ಕಾರವಾರ: ದಲಿತರ ಹಣವನ್ನು ವರ್ಗಾವಣೆ ಮಾಡುವ ಮೂಲಕ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಮೆರವಣಿಗೆಯಲ್ಲಿ ಬಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಹಕ್ಕೊತ್ತಾಯ ಮನವಿ ಸಲ್ಲಿಸಿದರು.
ದಲಿತದ್ರೋಹಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಜನಾಂದೋಲನ ಹಾಗೂ ಪ್ರತಿಭಟನೆಯನ್ನು ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸಲಾಯಿತು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.ಇದಕ್ಕೂ ಮುನ್ನ ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಸಭೆ ನಡೆಸಲಾಯಿತು.
ದಲಿತರಿಗೆ ನ್ಯಾಯ ದೊರಕಿಸಿಕೊಡಬೇಕೆಂಬ ಅಂಬೇಡ್ಕರ್ ಆಶಯಗಳನ್ನು ಕಾಂಗ್ರೆಸ್ ಗಾಳಿಗೆ ತೂರುತ್ತಿದೆ. ದಲಿತರಿಗೆ ಮೀಸಲಾದ ಹಣವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿಯ ರಾಜ್ಯ ವಕ್ತಾರ ವೆಂಕಟೇಶ ದೊಡ್ಡೇರಿ ಆಪಾದಿಸಿದರು.ಪರಿಶಿಷ್ಟ ಜಾತಿ, ಜನಾಂಗಕ್ಕೆ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಬೇಕಾಗಿದೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ಮಾತನಾಡಿ, ದಲಿತರ ಪರ ಎಂದು ಬಿಂಬಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ದಲಿತರ ಹಣವನ್ನು ದುರ್ಬಳಕೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗಾದರೂ ಮಾಡಿ ಕುರ್ಚಿ ಉಳಿಸಿಕೊಳ್ಳುವ ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದೆಡೆ ಬಿಟ್ಟಿ ಭಾಗ್ಯಗಳನ್ನು ನಿರ್ವಹಿಸಲಾಗದೇ ಮತ್ತೊಂದೆಡೆ ಆರ್ಥಿಕ ಶಿಸ್ತಿನ ಕಡೆಗೂ ಗಮನ ಹರಿಸಲಾಗದೇ ರೈತರು, ಪರಿಶಿಷ್ಟರು, ಹಿಂದುಳಿದವರು ಹಾಗೂ ದಲಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಕಲ್ಲು ಹಾಕುತ್ತಿದೆ ಎಂದು ದೂರಿದರು.
ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸಲಾಗಿದೆ. ಹಾಗೆ ನಮ್ಮ ಜಿಲ್ಲೆಯಲ್ಲೂ ಹೋರಾಟ ನಡೆಸಲಾಗುತ್ತಿದೆ ಎಂದರು.ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.
ಜಿಲ್ಲಾ ಪ್ರಮುಖರಾದ ಗೋವಿಂದ ನಾಯ್ಕ, ವೆಂಕಟೇಶ ನಾಯ್ಕ, ಹರಿಪ್ರಕಾಶ ಕೊಣೆಮನೆ, ರಾಜೇಂದ್ರ ನಾಯ್ಕ, ಗುರುಪ್ರಸಾದ ಹೆಗಡೆ, ಪ್ರಶಾಂತ ನಾಯ್ಕ, ಅಶೋಕ ಛಲವಾದಿ, ಸಂಜಯ ಸಾಳುಂಕೆ, ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೆಕರ, ನಗರ ಮಂಡಲ ಅಧ್ಯಕ್ಷ ನಾಗೇಶ ಕುರ್ಡೇಕರ, ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ, ಅಂಕೋಲ ಮಂಡಲದ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.