ಬಳ್ಳಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಗಡಗಿಚನ್ನಪ್ಪ ವೃತ್ತದಲ್ಲಿ ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ದಿನಕ್ಕೊಂದು ಹಗರಣಗಳು ಹೊರಗೆ ಬರುತ್ತಿವೆ. ಖುದ್ದು ಮುಖ್ಯಮಂತ್ರಿಯೇ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ. ನಿಜಕ್ಕೂ ಸಿದ್ದರಾಮಯ್ಯಗೆ ನೈತಿಕತೆ ಇದ್ದರೆ ಕೂಡಲೇ ರಾಜಿನಾಮೆ ನೀಡಿ ಹೊರ ಬಂದು ತನಿಖೆ ಎದುರಿಸಲಿ ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜನವಿರೋಧಿ ಕಾಂಗ್ರೆಸ್ ಸರ್ಕಾರ ಮೊದಲು ತೊಲಗಲಿ ಎಂದು ಆಗ್ರಹಿಸಿದರು.ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಮಾಜಿ ಶಾಸಕ ಜಿ. ಸೋಮಶೇಖರರೆಡ್ಡಿ, ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ, ಡಾ.ಅರುಣಾ ಕಾಮಿನೇನಿ, ಎಚ್. ಹನುಮಂತಪ್ಪ, ಎಸ್. ಮಲ್ಲನಗೌಡ, ಮಾರುತಿ ಪ್ರಸಾದ್, ಪುಷ್ಪಾ ಚಂದ್ರಶೇಖರ್ ಸೇರಿದಂತೆ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.