನೀಲಪ್ಪ ಪಡಗೇರಿ, ಅಂಬರೀಷ್ ತೆಂಬದಮನಿ, ಫಕ್ಕೀರೇಶ ಮ್ಯಾಟಣ್ಣವರ, ಸೋಮಣ್ಣ ಬೆಟಗೇರಿ, ಭಾಗ್ಯಶ್ರೀ ಬಾಬಣ್ಣ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರ ರಾಜ್ಯಪಾಲರ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವ ಕಾರ್ಯ ಖಂಡನೀಯ, ರಾಜ್ಯಪಾಲರು ಬಿಜೆಪಿ ತಾಳಕ್ಕೆ ಕುಣಿಯುತ್ತಿರುವುದರಿಂದ ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು ಅಥವಾ ಅವರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಯಾಣಿಕರ ಪರದಾಟ:
ಪಟ್ಟಣದ ಶಿಗ್ಲಿ ಕ್ರಾಸ್ ಬಳಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರಿಂದ ಬಸ್ಸಿನಲ್ಲಿದ್ದ ದೂರದ ಊರುಗಳಿಗೆ ಹೋಗಬೇಕಾದ ಪ್ರಯಾಣಿಕರು ಪರದಾಡಿದ ಘಟನೆ ನಡೆಯಿತು.