ಬಿಜೆಪಿ ಪಾದಯಾತ್ರೆಗೆ ತಿರುಗೇಟು ನೀಡಲು ಕೈ ನಿರ್ಧಾರ

KannadaprabhaNewsNetwork |  
Published : Sep 04, 2026, 02:30 AM IST
ಬಳ್ಳಾರಿಯ ಎಸ್ಪಿ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿ | Kannada Prabha

ಸಾರಾಂಶ

ಇದೀಗ ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಬೃಹತ್‌ ಪ್ರಮಾಣದಲ್ಲಿ ಆಯೋಜಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ

ಮಂಜುನಾಥ ಕೆ.ಎಂ. ಬಳ್ಳಾರಿ

ಬಳ್ಳಾರಿ ನಗರದ ಎಸ್ಪಿ ವೃತ್ತದಲ್ಲಿರುವ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ರಾಜ್ಯ ಸಚಿವ ಸಂಪುಟ ಹಸಿರು ನಿಶಾನೆ ತೋರಿಸಿದ್ದು, ಇದನ್ನು ಅದ್ಧೂರಿ ಕಾರ್ಯಕ್ರಮವನ್ನಾಗಿ ರೂಪಿಸುವ ಮೂಲಕ ಬಿಜೆಪಿಯ ಪಾದಯಾತ್ರೆಗೆ ರಾಜಕೀಯವಾಗಿ ತಿರುಗೇಟು ನೀಡಲು ಕಾಂಗ್ರೆಸ್‌ ಸಜ್ಜಾಗಿದೆ.

ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ರಾಜ್ಯ ಸರ್ಕಾರದ ವಿವಿಧ ಧೋರಣೆ ಖಂಡಿಸಿ ಬಿಜೆಪಿ ಕೈಗೊಂಡಿರುವ ಪಾದಯಾತ್ರೆ ಸೆ. 10ರಂದು ಬಳ್ಳಾರಿಗೆ ತಲುಪಲಿರುವ ಹಿನ್ನೆಲೆಯಲ್ಲಿ ಪುತ್ಥಳಿ ಅನಾವರಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿರುವುದು ಗಣಿನಾಡಿನ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ವಾಲ್ಮೀಕಿ ನಿಗಮದ ಹಗರಣ ಬೆಳಕಿಗೆ ಬಂದ ಬಳಿಕ ಬಳ್ಳಾರಿ ಜಿಲ್ಲೆಯಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವಿನ ರಾಜಕೀಯ ಸಂಘರ್ಷ ತೀವ್ರಗೊಂಡಿದೆ. ಉಭಯ ಪಕ್ಷಗಳ ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪ, ವಾಕ್ಸಮರ ನಡೆಸುತ್ತಿದ್ದು, ಮಾಜಿ ಸಚಿವ ಹಾಗೂ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ರಾಜಕೀಯ ಜಿದ್ದಾಜಿದ್ದು ಮತ್ತಷ್ಟು ಹೆಚ್ಚಾಗಿದೆ.

ಇದೀಗ ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಬೃಹತ್‌ ಪ್ರಮಾಣದಲ್ಲಿ ಆಯೋಜಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ. ಸುಮಾರು 50 ಸಾವಿರ ಜನರನ್ನು ಸೇರಿಸಿ ಶಕ್ತಿ ಪ್ರದರ್ಶನ ನಡೆಸುವ ಉದ್ದೇಶ ಹೊಂದಿದ್ದು, ಕಾರ್ಯಕ್ರಮದ ದಿನಾಂಕ ಶೀಘ್ರದಲ್ಲೇ ಅಂತಿಮಗೊಳಿಸಲಾಗುತ್ತಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಇಡೀ ಸಚಿವ ಸಂಪುಟವೇ ಬಳ್ಳಾರಿಗೆ ಆಗಮಿಸುವ ಸಾಧ್ಯತೆ ಇದ್ದು, ಕಾರ್ಯಕ್ರಮವನ್ನು ಪಕ್ಷದ ಶಕ್ತಿ ಪ್ರದರ್ಶನದ ವೇದಿಕೆಯಾಗುವುದು ನಿಚ್ಚಳವಾಗಿದೆ.

ಬ್ಯಾನರ್‌ ಗಲಾಟೆ ಕಹಿ ನೆನಪು: ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ಸಂಬಂಧಿಸಿದಂತೆ ಬ್ಯಾನರ್‌ ಅಳವಡಿಸುವ ವಿಚಾರದಲ್ಲಿ 2026ರ ಜನವರಿಯಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಗಲಾಟೆ ಜಿಲ್ಲೆಯಲ್ಲಿ ರಾಜಕೀಯ ಬಿಸಿ ಹೆಚ್ಚಿಸಿತ್ತು. ಘಟನೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ ಎಂಬಾತ ಖಾಸಗಿ ಭದ್ರತಾ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿದ್ದ.

ಘಟನೆ ಬಳಿಕ ಶಾಸಕ ನಾರಾ ಭರತ್‌ ರೆಡ್ಡಿ ಅವರನ್ನು ಬಂಧಿಸಬೇಕು ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಆಗ್ರಹಿಸಿದ್ದರು. ಪ್ರಕರಣ ಸಂಬಂಧ ಉಭಯ ಪಕ್ಷಗಳ ನಾಯಕರ ನಡುವೆ ತೀವ್ರ ವಾಕ್ಸಮರವೂ ನಡೆದಿತ್ತು.

ಬ್ಯಾನರ್‌ ಗಲಾಟೆಗೆ ಸಂಬಂಧಿಸಿದಂತೆ ಬ್ರೂಸ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಆರು ಪ್ರಕರಣಗಳು ದಾಖಲಾಗಿದ್ದು, ಗನ್‌ಮ್ಯಾನ್‌ಗಳಾದ ಗುರುಚರಣ್‌ ಸಿಂಗ್‌, ಬಲ್ಜಿತ್‌ ಸಿಂಗ್‌ ಹಾಗೂ ಮಹೇಂದ್ರ ಸಿಂಗ್‌ ಸೇರಿದಂತೆ ಕಾಂಗ್ರೆಸ್‌ನ 10 ಮತ್ತು ಬಿಜೆಪಿಯ 11 ಕಾರ್ಯಕರ್ತರು ಸೇರಿ ಒಟ್ಟು 26 ಮಂದಿಯನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯ 25 ಜನ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು. ಬ್ಯಾನರ್ ಗಲಾಟೆ, ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಆರೋಪ, ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜಿನಾಮೆ ಈ ಎಲ್ಲ ರಾಜಕೀಯ ಬೆಳವಣಿಗೆಯಿಂದ ಬಳ್ಳಾರಿ ಜಿಲ್ಲೆ ರಾಜ್ಯಮಟ್ಟದಲ್ಲಿ ಹೆಚ್ಚು ಸದ್ದು ಮಾಡಿತ್ತು. ಏತನ್ಮಧ್ಯೆ ಪ್ರತಿಪಕ್ಷ ಬಿಜೆಪಿ ನಾಗೇಂದ್ರ ರಾಜಿನಾಮೆಗೆ ಒತ್ತಾಯಿಸಿ ಸದನದಲ್ಲಿ ಹೋರಾಟ ನಡೆಸಿದ ಫಲಿತ ಎಂಬಂತೆ ಸಚಿವ ಸ್ಥಾನಕ್ಕೆ ಶಾಸಕ ಬಿ. ನಾಗೇಂದ್ರ ರಾಜಿನಾಮೆಗೆ ನೀಡಿದ್ದು, ಇದು ಸರ್ಕಾರಕ್ಕೂ ಒಂದಷ್ಟು ಮುಜುಗರ ತಂದಂತಾಗಿದೆ.

ಈ ಎಲ್ಲ ಬೆಳವಣಿಗೆಗಳ ನಡುವೆಯೇ ನಡೆಯಲಿರುವ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಇದೀಗ ಬಳ್ಳಾರಿ ರಾಜಕೀಯದ ಮುಂದಿನ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗುವ ಲಕ್ಷಣಗಳಿವೆ.

ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣಕ್ಕೆ ಬೃಹತ್ ಕಾರ್ಯಕ್ರಮ ಆಯೋಜಿಸುತ್ತೇವೆ. 50 ಸಾವಿರಕ್ಕೂ ಅಧಿಕ ಜನರನ್ನು ಸೇರಿಸಿ ಅರ್ಥಪೂರ್ಣ ಸಮಾರಂಭ ಹಮ್ಮಿಕೊಳ್ಳಲಾಗುವುದು. ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಹಾಜರಾಗಲಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಡವರ್ಗಕ್ಕೆ ಗ್ಯಾರಂಟಿ ಯೋಜನೆ ವರದಾನ: ಪಿ.ಟಿ. ಪರಮೇಶ್ವರ ನಾಯ್ಕ
ಬಿಜೆಪಿ ಪಾದಯಾತ್ರೆ ಇಂದು ಕಾರಟಗಿ ಪ್ರವೇಶ