ಕನ್ನಡಪ್ರಭ ವಾರ್ತೆ ಬೆಂಗಳೂರು
ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ದೇಶದೆಲ್ಲೆಡೆ ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕರೆ ಮೇರೆಗೆ ಭಾನುವಾರ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿಜೆಪಿ ಮುಖಂಡರು ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಶಿಕಾರಿಪುರದ ಹುಚ್ಚೂರಾಯಸ್ವಾಮಿ ದೇಗುಲದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಸ್ವಚ್ಛತಾ ಕಾರ್ಯ ನಡೆಸಿದರೆ, ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬೆಂಗಳೂರಿನ ಜಯನಗರ 4ನೇ ಹಂತದ ಗಣೇಶ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಸಂಸದರಾದ ಮುನಿಸ್ವಾಮಿ, ಶಾಸಕ ಕೆ.ಸಿ. ರಾಮಮೂರ್ತಿ, ಮುಖಂಡರು, ಕಾರ್ಯಕರ್ತರು ಸಾಥ್ ನೀಡಿದರು.
ಮಾಜಿ ಸಚಿವ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬೆಂಗಳೂರಿನ ಮಲ್ಲೇಶ್ವರದ ಕೋದಂಡರಾಮ ದೇವಸ್ಥಾನದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಮತ್ತಿತರರು ಈ ವೇಳೆ ಇದ್ದರು.
ಅದೇ ರೀತಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಭುವನಗಿರಿ ಶ್ರೀಭುವನೇಶ್ವರಿ ದೇಗುಲದ ಆವರಣದಲ್ಲಿ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಹಳೆ ಹುಬ್ಬಳ್ಳಿಯಲ್ಲಿರುವ ಭವಾನಿ ಶಂಕರ ದೇವಸ್ಥಾನದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಶಿವಮೊಗ್ಗ ನಗರದ ಅರಕೇಶ್ವರ ದೇಗುಲದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಎಸ್.ಎನ್.ಚನ್ನಬಸಪ್ಪ, ತೀರ್ಥಹಳ್ಳಿಯ ಶ್ರೀರಾಮೇಶ್ವರ ದೇಗುಲದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ, ದಾವಣಗೆರೆಯ ಶ್ರೀ ಕೇದಾರಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಆವರಣದಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಇತರರು ಸ್ವಚ್ಛತಾ ಕಾರ್ಯ ನಡೆಸಿದರು. ಇದೇ ರೀತಿ ರಾಯಚೂರು ಸೇರಿ ರಾಜ್ಯದ ವಿವಿಧೆಡೆಯೂ ದೇಗುಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.