ಎತ್ತಿನ ಬಂಡಿಯಲ್ಲಿ ಸಾಗಿ ವಿನೂತನ ಆಕ್ರೋಶ, ಹಳೇ ಡಿಸಿ ಕಚೇರಿ ವೃತ್ತದಲ್ಲಿ ರಸ್ತೆ ತಡೆ, ಬಸ್ ಹತ್ತಿ ಪ್ರತಿಭಟನೆ ನಡೆಸಿದ ಮಹಿಳಾ ಕಾರ್ಯಕರ್ತರುಕನ್ನಡಪ್ರಭ ವಾರ್ತೆ ಗದಗ
ನಗರದ ಹಳೇ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ ಎಂಬ ಘೋಷಣೆಗಳೊಂದಿಗೆ ಸರ್ಕಾರದ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿ ಧಿಕ್ಕಾರ ಕೂಗಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವುದನ್ನು ಬಿಂಬಿಸುವ ಉದ್ದೇಶದಿಂದ ಎತ್ತಿನ ಬಂಡಿಯಲ್ಲಿ ಸಾಗುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಹಳೇ ಡಿಸಿ ಕಚೇರಿ ವೃತ್ತದಿಂದ ಹಳೇ ಬಸ್ ನಿಲ್ದಾಣದವರೆಗೆ ನಡೆದ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನಬಳಕೆಯ ವಸ್ತುಗಳ ಬೆಲೆ ಏರಿಕೆ ಜನರ ಬದುಕಿನ ಮೇಲೆ ನೇರ ಪರಿಣಾಮ ಬೀರುತ್ತಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುವುದನ್ನು ಬಿಟ್ಟು ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದರು.ಹಳೇ ಡಿಸಿ ಕಚೇರಿ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ರಸ್ತೆ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿದ್ದ ಪೊಲೀಸರು ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ವ್ಯವಸ್ಥೆ ಕಲ್ಪಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಜನರಿಗೆ ವಂಚನೆ ಮಾಡುತ್ತಿದೆ. ಗ್ಯಾರಂಟಿಗಳ ಅನುಷ್ಠಾನದ ನೆಪದಲ್ಲಿ ರಾಜ್ಯದ ಖಜಾನೆ ಖಾಲಿಯಾಗಿದ್ದು, ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಬಡವರ ಬದುಕು ದುಸ್ತರವಾಗಿದೆ. ಇಂಧನ ದರ ಏರಿಕೆಯಿಂದ ಸಾರಿಗೆ ಸಂಸ್ಥೆಗಳ ಮೇಲೆಯೂ ಹೆಚ್ಚಿನ ಹೊರೆ ಬಿದ್ದಿದೆ. ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕಾದ ಸರ್ಕಾರ ರಾಜಕೀಯದಲ್ಲಿ ಕಾಲಹರಣ ಮಾಡುತ್ತಿದೆ. ಜನವಿರೋಧಿ ನೀತಿಗಳನ್ನು ಕೈಬಿಟ್ಟು ಜನಪರ ಆಡಳಿತ ನೀಡಬೇಕು.
ಎಸ್.ವಿ. ಸಂಕನೂರ, ವಿಪ ಸದಸ್ಯ