ವಕ್ಫ್‌ ಹಗರಣದ ವಿರುದ್ಧ ನ.6ರಂದು ಬಿಜೆಪಿ ಪ್ರತಿಭಟನೆ: ಕಿಶೋರ್‌ ಕುಮಾರ್

KannadaprabhaNewsNetwork |  
Published : Nov 04, 2024, 12:35 AM IST
3ಪಹಣಿ | Kannada Prabha

ಸಾರಾಂಶ

ನ.4ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ಮತ್ತು ಮಧ್ಯಾಹ್ನ 3 ಗಂಟೆಗೆ ಹೆಬ್ರಿ, ನ. 5ರಂದು ಬೆಳಿಗ್ಗೆ ಬ್ರಹ್ಮಾವರ ಮತ್ತು ಮಧ್ಯಾಹ್ನ 3 ಗಂಟೆಗೆ ಕುಂದಾಪುರ, ನ.6ರಂದು ಮಧ್ಯಾಹ್ನ 3 ಗಂಟೆಗೆ ಕಾಪು ಮತ್ತು ಬೈಮದೂರುಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಗುವುದು.

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯದ ಕೆಲವು ಜಿಲ್ಲೆಗಳ ರೈತರ ಭೂಮಿ ಮತ್ತು ಮಠಮಂದಿರಗಳ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾದ್ಯಂತ ಹಿಂದೂಗಳು ಹಾಗೂ ರೈತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಜಿಲ್ಲೆಯಲ್ಲಿಯೂ ನ.6ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮವನ್ನೂ ಸುಲ್ತಾನ್‍ಪುರ ಎಂದು ಪಹಣಿಯಲ್ಲಿ ನಮೂದಾಗಿರವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನ.4 ಮತ್ತು 5ರಂದು ಜಿಲ್ಲೆಯ ಎಲ್ಲ ತಾಲೂಕು ಮಟ್ಟದಲ್ಲಿ ತಹಶೀಲ್ದಾರರಿಗೆ ಮನವಿ ನೀಡಲಾಗುವುದು. ನ. 6ರಂದು ಬೆಳಿಗ್ಗೆ 10 ಗಂಟೆಗೆ ಮಣಿಪಾಲ ಕಾಯಿನ್ ಸರ್ಕಲ್‍ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ತೆರಳಿ, ಜಿಲ್ಲಾಧಿಕಾರಿಗೆ ಮನವಿ ನೀಡಲಾಗುವುದು. ಬಿಜೆಪಿ ರಾಜಕೀಯ ಉದ್ದೇಶಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ. ಬದಲಾಗಿ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಂಡಿದ್ದು ಪಕ್ಷಾತೀತವಾಗಿ ರೈತರು, ದಲಿತರು, ಸಾರ್ವಜನಿಕರು ಸೇರಿದಂತೆ ಒಂದು ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದರು.

ರೈತರಿಗೆ ನೋಟಿಸ್ ನೀಡಿರುವುದನ್ನು ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ನೀಡಿರುವ ಸೂಚನೆ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕಿಶೋರ್ ಕುಮಾರ್, ಇದು ಜನತೆಯ ಕಣ್ಣೀರೊರೆಸುವ ತಂತ್ರ. ಪಹಣಿ ಬದಲಾವಣೆ ಬಗೆಗಿನ ಮಾಧ್ಯಮ ವರದಿ ಮತ್ತು ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ತಂತ್ರಗಾರಿಕೆ ಅನುಸರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆರ್ಗ ದಿನಕರ ಶೆಟ್ಟಿ ಮತ್ತು ರೇಷ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪ ಜಿ. ಸುವರ್ಣ ಹಾಗೂ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.

7, 8ರಂದು ಪಹಣಿ ಪರಿಶೀಲನೆ

ನ.4ರಂದು ಬೆಳಿಗ್ಗೆ 10 ಗಂಟೆಗೆ ಕಾರ್ಕಳ ಮತ್ತು ಮಧ್ಯಾಹ್ನ 3 ಗಂಟೆಗೆ ಹೆಬ್ರಿ, ನ. 5ರಂದು ಬೆಳಿಗ್ಗೆ ಬ್ರಹ್ಮಾವರ ಮತ್ತು ಮಧ್ಯಾಹ್ನ 3 ಗಂಟೆಗೆ ಕುಂದಾಪುರ, ನ.6ರಂದು ಮಧ್ಯಾಹ್ನ 3 ಗಂಟೆಗೆ ಕಾಪು ಮತ್ತು ಬೈಮದೂರುಗಳಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ನೀಡಲಾಗುವುದು. ನ. 7 ಮತ್ತು 8ರಂದು ಜಿಲ್ಲೆಯಲ್ಲಿ ಪಹಣಿ ಪರಿಶೀಲನೆ ನಡೆಸಲಾಗುವುದು. ಒಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಂದೋಲನ ಮಾದರಿಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಕಿಶೋರ ಕುಮಾರ್‌ ತಿಳಿಸಿದರು.

PREV

Recommended Stories

ರೈತರ ಅನುಕೂಲಕ್ಕೆ ಶ್ರಮಿಸಿದ್ದ ದಿ.ಸಿದ್ದು ನ್ಯಾಮಗೌಡ
ಮುಧೋಳದಲ್ಲಿ ಮುಷ್ಕರಕ್ಕೆ ನೋ ರಿಸ್ಪಾನ್ಸ್‌