ಕಾರವಾರ: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣ ಖಂಡಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲೆತ್ನಿಸಿದಾಗ ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಯಿತು. ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ಪ್ರತಿಭಟನಾನಿರತ ಪ್ರಮುಖರನ್ನು ತಮ್ಮ ವಶಕ್ಕೆ ತೆಗೆದುಕೊಂಡು ನಂತರ ಬಿಡುಗಡೆಗೊಳಿಸಿದರು.ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ನಿರಂತರವಾಗಿ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿದರು. ದಲಿತರಿಗಾಗಿ ಮೀಸಲಿಟ್ಟ ಹಣವನ್ನು ಅವ್ಯವಹಾರ ನಡೆಸಿದ್ದು, ಇದೊಂದು ದಲಿತ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಿಗಮದ ಅಧಿಕಾರಿ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಷ್ಟು ದೊಡ್ಡ ಹಗರಣ ನಡೆದಿದೆ. ಮುಖ್ಯಮಂತ್ರಿಗಳ ಶಾಮೀಲಾತಿ ಇಲ್ಲದೆ ಹಗರಣ ನಡೆಯಲು ಸಾಧ್ಯವೇ? ಅವ್ಯವಹಾರ ನಡೆಸಿದ ಹಣವನ್ನು ಸಿದ್ದರಾಮಯ್ಯ ವಾಪಸ್ ಕೊಡಿಸಬೇಕು ಹಾಗೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ವಿಧಾನಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹಾಗೂ ನಾಗರಾಜ ನಾಯಕ ಮತ್ತಿತರರು ಮಾತನಾಡಿ, ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣವನ್ನು ಖಂಡಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಪಕ್ಷದ ಪ್ರಮುಖರಾದ ರಾಜೇಂದ್ರ ನಾಯ್ಕ, ಎಲ್ಲ ಮೋರ್ಚಾಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.