ತೈಲ ದರ ಏರಿಕೆ ಖಂಡಿಸಿ ಬಿಜೆಪಿ ಸೈಕಲ್‌ ಜಾಥಾ

KannadaprabhaNewsNetwork |  
Published : Jun 21, 2024, 02:01 AM ISTUpdated : Jun 21, 2024, 08:03 AM IST
ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಅಶ್ವತ್ಥನಾರಾಯಣ, ಬಿಜೆಪಿ ಮುಖಂಡ ಸಿ.ಟಿ.ರವಿಯನ್ನು ಪೊಲೀಸರು ಬಂಧಿಸಿ ಕರೆದೊಯ್ದರು. | Kannada Prabha

ಸಾರಾಂಶ

ತೈಲ ದರ ಏರಿಕೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಸೈಕಲ್‌ ಜಾಥಾ ನಡೆಸಿ ಪ್ರತಿಭಟನೆ ಮಾಡಲಾಯಿತು.

 ಬೆಂಗಳೂರು :  ತೈಲ ದರ ಏರಿಕೆ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಸೈಕಲ್‌ ಜಾಥಾ ನಡೆಸಿ ಪ್ರತಿಭಟನೆ ಮಾಡಲಾಯಿತು.

ಬಿಜೆಪಿ ರಾಜ್ಯ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್‌ ಜಾಥಾ ನಡೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ಆರಂಭದಲ್ಲೇ ತಡೆದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಆದರೂ ಸೈಕಲ್‌ ಜಾಥಾ ಮುಂದುವರೆಸಲು ಮುಂದಾದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ರಾಜ್ಯ ಕಾಂಗ್ರೆಸ್‌ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ಖಂಡಿಸಿ ಇವತ್ತು ರಾಜ್ಯದಾದ್ಯಂತ ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ರಸ್ತೆ ತಡೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಸೈಕಲ್ ಜಾಥಾ ಮೂಲಕ ಸರ್ಕಾರವನ್ನು ಎಚ್ಚರಿಸುವ ಕೆಲಸ ನಡೆಯುತ್ತಿದೆ ಎಂದರು. ನಮ್ಮ ರಾಜ್ಯ ಸಂಕಷ್ಟದಲ್ಲಿದೆ. ರೈತರು ಸಹ ಸಂಕಷ್ಟದಲ್ಲಿದ್ದಾರೆ. ಕಳೆದ 6 ತಿಂಗಳಿನಿಂದ ರೈತರು ಬರಗಾಲದಿಂದ ಪರದಾಡುತ್ತಿದ್ದಾರೆ. ಮತ್ತೊಂದೆಡೆ ಸರ್ಕಾರದ ನಿರ್ಧಾರಗಳಿಂದ ಸಾಮಾನ್ಯ ಜನರ ಮೇಲೆ ಹೊರೆ ಆಗುತ್ತಿದೆ. ಇದು ಅಕ್ಷಮ್ಯ ಅಪರಾಧವಾಗಿದೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣ ದರ ಏರಿಕೆ, ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಬಗ್ಗೆ ಸಚಿವರು ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಪೆಟ್ರೋಲ್, ಡೀಸೆಲ್ ದರ ಏರಿಕೆಯ ನಿರ್ಧಾರ ರಾಜ್ಯದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಕಿಡಿಕಾರಿದ ಅವರು, ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದರು.

ರಸ್ತೆ ತಡೆ ಮಾಡಿದರೆ, ಲಾಠಿ ಚಾರ್ಜ್ ಮಾಡುವುದಾಗಿ ಗೃಹ ಸಚಿವರ ಹೇಳಿಕೆಯ ಕುರಿತ ಪ್ರಶ್ನೆಗೆ, ಅದು ಮೂರ್ಖತನದ ಪರಮಾವಧಿ. ಬಿಜೆಪಿ ಕಾರ್ಯಕರ್ತರು ಲಾಠಿಗೆ, ಯಾವುದಕ್ಕೂ ಹೆದರುವುದಿಲ್ಲ. ರಾಜ್ಯದ ಜನರು, ರೈತರು, ಬಡವರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮಾಡುವವರ ವಿರುದ್ಧ ಲಾಠಿ ಪ್ರಹಾರ ಮಾಡುವುದಾದರೆ ಇದು ದರ್ಪದ ಕ್ರಮ. ಅಧಿಕಾರದ ಅಹಂನಿಂದ ಈ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ಹೆದರುವ ಪ್ರಶ್ನೆಯೇ ಇಲ್ಲ. ಸರ್ಕಾರದ ಪೆಟ್ರೋಲ್- ಡೀಸೆಲ್ ದರ ಕಡಿಮೆ ಮಾಡುವ ವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ಪ್ರತಿಭಟನೆಯಲ್ಲಿ ಮಾಜಿ ಡಿಸಿಎಂ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ವಿಧಾನ ಪರಿಷತ್‌ ಸದಸ್ಯರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪಾಲಿಕೆ ಮಾಜಿ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ