ಹಾವೇರಿ: ಸಚಿವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ಶುಕ್ರವಾರ ನಗರದ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ವಾಲ್ಮೀಕಿ ನಿಗಮದ ಹಣದ ಅಕ್ರಮ ವರ್ಗಾವಣೆ ರಾಜ್ಯದ ಜನರ ವಿಶ್ವಾಸಕ್ಕೆ ಧಕ್ಕೆ ತಂದಿರುವ ಗಂಭೀರ ಪ್ರಕರಣವಾಗಿದೆ. ಬಡವರು ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ ಬಳಕೆಯಾಗಬೇಕಿದ್ದ ಹಣ ದುರ್ಬಳಕೆಯಾಗಿರುವುದು ಖಂಡನೀಯ. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ಅಕ್ರಮವಾಗಿ ವರ್ಗಾವಣೆಯಾದ ಪ್ರತಿಯೊಂದು ರುಪಾಯಿಯನ್ನೂ ಸರ್ಕಾರದ ಬೊಕ್ಕಸಕ್ಕೆ ಮರಳಿ ತರಬೇಕು ಎಂದು ಆಗ್ರಹಿಸಿದರು.
ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಹಣದ ಅಕ್ರಮ ವರ್ಗಾವಣೆ ಆರೋಪ ಎದುರಿಸುತ್ತಿರುವ ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣದ ದುರ್ಬಳಕೆ ನಡೆದಿರುವ ಆರೋಪಗಳು ಸರ್ಕಾರದ ಆಡಳಿತ ವೈಖರಿಯನ್ನೇ ಪ್ರಶ್ನಿಸುವಂತಿವೆ. ನೈತಿಕ ಹೊಣೆ ಹೊತ್ತು ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ನೈತಿಕತೆ ಹಾಗೂ ಮಾನ-ಮರ್ಯಾದೆ ಇದ್ದರೆ ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಬಿಜೆಪಿ ಮುಖಂಡರ ಮನವಿ ಪತ್ರವನ್ನು ಸ್ವೀಕರಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು, ಅಕ್ರಮವಾಗಿ ವರ್ಗಾವಣೆಯಾದ ಹಣವನ್ನು ವಸೂಲಿ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.