ಬಳ್ಳಾರಿ: ಬ್ಯಾನರ್ ಗಲಭೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಪ್ರಕರಣದ ಪ್ರಮುಖ ಆರೋಪಿ ಶಾಸಕ ನಾರಾ ಭರತ್ ರೆಡ್ಡಿ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ನಗರದ ಎಪಿಎಂಸಿ ಬಳಿ ಬಿಜೆಪಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸಮಾವೇಶಕ್ಕೆ ವೇದಿಕೆ ಸಜ್ಜುಗೊಳಿಸಲಾಗಿದ್ದು, ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್, ಶಾಸಕ ಜನಾರ್ದನ ರೆಡ್ಡಿ ಹಾಗೂ ಮಾಜಿ ಸಚಿವ ಬಿ.ಶ್ರೀರಾಮುಲು ಸಿದ್ಧತೆಗಳನ್ನು ಪರಿಶೀಲಿಸಿದರು.
ಸಮಾವೇಶ ಮುಂಜಾನೆ 11 ಗಂಟೆಗೆ ಆರಂಭವಾಗಲಿದೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಚಲುವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಘಟನೆ ನಡೆದು 16 ದಿನಗಳಾದರೂ ಶಾಸಕ ಭರತ್ ರೆಡ್ಡಿಯನ್ನು ಬಂಧಿಸಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಶಾಸಕನ ಬಂಧನಕ್ಕೆ ಆಗ್ರಹಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬಳಿಕ ಮುಂದಿನ ಹೋರಾಟದ ರೂಪುರೇಷೆಗಳನ್ನು ರೂಪಿಸಿ ಪಕ್ಷದ ಹೈಕಮಾಂಡ್ ಸೂಚನೆ ನೀಡಲಿದೆ. ಬಳಿಕ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು. ಪ್ರತಿಭಟನಾ ಸಮಾವೇಶ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಒಟ್ಟು 1,114ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಪ್ರತಿ ಚಟುವಟಿಕೆಯ ಮೇಲೆ ನಿಗಾ ಇರಿಸಲು ಪೊಲೀಸ್ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬಿಜೆಪಿ ಪ್ರತಿಭಟನಾ ಸಮಾವೇಶ ಹಿನ್ನೆಲೆಯಲ್ಲಿ ಗುರುವಾರ ರಾತ್ರಿ 10 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ ನಗರದಲ್ಲಿ ಮದ್ಯ ಮಾರಾಟ, ಬಾರ್ ಅಂಡ್ ರೆಸ್ಟೋರೆಂಟ್ ಬಂದ್ ಮಾಡುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.