
ಕಾರವಾರ: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟದಿಂದ ತಕ್ಷಣವೇ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ, ಸುಮಾರು ₹187 ಕೋಟಿ ಬೃಹತ್ ಹಗರಣದ ಆರೋಪ ಹೊತ್ತಿರುವ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ರಾಜ್ಯದ ಜನತೆಗೆ ಎಸಗಿದ ದ್ರೋಹ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರಕರಣದಲ್ಲಿ ಉಚ್ಚ ನ್ಯಾಯಾಲಯವು ಕೇವಲ ತಡೆಯಾಜ್ಞೆ ನೀಡಿದೆಯೇ ಹೊರತು ಆರೋಪಿಯನ್ನು ಖುಲಾಸೆಗೊಳಿಸಿಲ್ಲ. ಲೋಕಾಯುಕ್ತದಲ್ಲಿ ಇನ್ನೂ ಅನೇಕ ಪ್ರಕರಣಗಳು ವಿಚಾರಣೆಯ ಹಂತದಲ್ಲಿವೆ. ಹೀಗಿದ್ದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆರೋಪಿಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಇಡೀ ಅವ್ಯವಹಾರದ ಹಿಂದೆ ಸರ್ಕಾರದ ಪ್ರಭಾವಿ ನಾಯಕರ ಕೈವಾಡವಿರುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಅವರು ಟೀಕಿಸಿದರು.ಭಟ್ಕಳ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಸುನೀಲ್ ನಾಯ್ಕ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಭ್ರಷ್ಟಾಚಾರದ ಅಡ್ಡೆಗಳಾಗಿವೆ ಎಂದು ಆರೋಪಿಸಿದರು. ಗೃಹಲಕ್ಷ್ಮಿ ಯೋಜನೆಯಲ್ಲಿ ಸುಮಾರು 5 ಸಾವಿರ ಕೋಟಿ ರುಪಾಯಿಗಳ ಭಾರಿ ಅವ್ಯವಹಾರ ನಡೆದಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಹಣದ ಹಂಚಿಕೆಯಲ್ಲಿನ ಲೋಪಗಳನ್ನು ಒಪ್ಪಿಕೊಂಡಿದ್ದಾರೆ. ಇನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತರಿಗೆ ನೀಡಲಾಗುತ್ತಿದ್ದ ಕಿಸಾನ್ ಸನ್ಮಾನ್ ಯೋಜನೆಯ ರಾಜ್ಯದ ಪಾಲನ್ನು ಈ ಸರ್ಕಾರ ನಿಲ್ಲಿಸಿ ಅನ್ನದಾತನಿಗೆ ಅನ್ಯಾಯ ಮಾಡಿದೆ. ಉಚಿತ ವಿದ್ಯುತ್ ನೀಡುವುದಾಗಿ ನಂಬಿಸಿ ಈಗ ಮರುಪರಿಶೀಲನೆಯ ಹೆಸರಿನಲ್ಲಿ ಜನರಿಗೆ ವಂಚಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದರು.
ಈ ಹೋರಾಟದ ಮುಂದುವರಿದ ಭಾಗವಾಗಿ ಶನಿವಾರ ಕುಮಟಾ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಹಾಗೂ ಸೋಮವಾರ ಹಳಿಯಾಳ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರೊಂದಿಗೆ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಸಚಿವರು ಸಂಪುಟದಿಂದ ಹೊರಹೋಗುವ ತನಕ ಧರಣಿ ಮುಂದುವರಿಯಲಿದೆ ಎಂದು ಮುಖಂಡರು ಎಚ್ಚರಿಕೆ ನೀಡಿದರು.