ತೈಲ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಚಕ್ಕಡಿ, ಚಿಪ್ಪು ಹಿಡಿದು ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Jun 19, 2024, 01:04 AM IST
೧೮ಎಚ್‌ವಿಆರ್೧,೧ಎ- | Kannada Prabha

ಸಾರಾಂಶ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ವತಿಯಿಂದ ನಗರದಲ್ಲಿ ಮಂಗಳವಾರ ಎತ್ತಿನ ಬಂಡಿ, ತೆಂಗಿನಕಾಯಿ ಚಿಪ್ಪು ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು.

ಹಾವೇರಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕ ವತಿಯಿಂದ ನಗರದಲ್ಲಿ ಮಂಗಳವಾರ ಎತ್ತಿನ ಬಂಡಿ, ತೆಂಗಿನಕಾಯಿ ಚಿಪ್ಪು ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾ ಕಾರ್ಯಾಲಯದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ.ರೋಡ್ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿತು. ಪ್ರತಿಭಟನೆ ಮೆರವಣಿಗೆಯಲ್ಲಿ ಎತ್ತಿನ ಗಾಡಿ, ಬೈಕ್‌ಗಳನ್ನು ಬಳಸಿ ವಿನೂತವಾಗಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ವೇಳೆ ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಅನೇಕ ಮಧ್ಯಮ ವರ್ಗದವರಿಗೆ ಮತ್ತು ಬಡವರಿಗೆ ಸಾಕಷ್ಟು ತೊಂದರೆಯಾಗಿದೆ. ಕಾಂಗ್ರೆಸ್ ಸರ್ಕಾರ ಬಡವರು, ಹಿಂದುಳಿದ ವರ್ಗದವರು, ದೀನ ದಲಿತರ ಜೀವನವನ್ನು ಸುಧಾರಿಸುವ ಬದಲು ಬೆಲೆ ಏರಿಕೆ ಮಾಡಿ ಹೆಚ್ಚಿನ ಅನಾನುಕೂಲ ಮಾಡಿದೆ. ರಾಜ್ಯ ಸರ್ಕಾರ ಮೋಸದ ಗ್ಯಾರಂಟಿಗಳಿಂದ ನಡೆಯುತ್ತಿದೆ. ಎಲ್ಲ ಸಮುದಾಯಗಳ ಅನುದಾನ ಕಡಿತಗೊಳಿಸಿ ಇಲಾಖೆಗಳ ಹಣ ಲಪಟಾಯಿಸಲು ಮುಂದಾಗಿದೆ ಎಂದು ದೂರಿದರು.ದಿನದಿಂದ ದಿನಕ್ಕೆ ಕಾಂಗ್ರೆಸ್‌ನ ಭಾಗ್ಯಗಳು ತುಟ್ಟಿ ಭಾಗ್ಯಗಳಾಗಿ ಮಾರ್ಪಾಡಾಗಿವೆ. ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಪೆಟ್ರೋಲ್, ಡೀಸೆಲ್ ಬೆಲೆ, ರೈತರ ಸಾಮಗ್ರಿಗಳ ಬೆಲೆ, ಬೀಜ-ಗೊಬ್ಬರದ ಬೆಲೆಯನ್ನು ಕಡಿಮೆ ಮಾಡುವುದಾಗಿ ಎಂದು ಸುಳ್ಳು ಭರವಸೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯನವರಿಗೆ ಜನರು ತಕ್ಕ ಪಾಠವನ್ನು ಕಲಿಸುವ ದಿನ ಸನಿಹಕ್ಕೆ ಬಂದಿದೆ. ಇನ್ನಾದರು ಜನರ ಜೀವನದ ಜೊತೆ ಚೆಲ್ಲಾಟ ಆಡುವುದನ್ನು ಬಿಡದೆ ಹೋದರೆ ಕಾಂಗ್ರೆಸ್ ನಿರ್ನಾಮವಾಗುವುದು ಖಚಿತ. ಜೂ. ೨೮ರಂದು ಎಸ್.ಟಿ. ಸಮುದಾಯದ ಹಣ ದುರ್ಬಳಕೆಯ ವಿಚಾರವಾಗಿ ಬೃಹತ್ ಪ್ರತಿಭಟನೆಯ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದು ಎಂದರು.ಬಿಜೆಪಿ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, ಈಗಾಗಲೇ ರಾಜ್ಯದ ಜನರು ಕಾಂಗ್ರೆಸ್ ಗ್ಯಾರಂಟಿ ಹಾಗೂ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈಗ ತೈಲ ಬೆಲೆ ಹೆಚ್ಚಿಸಿದ್ದರಿಂದ ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಈಗಾಗಲೇ ಅನೇಕ ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಜನರು ಜೀವನ ನಡೆಸುವುದು ದುಸ್ತರವಾಗಿದೆ. ಎಸ್‌ಟಿ ಸಮುದಾಯಕ್ಕೆ ಮೀಸಲಿಟ್ಟಿದ್ದ ೧೮೭ ಕೋಟಿ ರು.ಗಳನ್ನು ಅನೇಕ ಬೋಗಸ್ ಖಾತೆಗಳಿಗೆ ವರ್ಗಾವಣೆ ಮಾಡಿ ಲೋಕಸಭಾ ಚುನಾವಣೆಗೆ ಈ ಹಣವನ್ನು ದುರ್ಬಳಕೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇದರಲ್ಲಿ ಸಂಪೂರ್ಣ ಕಾಂಗ್ರೆಸ್ ಸರ್ಕಾರ ನೈತಿಕ ಹೊಣೆಯನ್ನು ಹೊತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಎಸ್‌ಟಿ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಸಂತೋಷ ಆಲದಕಟ್ಟಿ, ಎಸ್.ಟಿ. ಮೋರ್ಚಾ ರಾಷ್ಟ್ರೀಯ ಪರಿಷತ್ ಸದಸ್ಯ ಮಂಜುನಾಥ ಓಲೇಕಾರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಪಕ್ಷದ ಚುನಾಯಿತ ಪ್ರತಿನಿಧಿಗಳು, ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು. ರಾಜ್ಯ ಸರ್ಕಾರ ಇತ್ತೀಚೆಗೆ ಅನಗತ್ಯವಾಗಿ ಪೆಟ್ರೋಲ್ ೩ ರು. ಹಾಗೂ ಡೀಸೆಲ್ ೩.೫೦ ರು. ಏರಿಕೆ ಮಾಡಿರುವುದು ಅವೈಜ್ಞಾನಿಕ. ಲೋಕಸಭೆ ಚುನಾವಣೆ ಮುಗಿದ ನಂತರ ತನ್ನ ಗ್ಯಾರಂಟಿ ಯೋಜನೆಗಳಿಗಾಗಿ ಹಣ ಹೊಂದಿಸಲು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನಸಾಮನ್ಯರ ಜೀವನದ ಮೇಲೆ ಬರೆ ಎಳೆದಿದೆ. ಇದರ ಪರಿಣಾಮವಾಗಿ ಮುಂಬರುವ ದಿನಗಳಲ್ಲಿ ಸಾರಿಗೆ ವೆಚ್ಚ ಅಧಿಕವಾಗುತ್ತದೆ ಹಾಗೂ ಆಹಾರ ಪದಾರ್ಥಗಳ ಬೆಲೆಯು ಹೆಚ್ಚಾಗಿ ಸಾಮಾನ್ಯ ಜನರು ಜೀವನ ಮಾಡುವುದು ದುಸ್ತರವಾಗುತ್ತದೆ. ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಹಿಂಪಡೆಯದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ ಹೇಳಿದರು.

PREV

Recommended Stories

ಧರ್ಮಸ್ಥಳ ಕೇಸ್‌ : ಅರ್ಧ ಕೋಟಿ ವ್ಯಯ?
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ