ಕನ್ನಡಪ್ರಭ ವಾರ್ತೆ ಮಡಿಕೇರಿ
ಬಿಜೆಪಿ ಅವಧಿಯಲ್ಲಿ ಹದಗೆಟ್ಟಿದ್ದ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸರಿಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎರಡು ವರ್ಷಗಳನ್ನು ತೆಗೆದುಕೊಂಡಿದ್ದು, ರಾಜ್ಯ ಪ್ರಗತಿಯತ್ತ ಸಾಗುತ್ತಿದೆ. ಹೀಗಿದ್ದರೂ ಸರ್ಕಾರದ ವಿರುದ್ಧ ಸುಳ್ಳು ಅಪಾದನೆ ಮಾಡಿ ಬಿಜೆಪಿ ಜನರ ಹಾದಿ ತಪ್ಪಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅಸಮಾಧಾನ ವ್ಯಕ್ತಪಡಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರಿ ಪ್ರಮಾಣದ ಸಾಲವನ್ನು ಪಡೆದಿರುವುದಾಗಿ ಪ್ರತಿಪಕ್ಷ ಬಿಜೆಪಿ ರಾಜ್ಯದ ಜನತೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಯಮಗಳನ್ನು ಮೀರಿ 350 ಲಕ್ಷ ಕೋಟಿ ರು. ಸಾಲವನ್ನು ಮಾಡಲಾಗಿತ್ತು. ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಬಾರಿ 1.16 ಲಕ್ಷ ಕೋಟಿ ರು. ಸಾಲ ಪಡೆಯುವ ಉದ್ದೇಶವನ್ನು ಹೊಂದಿತ್ತು. ಆದರೆ ಪಡೆದದ್ದು 65 ಸಾವಿರ ಕೋಟಿ ರು. ಸಾಲ ಮಾತ್ರ ಎಂದರು.ಹಿಂದಿನ ಬಿಜೆಪಿ ಅವಧಿಯಲ್ಲಿ ಕಾಮಗಾರಿಗಳ ಗುತ್ತಿಗೆದಾರರಿಗೆ ನೀಡಲು 40 ಲಕ್ಷ ಕೋಟಿ ರು.ಗಳನ್ನು ಬಾಕಿ ಉಳಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 10 ಲಕ್ಷ ಕೋಟಿ ರು.ಗಳನ್ನು ಪಾವತಿ ಮಾಡಲಾಗಿದೆ ಎಂದರು.
ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ 65 ಸಾವಿರ ಕೋಟಿ ರು. ಒದಗಿಸಬೇಕಿದೆಯಾದರೂ, ನೀಡಿರುವುದು ಕೇವಲ ಶೇ.1ರಷ್ಟು. ಅಂದರೆ 4100 ಕೋಟಿ ಮಾತ್ರ. ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಜನಸಮುದಾಯಗಳನ್ನು ತಲುಪುವಂತಹ ಅತ್ಯುತ್ತಮವಾದ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು.ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ವಕ್ತಾರ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ ಹಾಗೂ ಜಿಲ್ಲಾ ಕಾಂಗ್ರೆಸ್ ಸದಸ್ಯ ಖಾಲಿದ್ ಸುದ್ದಿಗೋಷ್ಠಿಯಲ್ಲಿದ್ದರು.