ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಯಾವುದೇ ಕ್ಷೇತ್ರಗಳಲ್ಲಿ ನಿಂತರೂ ಗೆಲ್ಲುತ್ತಾರೆ. ಆದರೆ, ಇಲ್ಲಿನ ಜನರ ಒತ್ತಾಸೆಯಂತೆ ಮಂಡ್ಯದಿಂದ ಸ್ಪರ್ಧೆ ಮಾಡಿದ್ದಾರೆ. ಇಲ್ಲಿ ಸೇರಿರುವ ಎಲ್ಲರೂ ನಿಮ್ಮ ಕುಟುಂಬದವರು ಮತ ಹಾಕಿದರೆ ಕುಮಾರಸ್ವಾಮಿ ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದ ಬಿಎಸ್ ವೈ
ಮಂಡ್ಯ : ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಉದ್ದಗಲಕ್ಕೂ ಬಿಜೆಪಿ-ಜೆಡಿಎಸ್ ಅಲೆ ಎದ್ದಿರುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸದಿಂದ ಹೇಳಿದರು.
ಗುರುವಾರ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಜೆಡಿಎಸ್-ಬಿಜೆಪಿ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ, ಡಾ.ಸಿ.ಎನ್.ಮಂಜುನಾಥ್ ಸೇರಿ ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಒಂದು ಸುಳ್ಳಿನ ಸರ್ಕಾರ. ಹಣ ಬಲ, ಹೆಂಡ ಬಲದಿಂದ ಚುನಾವಣೆಯಲ್ಲಿ ಗೆಲ್ಲುತ್ತೇವೆ ಎಂದುಕೊಂಡಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ. ಜನರು ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕಡೆ ಹೆಚ್ಚಿನ ಒಲವನ್ನು ಹೊಂದಿದ್ದಾರೆ. ಹಿಂದಿನ ಮೈತ್ರಿ ಆಡಳಿತದ ಅವಧಿಯಲ್ಲಿನ ಅಭಿವೃದ್ಧಿ ಕೆಲಸಗಳ ಮೇಲೆ ವಿಶ್ವಾಸವಿಟ್ಟಿದ್ದಾರೆ ಎಂದು ಹೇಳಿದರು.
ಎಚ್.ಡಿ.ಕುಮಾರಸ್ವಾಮಿ ಅವರು ರಾಜ್ಯದ ಯಾವುದೇ ಕ್ಷೇತ್ರಗಳಲ್ಲಿ ನಿಂತರೂ ಗೆಲ್ಲುತ್ತಾರೆ. ಆದರೆ, ಇಲ್ಲಿನ ಜನರ ಒತ್ತಾಸೆಯಂತೆ ಮಂಡ್ಯದಿಂದ ಸ್ಪರ್ಧೆ ಮಾಡಿದ್ದಾರೆ. ಇಲ್ಲಿ ಸೇರಿರುವ ಎಲ್ಲರೂ ನಿಮ್ಮ ಕುಟುಂಬದವರು ಮತ ಹಾಕಿದರೆ ಕುಮಾರಸ್ವಾಮಿ ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತಾರೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಅವಧಿಯಲ್ಲಿ ರೈತರಿಗೆ ಕೊಡುತ್ತಿದ್ದ ನಾಲ್ಕು ಸಾವಿರ ರು. ನಿಲ್ಲಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಕೊಡುತ್ತಿದ್ದ ಭಾಗ್ಯಲಕ್ಷ್ಮೀ ಯೋಜನೆ, ವಿದ್ಯಾನಿಧಿ ಯೋಜನೆಯನ್ನು ನಿಲ್ಲಿಸಿದ್ದಾರೆ. ಇದರಿಂದ ರೈತರಿಗೆ, ಬಡ ಹೆಣ್ಣು ಮಕ್ಕಳಿಗೆ, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಈ ಯೋಜನೆಗಳನ್ನು ಏಕೆ ನಿಲ್ಲಿಸಿದಿರಿ ಎಂದು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದರು.
96 ರ ಇಳಿ ವಯಸ್ಸಿನಲ್ಲಿ ದೇವೇಗೌಡರು ರೈತರ ಬದುಕಿನ ರಕ್ಷಣೆಗಾಗಿ ಓಡಾಡುತ್ತಿದ್ದಾರೆ. ಮೋದಿಯವರು ಒಂದು ದಿನ ವ್ಯರ್ಥ ಮಾಡದೇ ಕೆಲಸ ಮಾಡುತ್ತಿದ್ದಾರೆ. ಅದಕ್ಕಾಗಿ ಜನರು ನಿರ್ಧಾರ ಮಾಡಿ ಅಭಿವೃದ್ಧಿ ಪರವಾಗಿರುವವರನ್ನು ಆಯ್ಕೆ ಮಾಡಬೇಕು ಎಂದು ಕಿವಿಮಾತು ಹೇಳಿದರು.