21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ

KannadaprabhaNewsNetwork | Published : Apr 7, 2025 12:32 AM

ಸಾರಾಂಶ

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಮುಖಂಡರು ಪಕ್ಷದ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಆಚರಿಸಲಾಯಿತು. ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಮುಖಂಡರು ಪಕ್ಷದ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ನಂತರ ಮಾತನಾಡಿದ ಶಾಸಕ ಜ್ಯೋತಿಗಣೇಶ್, ನಿಷ್ಠಾವಂತ ಕಾರ್ಯಕರ್ತರೇ ಬಿಜೆಪಿಯ ಬೆನ್ನೆಲುಬು. 1980ರಲ್ಲಿ ಸ್ಥಾಪನೆಯಾದ ಬಿಜೆಪಿ ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಆರಂಭದಲ್ಲಿ ಸಂಸತ್ತಿನಲ್ಲಿ ಬೆರಳೆಣಿಕೆಯಷ್ಟು ಬಿಜೆಪಿ ಸಂಸದರಿದ್ದರು. ಈಗ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವ ಮಟ್ಟದಲ್ಲಿ ಪಕ್ಷ ಬೆಳೆದಿದೆ. 21 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಈ ಬೆಳವಣಿಗೆಗ ಪಕ್ಷದ ತತ್ವ ಸಿದ್ಧಾಂತಗಳು, ಸಮರ್ಥ ನಾಯಕತ್ವ ಹಾಗೂ ನಿಷ್ಠಾವಂತ ಕಾರ್ಯಕರ್ತರು ಕಾರಣ ಎಂದರು.

ವಿಧಾನ ಪರಿಷತ್ ಸದಸ್ಯ ನವೀನ್ ಅವರು, ಬಿಜೆಪಿ ನಡೆದು ಬಂದ ಹಾದಿ ಹಾಗೂ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಮುಖಂಡರ ಸೇವೆ ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ಮಾತನಾಡಿ, 1980 ಏಪ್ರಿಲ್ 6ರಂದು ಬಿಜೆಪಿ ಸ್ಥಾಪನೆಯಾಯಿತು. ಅಟಲ್ ಬಿಹಾರಿ ವಾಜಪೇಯಿ ಅವರು ಬಿಜೆಪಿಯ ಮೊದಲ ರಾಷ್ಟೀಯ ಅಧ್ಯಕ್ಷರಾಗಿದ್ದರು. ಪಕ್ಷ ಅಸ್ತಿತ್ವಕ್ಕೆ ಬಂದ ನಂತರ ನಡೆದ ಮೊದಲ ಚುನಾವಣೆಯಲ್ಲಿ ತಿಪಟೂರು ತಾಲೂಕಿನ ಕಟ್ಟಿಗೇನಹಳ್ಳಿ ಸದಾಶಿವಯ್ಯ ಅವರು ಬಿಜೆಪಿ ಚಿಹ್ನೆಯಲ್ಲಿ ಸ್ಪರ್ಧಿಸಿ ಚುನಾಯಿತರಾದರು. ಇಡೀ ದೇಶದಲ್ಲಿ ಬಿಜೆಪಿಯ ಚಿಹ್ನೆ ಮೇಲೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆದ್ದ ಮೊದಲ ಅಭ್ಯರ್ಥಿಯಾಗಿದ್ದಾರೆ ಎಂದು ಹೇಳಿದರು.

ಅನೇಕ ಮಹನೀಯರು ಪಕ್ಷವನ್ನು ಕಟ್ಟಿಬೆಳೆಸಿದ್ದಾರೆ. ತನ್ನ ತತ್ವಸಿದ್ಧಾಂತಗಳ ಮೂಲಕ ಬಿಜೆಪಿ ದೇಶದ ಸುಭದ್ರತೆ, ಅಭಿವೃದ್ಧಿಗೆ ಬದ್ಧವಾಗಿದೆ. ಪ್ರಧಾನ ಮಂತ್ರಿಯವರು ಅನೇಕ ಯೋಜನೆಗಳನ್ನು ಜಾರಿಗೆ ತಂದು ಬಲಿಷ್ಠ ಭಾರತ ನಿರ್ಮಾಣಕ್ಕೆ ನೆರವಾಗಿದ್ದಾರೆ ಎಂದರು.

ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ವೇದಮೂರ್ತಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನವಚೇತನ್, ನಗರ ಅಧ್ಯಕ್ಷ ಧನುಷ್, ಎಸ್.ಸಿ.ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಜನಮೂರ್ತಿ, ಮುಖಂಡರಾದ ಟಿ.ಹೆಚ್.ಹನುಮಂತರಾಜು, ಸತ್ಯಮಂಗಲ ಜಗದೀಶ್, ವಸಂತಮ್ಮ ಮತ್ತಿತರ ಮುಖಂಡರು ಭಾಗವಹಿಸಿದ್ದರು.

Share this article