ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಜಿಲ್ಲಾಡಳಿತ ಭವನದ ಎದುರು ಬಾಗಲಕೋಟೆ ವಿಧಾನಸಭೆ ಮತಕ್ಷೇತ್ರದ ಕಾರ್ಯಕರ್ತರು, ನಾಯಕರು, ಬಿಜೆಪಿ ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಾಗೂ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗಿದರು.
ಪ್ರತಿಭಟನಾ ಸಭೆ ಉದ್ದೇಶಿಸಿ ಸಂಸದ ಪಿ.ಸಿ.ಗದ್ದಿಗೌಡರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಜನರ ಹಿತದೃಷ್ಟಿಯಿಂದ ಹಾಗೂ ವಕ್ಫ್ ಮಂಡಳಿಯಲ್ಲಿ ಆಗುತ್ತಿರುವ ಅಕ್ರಮ ಗಮನದಲ್ಲಿಟ್ಟುಕೊಂಡು ವಕ್ಫ್ ಕಾಯ್ದೆಗೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿದೆ. ಜಂಟಿ ಸದನದಲ್ಲಿ ಪರಿಶೀಲನೆಯಲ್ಲಿದ್ದು ಈ ತಿದ್ದುಪಡಿ ಕಾಯ್ದೆ ಬಹುತೇಕ ಜಾರಿಯಾಗಲಿದೆ ಎಂದರು.ವಕ್ಫ್ ಬೋರ್ಡ್‌ನಿಂದ ಆಗುತ್ತಿರುವ ಗೊಂದಲ ರಾಜ್ಯದಲ್ಲಿನ ಸಾಮರಸ್ಯ ಹದಗೆಡುವುದಕ್ಕೆ ಕಾರಣವಾಗಿದೆ. ಸರ್ಕಾರದ ವಿವೇಚನೆಯಿಲ್ಲದೇ ಕೈಗೊಳ್ಳುವ ನಿರ್ಧಾರಗಳಿಂದಾಗಿ ರಾಜ್ಯದ ಅನೇಕ ಆಸ್ತಿಗಳ ವ್ಯಾಜ್ಯ ಬೀದಿಗೆ ಬರುತ್ತಿದೆ. ರಾಜ್ಯದ ರೈತರ ಹಿತದೃಷ್ಟಿಯಿಂದ ತಮ್ಮ ನಿಲುವು ತೆಗೆದುಕೊಳ್ಳಬೇಕಾಗಿದ್ದ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ದೃಷ್ಟಿಯಿಂದ ಸಂಪೂರ್ಣವಾಗಿ ಅವರ ಪರವಾಗಿ ನಿಂತಿದೆ ಎಂದು ದೂರಿದರು.
ರಾಜ್ಯದ ರೈತರ ಹಿತಕ್ಕೆ ಧಕ್ಕೆಯಾಗುವಂತಹ ಯಾವುದೇ ನಿರ್ಧಾರವನ್ನು ಕಾಂಗ್ರೆಸ್ ಸರ್ಕಾರ ಕೈಗೊಳ್ಳುವ ಮತ್ತು ಮತ ಬ್ಯಾಂಕ್ ಉಳಿಸಿಕೊಳ್ಳಲು ಮುಸ್ಲಿಂ ಓಲೈಕೆ ಹಾಗೂ ಹಿಂದೂ ವಿರೋಧಿ ನಿರ್ಣಯ ಕೈಗೊಳ್ಳುವ ತನ್ನ ಹಳೆ ಚಾಳಿ ಕೈಡಬೇಕು. ವಕ್ಫ್ ಬೋರ್ಡ್ ಸಾರ್ವಜನಿಕ ಆಸ್ತಿ ಕಬಳಿಸುವ ಹುನ್ನಾರಕ್ಕೆ ಸಚಿವ ಜಮೀರ್ ಅಹ್ಮದ್ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ದೂರಿದರು. ಸಿದ್ದರಾಮಯ್ಯನವರು ಅಧಿಕಾರಿಗಳ ಸಭೆ ನಡೆಸಿ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದು ಮಾಡದಂತೆ ತಾತ್ಕಾಲಿಕವಾಗಿ ತಡೆ ಹಿಡಿದಿರುವುದು ಕೇವಲ ಚುನಾವಣೆ ತಂತ್ರಗಾರಿಕೆಯಾಗಿದೆ ಎಂದು ಆರೋಪಿಸಿದರು.
ಬೇಡಿಕೆಗಳ ಆಗ್ರಹ:
ಬಸವರಾಜ ಯಂಕಂಚಿ, ರಾಜು ನಾಯ್ಕರ, ಲಕ್ಷ್ಮೀ ನಾರಾಯಣ ಕಾಸಟ್, ಜಿ.ಎನ್.ಪಾಟೀಲ, ಗುಂಡೂರಾವ್ ಸಿಂಧೆ, ಯಲ್ಲಪ್ಪ ಬೆಂಡಿಗೇರಿ, ಸತ್ಯನಾರಾಯಣ ಹೇಮಾದ್ರಿ, ಸವಿತಾ ಲೆಂಕೆಣ್ಣವರ, ಶೋಭಾ ರಾವ್, ಶಶಿಕಲಾ ಮಜ್ಜಗಿ, ವೀರಣ್ಣ ಹಳೇಗೌಡರ, ಪ್ರಭು ಹಡಗಲಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ, ಶಂಭುಗೌಡ ಪಾಟೀಲ, ಡಾ.ಶೇಖರ ಮಾನೆ, ಚಂದ್ರಕಾಂತ ಕೇಸನೂರ, ಸುರೇಶ ಮಜ್ಜಗಿ, ಶ್ರೀನಾಥ ಸಜ್ಜನ್, ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ ಪ್ರತಿಭಟನೆಯಲ್ಲಿದ್ದರು.