)
ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದ ಅರಮನೆ ಮೈದಾನದ ಗಾಯತ್ರಿ ಗ್ರ್ಯಾಂಡ್‌ನಲ್ಲಿ ನಡೆಯಲಿರುವ ಕಾರ್ಯಕಾರಿಣಿಯನ್ನು ಬೆಳಗ್ಗೆ 10.30ಕ್ಕೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಉದ್ಘಾಟಿಸಲಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯ ಉಸ್ತುವಾಗಿ ರಾಧಾಮೋಹನ್ ದಾಸ್ ಅಗರ್‌ವಾಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಪ್ರತಿಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ ಮತ್ತಿತರರು ಸೇರಿದಂತೆ ಸುಮಾರು 1250ಕ್ಕೂ ಹೆಚ್ಚು ಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ.ಸಂಘಟನೆ ಬಗ್ಗೆ ಚರ್ಚೆ:
ಮಂಗಳವಾರ ಕಾರ್ಯಕಾರಿಣಿ ನಡೆಯುವ ಗಾಯತ್ರಿ ಗ್ರ್ಯಾಂಡ್‌ನಲ್ಲಿ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಾಧ್ಯಕ್ಷ ವಿಜಯೇಂದ್ರ, ಮುಂದೆ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯಲಿದೆ. ಬಾಗೇಪಲ್ಲಿ ಉಪ ಚುನಾವಣೆ ಸಾಧ್ಯತೆಯೂ ನಿಚ್ಚಳವಾಗಿದೆ. ವಿಧಾನಪರಿಷತ್, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಬಿಎ ಚುನಾವಣೆಗಳು ನಡೆಯಲಿವೆ. ಮುಂದಿನ ಆರು ತಿಂಗಳು ಚುನಾವಣಾ ಪರ್ವ ಎನ್ನಬಹುದು. ಈ ನಿಟ್ಟಿನಲ್ಲಿ ಸಂಘಟನೆಯನ್ನು ಸಜ್ಜುಗೊಳಿಸುವುದರ ಬಗ್ಗೆ ಸಭೆಯಲ್ಲಿ ಸಮಗ್ರ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.ರಾಜ್ಯದ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಬಹುತೇಕ ಮೂರು ವರ್ಷ ತುಂಬುತ್ತಿದೆ. ಈ ಸರ್ಕಾರದ ವೈಫಲ್ಯತೆಗಳಿಂದ ಜನ ಬೇಸತ್ತಿದ್ದಾರೆ. ಇಂಥ ಭ್ರಷ್ಟ, ಬಡವರ ವಿರೋಧಿ, ರೈತ ವಿರೋಧಿ, ಯುವಜನತೆಯ ವಿರೋಧಿ ಸರ್ಕಾರವನ್ನು ಬುಡಸಮೇತ ಕಿತ್ತು ಹಾಕುವ ನಿಟ್ಟಿನಲ್ಲಿ ಬಹಳ ಗಂಭೀರ ಚರ್ಚೆಗಳು ನಡೆಯಲಿವೆ. ಹಲವು ನಿರ್ಣಯಗಳನ್ನೂ ನಾವು ಅಂಗೀಕರಿಸುತ್ತೇವೆ. ಜತೆಗೆ ಮುಂದಿನ ಸಂಘಟನೆಯ ಕುರಿತು ಚರ್ಚಿಸುತ್ತೇವೆ ಎಂದು ವಿವರಿಸಿದರು.