ರಾಜ್ಯಡೀಸೆಲ್, ಪೆಟ್ರೋಲ್ ದರ ಹೆಚ್ಚಳಕ್ಕೆ ಬಿಜೆಪಿ ಆಕ್ರೋಶ

KannadaprabhaNewsNetwork | Published : Jun 18, 2024 12:45 AM

ಸಾರಾಂಶ

ಡೀಸೆಲ್, ಪೆಟ್ರೋಲ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.

ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗಡೀಸೆಲ್, ಪೆಟ್ರೋಲ್ ದರ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಬಂದ ಪ್ರತಿಭಟನಾಕಾರರು ಒನಕೆ ಓಬವ್ವ ವೃತ್ತದಲ್ಲಿ ಸಭೆ ಮಾಡಿದರು. ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್, ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ರಾಜ್ಯದ ಜನತೆಯನ್ನು ಮರಳು ಮಾಡಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗ್ಯಾರೆಂಟಿಗಳನ್ನು ನೀಡಲು ಹಣವಿಲ್ಲದೆ ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಹೆಚ್ಚಿಸಿ ಬಡವರ ಮೇಲೆ ಹೊರೆ ಹೇರಿದ್ದಾರೆ. ಸ್ಟಾಂಪ್ ಡ್ಯೂಟಿ ಜಾಸ್ತಿಯಾಗಿದೆ. ಮದ್ಯದ ಬೆಲೆ ದುಬಾರಿಯಾಗಿದೆ. ಬಡವರ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ಪ್ರಯಾಣ ದರ ಸೇರಿದಂತೆ ಸಾಗಾಣಿಕೆ ವೆಚ್ಚ ಏರಿಕೆಯಾಗುತ್ತದೆ. ಓಟಿಗಾಗಿ ಗ್ಯಾರೆಂಟಿ ಯೋಜನೆಗಳನ್ನು ನೀಡಿರುವ ಸಿಎಂ ಸಿದ್ದರಾಮಯ್ಯನವರು ಈಗ ಹೆಣಗಾಡುತ್ತಿದ್ದಾರೆ. ಸಮಾಜಕ್ಕೆ ಕಂಟಕವಾಗಿರುವ ಈ ಸರ್ಕಾರ ಬೇಕಿಲ್ಲ. ತಕ್ಷಣವೇ ಬೆಲೆ ಏರಿಕೆ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.

ಬಿಜೆಪಿ ಎಸ್‌ಸಿ ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್‍ ಕಾರಜೋಳ ಮಾತನಾಡಿ, ಲೋಕಸಭೆ ಚುನಾವಣೆ ಮುಗಿವವರೆಗೆ ಸುಮ್ಮನಿದ್ದ ಸಿದ್ದರಾಮಯ್ಯ, ರಾಜ್ಯದ ಜನತೆ ಆಶೀರ್ವಾದ ಮಾಡದ ಕಾರಣ ತೈಲಗಳ ದರ ಹೆಚ್ಚಳ ಮಾಡಿದ್ದಾರೆ. ಇದು ರಾಜ್ಯದ ಜನತೆಗೆ ಮಾಡಿದ ದ್ರೋಹವಾಗಿದೆ ಎಂದರು.

ರೈತ ಮೋರ್ಚ ಜಿಲ್ಲಾಧ್ಯಕ್ಷ ವೆಂಕಟೇಶ್‍ ಯಾದವ್ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿ ಸಂಭ್ರಮಾಚರಣೆಯಲ್ಲಿರುವ ಬೆನ್ನಲ್ಲೆ ಸ್ಟಾಂಪ್ ಡ್ಯೂಟಿ, ಮದ್ಯದ ಬೆಲೆ ಹೆಚ್ಚಿಸಿ ಬಡವರಿಗೆ ಬರೆ ಎಳೆದಿದೆ. ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ಬೊಕ್ಕಸ ಖಾಲಿಯಾಗಿದ್ದರೂ ಸುಮ್ಮನೆ ಶೋ ಕೊಡುತ್ತಿದ್ದಾರೆ. ಡೀಸೆಲ್ 3.50 ರು. ಪೆಟ್ರೋಲ್ ಲೀಟರ್‌ಗೆ 3ರು. ಜಾಸ್ತಿ ಮಾಡಿ ಬಡವರು, ಶ್ರೀಸಾಮಾನ್ಯರ ಜೇಬಿಗೆ ಕತ್ತರಿ ಹಾಕಿದೆ. ರೈತರಿಗೆ ಬೀಜ, ರಸಗೊಬ್ಬರಗಳ ಕೊರತೆಯಿದೆ, ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರಣಿ ಕೊಲೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಇಳಿಯ ಬೇಕಾಗುತ್ತ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ರೈತ ಮೋರ್ಚ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಮಾಧ್ಯಮ ವಕ್ತಾರ ದಗ್ಗೆ ಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ನಾಗರಾಜ್ ಸಂಗಮ್, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ, ಉಪಾಧ್ಯಕ್ಷೆ ಶ್ಯಾಮಲ ಶಿವಪ್ರಕಾಶ್, ಬಸಮ್ಮ, ವೀಣ, ಕವನ, ರಜಿನಿ, ಕಿರಣ್, ಆದರ್ಶ, ವೀರೇಶ್, ಅಭಿಲಾಷ್ ಸೇರಿ ಅನೇಕರು ಪಾಲ್ಗೊಂಡಿದ್ದರು.

Share this article