ಬೆಳಗಾವಿಯ ಮಹಿಳೆ ಬೆತ್ತಲೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork | Published : Dec 17, 2023 1:45 AM

ಸಾರಾಂಶ

ಬೆಳಗಾವಿ ಜಿಲ್ಲೆ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣ ಹಾಗೂ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಶಿಶು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಹಾವೇರಿ

ಬೆಳಗಾವಿ ಜಿಲ್ಲೆ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಅಮಾನವೀಯವಾಗಿ ನಡೆಸಿಕೊಂಡ ಪ್ರಕರಣ ಹಾಗೂ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಶಿಶು ಭ್ರೂಣ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಬಿಜೆಪಿ ಜಿಲ್ಲಾ ಕಚೇರಿಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ. ರಸ್ತೆ ಮೂಲಕ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿತು. ಆನಂತರ ಕೆಲಹೊತ್ತು ರಸ್ತೆ ತಡೆ ನಡೆಸುವ ಮೂಲಕ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ನಡೆದ ಮಹಿಳೆಯ ಬೆತ್ತಲೆ ದುಷ್ಕೃತ್ಯವನ್ನು ಖಂಡಿಸಿ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ರಾಜ್ಯ ಸರ್ಕಾರ ಸ್ಪಂದನೆರಹಿತ ಸರ್ಕಾರವಾಗಿದ್ದು, ಮಹಿಳೆಯರು ಸುರಕ್ಷಿತವಾಗಿ ಬದುಕುವುದು ಕಷ್ಟವಾಗಿದೆ. ಇಂತಹ ಸರ್ಕಾರ ನಡೆಸುವುದಕ್ಕಿಂತ ರಾಜೀನಾಮೆ ಕೊಟ್ಟು ಮನೆಯಲ್ಲಿ ವಿಶ್ರಮಿಸುವುದು ಒಳ್ಳೆಯದು. ರೈತರು ಮಳೆ, ಬೆಳೆ ಇಲ್ಲದೇ ಕಂಗಾಲಾಗಿದ್ದು ಇಂತಹ ಸಂದರ್ಭದಲ್ಲಿ ರೈತರಿಗೆ ಅಸಲು ತುಂಬಿದರೆ ಬಡ್ಡಿ ಮನ್ನಾ ಎಂಬ ಮುಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದು, ಇಂತಹ ದುರಾಡಳಿತ ನಡೆಸುವುದಕ್ಕಿಂತ ಕಾನೂನು ಕಾಪಾಡಲು ಸಾಧ್ಯವಿಲ್ಲ. ರಾಜ್ಯದ ಜನತೆಯ ಕ್ಷಮೆ ಕೇಳಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ರಾಜ್ಯಾದ್ಯಂತ ಹೆಣ್ಣು ಶಿಶು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಕೃತ್ಯದಲ್ಲಿ ಎಸಗಿರುವವರ ಮೇಲೆ ಕ್ರಮ ಕೈಗೊಳ್ಳಲು ಸರ್ಕಾರ ಮೀನಮೇಷ ಎಣಿಸುತ್ತಿರುವುದು ಖಂಡನೀಯ. ಸರ್ಕಾರ ರಾಜ್ಯದ ಜನತೆಗೆ ನೆಮ್ಮದಿಯ ಜೀವನ ನಡೆಸಲು ಅವಕಾಶವನ್ನು ಮಾಡಿಕೊಡಬೇಕು. ಜತೆಗೆ ಬೆಳಗಾವಿಯಲ್ಲಿ ನಡೆದ ಅಮಾನವೀಯ ಕೃತ್ಯದ ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಕಾಂಗ್ರೆಸ್‌ನ ಈ ದುಷ್ಟ ಸರ್ಕಾರದಲ್ಲಿ ಮಹಿಳೆಯರಿಗೆ, ಮಕ್ಕಳಿಗೆ, ದಲಿತರಿಗೆ ಬದುಕುವ ಹಕ್ಕಿಲ್ಲದಂತಾಗಿದೆ. ಬಡವರು ದೀನದಲಿತರು ಜೀವನ ನಡೆಸುವುದೇ ಕಷ್ಟವಾಗಿದ್ದು, ಸರ್ಕಾರ ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಆಗ್ರಹಿಸಿದರು.

ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹಣ ಮಾಡುವ ಉದ್ದೇಶದಿಂದ ಎಲ್ಲ ಕಾನೂನುಬಾಹಿರ ಚಟುವಟಿಕೆಗೆ ಮುಕ್ತ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದು, ಇದರಿಂದ ಸಮಾಜದಲ್ಲಿ ಯುವಸಮುದಾಯ ದಾರಿತಪ್ಪುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡ ಗವಿಸಿದ್ದಪ್ಪ ದ್ಯಾಮಣ್ಣನವರ ಮಾತನಾಡಿ, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾನುನೂ ಸುವ್ಯವಸ್ಥೆ ಹದಗೆಡುತ್ತಿದ್ದು, ಸರ್ಕಾರದ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲಗೊಂಡಿದೆ. ಈ ಕೂಡಲೇ ದೌರ್ಜನ್ಯಕ್ಕೆ ಒಳಗಾದ ಮಹಿಳೆಗೆ ನ್ಯಾಯ ಒದಗಿಸುವಲ್ಲಿ ಮತ್ತು ಕುಕೃತ್ಯ ಎಸಗಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಪ್ರಮುಖರಾದ ಶೋಭಾ ನಿಸ್ಸೀಮಗೌಡ್ರ, ವೀರೇಂದ್ರ ಶೆಟ್ಟರ, ಶಶಿಧರ ಹೊಸಳ್ಳಿ, ಕೃಷ್ಣ ಈಳಗೇರ, ರುದ್ರೇಶ ಚಿನ್ನಣ್ಣನವರ, ಕೆ. ಶಿವಲಿಂಗಪ್ಪ, ಕೆ.ಸಿ. ಕೋರಿ, ಡಾ. ಸಂತೋಷ ಅಲದಕಟ್ಟಿ, ಲತಾ ಬಡ್ನಿಮಠ, ನಿಂಗಪ್ಪ ಗೊಬ್ಬೇರ, ಶಿವಾನಂದ ಮ್ಯಾಗೇರಿ, ಶಿವಕುಮಾರ ತಿಪ್ಪಶೆಟ್ಟಿ, ನೀಲಪ್ಪ ಚಾವಡಿ, ಮಂಜುನಾಥ ಬ್ಯಾಹಟ್ಟಿ, ಕಲ್ಯಾಣಕುಮಾರ ಶೆಟ್ಟರ, ಅಲ್ಲಾಭಕ್ಷ ತಿಮ್ಮಾಪುರ, ಜಗದೀಶ ಬಸೇಗಣ್ಣಿ, ನಿರಂಜನ ಹೇರೂರ, ಮಂಜುನಾಥ ಮಡಿವಾಳರ, ಮಹೇಶ ಕಮಡೊಳ್ಳಿ, ಲಲಿತಾ ಗುಂಡೇನಹಳ್ಳಿ, ಪುಷ್ಪಾ ಚಕ್ರಸಾಲಿ, ಚನ್ನಮ್ಮ ಪಾಟೀಲ, ರತ್ನಾ ಭೀಮಕ್ಕನವರ, ರೋಹಿಣಿ ಪಾಟೀಲ, ಪವಿತ್ರಾ ಹರಿಜನ, ತಾರಾ ವಡ್ಡರ, ಜ್ಯೋತಿ ಸಾತೇನಹಳ್ಳಿ, ವಿಜಯಕುಮಾರ ಚಿನ್ನಿಕಟ್ಟಿ, ರಮೇಶ ಪಾಲನಕರ, ಕರಬಸಪ್ಪ ಹಳದೂರ, ಶಂಕ್ರಣ್ಣ ಮಾತನವರ ಇತರರು ಪಾಲ್ಗೊಂಡಿದ್ದರು.

Share this article