ಸರ್ಕಾರದ ವೈಫಲ್ಯ ಜನ್ರಿಗೆ ತಿಳಿಸಲು ಬಿಜೆಪಿ ನಿರ್ಧಾರ

KannadaprabhaNewsNetwork |  
Published : May 30, 2025, 12:17 AM ISTUpdated : May 30, 2025, 09:59 AM IST
bjp flag

ಸಾರಾಂಶ

ರಾಜ್ಯ ಸರ್ಕಾರದ ಬೆದರಿಕೆಗಳಿಗೆ ಮಣಿಯದೆ ಅದರ ವೈಫಲ್ಯಗಳ ವಿರುದ್ಧ ಪ್ರತಿಪಕ್ಷವಾಗಿ ಪ್ರಬಲ ಹೋರಾಟ ನಡೆಸುವ ನಿರ್ಣಯ ಕೈಗೊಂಡಿರುವ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ 

 ಬೆಂಗಳೂರು : ರಾಜ್ಯ ಸರ್ಕಾರದ ಬೆದರಿಕೆಗಳಿಗೆ ಮಣಿಯದೆ ಅದರ ವೈಫಲ್ಯಗಳ ವಿರುದ್ಧ ಪ್ರತಿಪಕ್ಷವಾಗಿ ಪ್ರಬಲ ಹೋರಾಟ ನಡೆಸುವ ನಿರ್ಣಯ ಕೈಗೊಂಡಿರುವ ರಾಜ್ಯ ಬಿಜೆಪಿಯ ಕೋರ್ ಕಮಿಟಿ ಸಭೆ, ಮುಂಬರುವ ಜಿ.ಪಂ. ಹಾಗೂ ತಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಪ್ರವಾಸ ನಡೆಸಲು ಹಿರಿಯ ನಾಯಕರ ನೇತೃತ್ವದಲ್ಲಿ ತಂಡಗಳನ್ನು ರಚಿಸಲು ತೀರ್ಮಾನಿಸಿದೆ.

ಗುರುವಾರ ಪಕ್ಷದ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್ ನೇತೃತ್ವದಲ್ಲಿ ನಡೆದ ರಾಜ್ಯದ ಹಿರಿಯ ನಾಯಕರನ್ನು ಒಳಗೊಂಡ ಕೋರ್ ಕಮಿಟಿ ಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಿರುಸಿನ ಹೋರಾಟ ನಡೆಸಲು ಒಮ್ಮತದ ಅಭಿಪ್ರಾಯ ವ್ಯಕ್ತವಾಯಿತು.

ರಾಜ್ಯ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ಹಮ್ಮಿಕೊಳ್ಳಬೇಕು ಎಂಬುದನ್ನು ನೀವೇ ನಿರ್ಧರಿಸಿ ಎಂಬ ಮಾತನ್ನು ಸಭೆಯಲ್ಲಿ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್‌ವಾಲ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ರಾಜ್ಯ ನಾಯಕರು ಹೋರಾಟದ ರೂಪುರೇಷೆ ಸಿದ್ಧಪಡಿಸಲಿದ್ದಾರೆ. ಜತೆಗೆ ಪ್ರವಾಸದ ರೂಪುರೇಷೆ ಸಿದ್ಧಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಸುದೀರ್ಘ ಚರ್ಚೆ:

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮುಂಬರುವ ಜಿ.ಪಂ. ಮತ್ತು ತಾ.ಪಂ. ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಸಂಘಟನಾತ್ಮಕ ವಿಚಾರಗಳನ್ನು ಚರ್ಚಿಸಿದ್ದೇವೆ. ಸಂಘಟನೆಯನ್ನು ಬಲಪಡಿಸುವುದು ಹಾಗೂ ಮುಂಬರುವ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸ ಮಾಡಿ ಸಂಘಟನೆಯನ್ನು ಬಲಪಡಿಸುವ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.

ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಇವತ್ತಿನ ಸಭೆಯಲ್ಲಿ ಎಲ್ಲ ಹಿರಿಯ ಸದಸ್ಯರು ಅಭಿಪ್ರಾಯ ನೀಡಿದ್ದಾರೆ. ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರ ಇದೆ ಎಂಬ ಕಾರಣದಿಂದ ಮದದಿಂದ ಮೆರೆಯುತ್ತಿದೆ. ನಮ್ಮ ಕಾರ್ಯಕರ್ತರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆಗಿದೆ. ನಂತರ ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರನ್ನು ಬಂಧಿಸುವ ಷಡ್ಯಂತ್ರ ನಡೆದಿದೆ. ಗುಲ್ಬರ್ಗದಲ್ಲಿ ನಮ್ಮ ದಲಿತ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಜೊತೆ ಗೂಂಡಾವರ್ತನೆ ತೋರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ, ವಿಧಾನಪರಿಷತ್ತಿನ ವಿಪಕ್ಷದ ಮುಖ್ಯ ಸಚೇತಕ ರವಿಕುಮಾರ್ ಅವರು ಭಾಷಣದಲ್ಲಿ, ಕೆಲವು ಮಾತುಗಳನ್ನು ಆಡಿದ್ದರು. ಬಳಿಕ ರವಿಕುಮಾರ್ ಅವರು ತಮ್ಮ ಮಾತಿಗೆ ವಿಷಾದವನ್ನೂ ವ್ಯಕ್ತಪಡಿಸಿದ್ದರು. ಅದರ ನಡುವೆ ಮೂರನೇ ವ್ಯಕ್ತಿ ಮೂಲಕ ದೂರು ಕೊಡಿಸಿದ್ದಾರೆ. ಎಫ್ಐಆರ್ ದಾಖಲಿಸಿ, ಅವಮಾನ ಹಾಗೂ ತೇಜೋವಧೆ ಮಾಡಲು ಮುಂದಾಗಿದ್ದಾರೆ. ರಾಜ್ಯ ಸರ್ಕಾರದ ಕುಮ್ಮಕ್ಕಿನಿಂದ ಇದು ನಡೆಯುತ್ತಿದೆ ಎಂದು ಟೀಕಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ಪ್ರತಿ ವಿಭಾಗಕ್ಕೆ ಒಂದು ತಂಡ ರಚಿಸಿ ಜಿಲ್ಲಾ ಪ್ರವಾಸ ಮಾಡುವ ಕುರಿತು ಯೋಜಿಸಲಾಗಿದೆ. ಈ ಜನವಿರೋಧಿ- ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದೇ ನಮ್ಮ ಮುಂದಿರುವ ಗುರಿ ಎಂದು ತಿಳಿಸಿದರು.

ಸಭೆಯಲ್ಲಿ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ನಾಯಕರಾದ ಬಿ.ವೈ.ವಿಜಯೇಂದ್ರ, ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಗೋವಿಂದ ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಬಿ.ಶ್ರೀರಾಮುಲು, ಸಿ.ಟಿ.ರವಿ, ನಿರ್ಮಲ್ ಕುಮಾರ್ ಸುರಾನ, ವಿಶೇಷ ಆಹ್ವಾನಿತರಾಗಿ ಛಲವಾದಿ ನಾರಾಯಣಸ್ವಾಮಿ, ನಂದೀಶ್ ರೆಡ್ಡಿ ಪಾಲ್ಗೊಂಡಿದ್ದರು. ಪ್ರಹ್ಲಾದ್ ಜೋಶಿ ಮತ್ತು ಆರ್.ಅಶೋಕ್ ಗೈರು ಹಾಜರಾಗಿದ್ದರು.

ಶಾಸಕರ ಉಚ್ಚಾಟನೆಗೆ ಕೋರ್ ಕಮಿಟಿ ಅಭಿನಂದನೆ:

ಪಕ್ಷ ವಿರೋಧ ಚಟುವಟಿಕೆಯಲ್ಲಿ ನಿರತರಾಗಿದ್ದ ಮೂವರು ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿರುವುದಕ್ಕೆ ಪಕ್ಷದ ವರಿಷ್ಠರಿಗೆ ಕೋರ್ ಕಮಿಟಿ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ನಮ್ಮೆಲ್ಲರ ಅಭಿಪ್ರಾಯದಂತೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎಸ್.ಟಿ.ಸೋಮಶೇಖರ್, ಶಿವರಾಮ ಹೆಬ್ಬಾರ್ ಅವರನ್ನು 6 ವರ್ಷ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಈ ಮೂವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂಬ ವಿಚಾರ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ಆಗಿತ್ತು. ಬಳಿಕ ಕೇಂದ್ರದ ವರಿಷ್ಠರ ಗಮನಕ್ಕೂ ಇದನ್ನು ತಂದಿದ್ದೆವು. ಹೀಗಾಗಿ, ಕೇಂದ್ರ ವರಿಷ್ಠರಿಗೆ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ವಿಜಯೇಂದ್ರ ತಿಳಿಸಿದರು.ಕೋಟ್‌

ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ಬೆದರಿಕೆ ಬಗ್ಗಬಾರದು; ಜಗ್ಗಬಾರದು. ಭಂಡ, ಬಡವರ ವಿರೋಧಿ, ರೈತ ವಿರೋಧಿ, ಭ್ರಷ್ಟ, ಗೂಂಡಾ ಕಾಂಗ್ರೆಸ್ ಸರ್ಕಾರದ ವಿರುದ್ಧ ಯಶಸ್ವಿಯಾಗಿ ಹೋರಾಟ ಮಾಡಲು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದೆ 

-ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ