ಮೋದಿ ಪರ, ಸಿದ್ದು ವಿರುದ್ಧ ಬಿಜೆಪಿ ಕಾರ್ಯಕಾರಿಣಿ ನಿರ್ಣಯ

KannadaprabhaNewsNetwork | Updated : Jul 05 2024, 11:13 AM IST

ಸಾರಾಂಶ

ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟು ಜನರು ಆತಂಕದಿಂದ ಇರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಬಿಜೆಪಿ ಕಾರ್ಯಕಾರಿಣಿಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

 ಬೆಂಗಳೂರು :  ನಗರದ ಅರಮನೆ ಮೈದಾನದಲ್ಲಿ ಗುರುವಾರ ನಡೆದ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹ್ಯಾಟ್ರಿಕ್‌ ಗೆಲುವಿನ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ ನಿರ್ಣಯ ಸೇರಿದಂತೆ ಎರಡು ನಿರ್ಣಯ ಮಂಡಿಸಿ ಅಂಗೀಕರಿಸಲಾಗಿದೆ.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ನಿರ್ಣಯ ಮಂಡಿಸಿದ್ದು, ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ದೊಡ್ಡನಗೌಡರು ಅನುಮೋದಿಸಿದ್ದಾರೆ. ಅಂತೆಯೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಅವರು ಮಂಡಿಸಿದ ಅಭಿವೃದ್ಧಿ ಶೂನ್ಯ, ಹಗರಣಗಳ ಕಾಂಗ್ರೆಸ್‌ ಸರ್ಕಾರ ತೊಲಗಿಸಲು ಕರೆ ಕೊಡುವ ಎರಡನೇ ನಿರ್ಣಯವನ್ನೂ ಸಭೆಯಲ್ಲಿ ಅಂಗೀಕರಿಸಲಾಗಿದೆ. ಇದರಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟು ಜನರು ಆತಂಕದಿಂದ ಇರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಖಂಡಿಸಿ, ಮುಖ್ಯಮಂತ್ರಿಗಳ ರಾಜೀನಾಮೆಗೆ ಈ ನಿರ್ಣಯದಲ್ಲಿ ಆಗ್ರಹಿಸಲಾಗಿದೆ.

ರೇಣುಕಾಸ್ವಾಮಿ ಸೇರಿ ಹಲವರಿಗೆ ಸಂತಾಪ:ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಇತ್ತೀಚೆಗೆ ಅಗಲಿದ ಪಕ್ಷದ ಪ್ರಮುಖರು, ಕಾರ್ಯಕರ್ತರು, ಅಪಘಾತಗಳಲ್ಲಿ ಮೃತಪಟ್ಟವರು, ಕೊಲೆಯಾದವರಿಗೆ ಒಂದು ನಿಮಿಷ ಮೌನಾಚರಿಸಿ ಸಂತಾಪ ಸೂಚಿಸಲಾಯಿತು.

ಮಾಜಿ ಶಾಸಕ ವಸಂತ ಬಂಗೇರಾ, ಭಾನು ಪ್ರಕಾಶ್‌, ಸಾಹಿತಿ ಕೆ.ಟಿ.ಗಟ್ಟಿ, ಕಮಲಾ ಹಂಪನಾ, ನಟ ದರ್ಶನ್‌ ಗ್ಯಾಂಗ್‌ನಿಂದ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ, ಫಯಾಜ್‌ನಂದ ಕೊಲೆಯಾದ ಹುಬ್ಬಳ್ಳಿಯ ನೇಹಾ ಹಿರೇಮಠ ಸೇರಿದಂತೆ ಹಲವರ ಸಾವಿಗೆ ಸಂತಾಪ ಸೂಚಿಸಲಾಯಿತು.

ಇದಕ್ಕೂ ಮುನ್ನ ಬೆಳಗ್ಗೆ ನಡೆದ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್‌ ದಾಸ್‌ ಅಗರ್ವಾಲ್‌, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಮೈಸೂರಿನ ಮುಡಾದಲ್ಲಿ ಮಾಡಿರುವ ಸುಮಾರು 4 ಸಾವಿರ ಕೋಟಿ ರು. ಮೌಲ್ಯದ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ, ಡಿಸಿಎಂ ಸ್ಥಾನಗಳಿಗೆ ಹಾದಿ-ಬೀದಿಯಲ್ಲಿ ಗಲಾಟೆಗಳು ನಡೆಯುತ್ತಿವೆ. ಈ ಸರ್ಕಾರ ಎಷ್ಟು ದಿನ ಜೀವಂತವಾಗಿ ಇರುವುದೋ ಗೊತ್ತಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಅವರದೇ ಪಕ್ಷದ ಶಾಸಕರಿಗೆ ಅಭಿವೃದ್ಧಿಗೆ ಹಣ ಸಿಗುತ್ತಿಲ್ಲ. ಹೀಗಾಗಿ ಪಕ್ಷದಲ್ಲಿ ಸಿಎಂ-ಡಿಸಿಎಂ ಬದಲಾವಣೆ ಕೂಗು ಎಬ್ಬಿದೆ. ಈ ಸರ್ಕಾರಕ್ಕೆ ಅಸ್ಥಿರತೆ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರದಲ್ಲಿ ಮುಂದುವರೆಯುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ನಮ್ಮ ಶಾಸಕರು ಉಬಯ ಸದನಗಳಲ್ಲಿ ಹೋರಾಟ ಮಾಡಿ ರಾಜ್ಯದ ಜನತೆಯ ಗಮನ ಸೆಳೆಯಬೇಕಿದೆ ಎಂದು ಹೇಳಿದರು.

ಸಂಜೆ ನಡೆದ ವಿಶೇಷ ಕಾರ್ಯಕಾರಣಿಯಲ್ಲಿ ಮಾತನಾಡಿದ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ, ರಾಜ್ಯದಲ್ಲಿ ರಸ್ತೆಗಳ ಅಭಿವೃದ್ಧಿಗಾಗಿ ಒಂದು ಲಕ್ಷ ಕೋಟಿ ರು. ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದ್ದು, ಭೂಸ್ವಾಧೀನ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದೆ ಎಂದು ಹೇಳಿದರು.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್‌ ಶೆಟ್ಟರ್, ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಸಂಸದ ಗೋವಿಂದ ಎಂ.ಕಾರಜೋಳ, ಮಾಜಿ ಸಚಿವರಾದ ಶ್ರೀರಾಮುಲು, ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಪಕ್ಷದ ಮುಖಂಡರು, ಸಂಸದರು, ಕಾರ್ಯಕರ್ತರು ಉಪಸ್ಥಿತರಿದ್ದರು.

Share this article