ರಸಗೊಬ್ಬರ ಸಂಕಷ್ಟ ವಿರುದ್ಧ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Aug 01, 2025, 12:30 AM IST
ಗಂಗಾವತಿಯಲ್ಲಿ ಬಿಜೆಪಿ ಪ್ರತಿಭಟನೆ. | Kannada Prabha

ಸಾರಾಂಶ

ಕೇಂದ್ರ ಸರ್ಕಾರ ನೀಡಿರುವ ರಸಗೊಬ್ಬರವನ್ನು ಸರಿಯಾಗಿ ಹಂಚಿಕೆ ಮಾಡದೆ ರಾಜ್ಯ ಸರ್ಕಾರ ರೈತರನ್ನು ಬೀದಿಗೆ ತಳ್ಳಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ ವಿವಿಧೆಡೆ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೇಂದ್ರ ಸರ್ಕಾರ ನೀಡಿರುವ ರಸಗೊಬ್ಬರವನ್ನು ಸರಿಯಾಗಿ ಹಂಚಿಕೆ ಮಾಡದೆ ರಾಜ್ಯ ಸರ್ಕಾರ ರೈತರನ್ನು ಬೀದಿಗೆ ತಳ್ಳಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ ವಿವಿಧೆಡೆ ಬಿಜೆಪಿ ರೈತ ಮೋರ್ಚಾದ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಕಲಬುರಗಿಯಲ್ಲಿ ಮಾಜಿ ಸಂಸದ ಡಾ.ಉಮೇಶ ಜಾಧವ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ‘ಗೊಬ್ಬರ ನೀಡದೆ ರೈತರನ್ನು ಬೀದಿಗೆ ತಳ್ಳಿದ ಸಿದ್ದರಾಮಯ್ಯಗೆ ಧಿಕ್ಕಾರ’,’ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿರುವ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ’ ಎಂಬ ಘೋಷಣಾ ಫಲಕಗಳನ್ನು ಹಿಡಿದಿದ್ದ ಬಿಜೆಪಿ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ತಾಲೂಕು ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಾಕಾರರು, ‘ಯೂರಿಯಾ ಗೊಬ್ಬರ ಕೊಡಿ, ಇಲ್ಲವೇ ವಿಷ ಕೊಡಿ’ ಎಂಬ ಘೋಷಣೆಯೊಂದಿಗೆ ಕೃಷಿ ಇಲಾಖೆ ಹಾಗೂ ತಾಲೂಕು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಬಳಿಕ, ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಗದಗದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು. ಕೃಷಿ ಸಚಿವ ಚಲುವನಾರಾಯಣ ಸ್ವಾಮಿಯವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಗಂಗಾವತಿಯಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗುರು ಅವರ ನೇತೃತ್ವದಲ್ಲಿ ನಗರದ ಚೆನ್ನಬಸವಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಸಿಬಿಎಸ್ ವೃತ್ತದಿಂದ ಮಹಾತ್ಮಗಾಂಧಿ ವೃತ್ತದವರೆಗೂ ಮೆರವಣಿಗೆ ನಡೆಸಿದರು. ಇದೇ ವೇಳೆ, ಬಳ್ಳಾರಿ, ಕಂಪ್ಲಿಗಳಲ್ಲಿಯೂ ಪ್ರತಿಭಟನೆಗಳು ನಡೆದವು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ