ಬಿಡದಿ, ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಅಕ್ರಮ ವಲಸಿಗರು । ಶೀಘ್ರ ಪಾಕಿಸ್ತಾನಿಗಳನ್ನು ಪತ್ತೆ ಹೆಚ್ಚುವ ಕೆಲಸವಾಗಲಿ
ಕನ್ನಡಪ್ರಭ ವಾರ್ತೆ ರಾಮನಗರಜಿಲ್ಲೆಯಿಂದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಗುರುತಿಸಿ ಅವರನ್ನು ಹೊರಹಾಕಬೇಕೆಂದು ಒತ್ತಾಯಿಸಿ ಬಿಜೆಪಿ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಬಿಡದಿ ಹಾಗೂ ಹಾರೋಹಳ್ಳಿ ಕೈಗಾರಿಕಾ ಪ್ರದೇಶಗಳಲ್ಲಿ ಉದ್ಯೋಗದ ನಿಮಿತ್ತ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ವಾಸಿಸುತ್ತಿದ್ದಾರೆ. ರಾಮನಗರ ಜಿಲ್ಲಾ ಪೊಲೀಸ್ ಕೂಡಲೇ ವಲಸಿಗರ ಬಗ್ಗೆ ಮಾಹಿತಿ ಸಂಗ್ರಹಿಸಿ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಕರ್ನಾಟಕ ಸೇರಿದಂತೆ ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಲ್ಲಿ ಪಾಕಿಸ್ತಾನಿಯರನ್ನು ಪತ್ತೆಹಚ್ಚಿ ಹೊರಹಾಕುವ ಕೆಲಸ ಆಗುತ್ತಿಲ್ಲ. ಕೂಡಲೇ ಜಿಲ್ಲಾಧಿಕಾರಿಗಳು ರಾಮನಗರ ಜಿಲ್ಲೆಯಲ್ಲಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆಹಚ್ಚಿ ಹೊರಹಾಕಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್. ಆನಂದಸ್ವಾಮಿ ಮಾತನಾಡಿ, ಕಾಶ್ಮೀರದ ಪೆಹಲ್ಗಾಂನಲ್ಲಿ ಭಯೋತ್ಪಾದಕರು ಧರ್ಮ ಕೇಳಿ ಪ್ರವಾಸಿಗರನ್ನು ಧಾರುಣವಾಗಿ ಹತ್ಯೆ ಮಾಡಿದ್ದಾರೆ. ದೇಶದ ಜನ ಈ ಹತ್ಯಾಕಾಂಡವನ್ನು ಅರಗಿಸಿಕೊಳ್ಳಲೂ ಸಾಧ್ಯವಿಲ್ಲ ಎಂದರು.ಪ್ರಧಾನಿ ಮೋದಿಯವರು ಉಗ್ರರನ್ನು ಸದೆಬಡಿಯುವ ಕೆಲಸ ಮಾಡುತ್ತಿದ್ದು, ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುತ್ತಿದ್ದಾರೆ. ಇದರ ಭಾಗವಾಗಿ ಪಾಕಿಸ್ತಾನಿಯರನ್ನು ದೇಶದಿಂದ ಹೊರ ಕಳುಹಿಸಲು ಎಲ್ಲಾ ರಾಜ್ಯಗಳಿಗೂ ಸೂಚಿಸಿದ್ದಾರೆ. ಆದರೆ, ಬಿಜೆಪಿಯೇತರ ಸರ್ಕಾರಗಳು ಈ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.
ರಾಜ್ಯದ ವಿವಿಧೆಡೆಗಳಲ್ಲಿ ನೆಲೆಸಿರುವ ಪಾಕಿಸ್ತಾನದ ಪ್ರಜೆಗಳನ್ನು ಹೊರ ಹಾಕಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ವೀಸಾ ಅವಧಿ ಮುಗಿದಿದ್ದರೂ ಇಲ್ಲಿಯೇ ನೆಲೆಸಿರುವ ಪಾಕಿಸ್ತಾನಿಯರನ್ನು ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದರು.ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಆರ್.ವಿ. ಸುರೇಶ್ ಮಾತನಾಡಿ, ಪಾಕಿಸ್ತಾನದಿಂದ ರಾಜ್ಯಗಳಿಗೆ ಶಿಕ್ಷಣ, ಆರೋಗ್ಯ ತಪಾಸಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಜೆಗಳು ಬಂದಿದ್ದಾರೆ. ದೇಶದಲ್ಲಿ ಬಿಜೆಪಿ ಸರಕಾರ ಇರುವ ಕಡೆ ಅವರನ್ನು ಹೊರಹಾಕುವ ಕೆಲಸ ಬಹಳ ತ್ವರಿತವಾಗಿ ಸಾಗುತ್ತಿದೆ. ಆದರೆ ಕರ್ನಾಟಕ ಸೇರಿದಂತೆ ಯಾವ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇಲ್ಲವೋ ಅಲ್ಲಿ ಇವರನ್ನು ಹೊರಹಾಕುವ ಕೆಲಸ ಇದುವರೆಗೂ ಕೈಗೊಂಡಿರದೇ ಇರುವುದು ನಾಚಿಕೆ ಗೇಡಿನ ಸಂಗತಿ ಎಂದು ಟೀಕಿಸಿದರು.
ಭಾರತದಲ್ಲಿ ಉಳಿದುಕೊಂಡಿರುವ ಪಾಕಿಸ್ತಾನಿಯರನ್ನು ವಾಪಸ್ ಕಳುಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಹೊರಹಾಕಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದರು.ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಪಿ. ಶಿವಾನಂದ, ರುದ್ರದೇವರು, ನಾಗೇಶ್, ಜಗದೀಶ್, ಕಾಳಯ್ಯ, ಚನ್ನಪ್ಪ, ಚಂದನ್ ಮೋರೆ, ಮಂಜು, ಪುಷ್ಪಲತಾ ಆರಾಧ್ಯ, ನಾಗಮ್ಮ, ಲಕ್ಷ್ಮೀ, ಹೇಮಾವತಿ ಮತ್ತಿತರರು ಭಾಗವಹಿಸಿದ್ದರು.
--------------------------6ಕೆಆರ್ ಎಂಎನ್ 2.ಜೆಪಿಜಿ
ರಾಮನಗರ ಜಿಲ್ಲಾಧಿಕಾರಿ ಕಚೇರಿ ಎದುರು ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಗುರುತಿಸಿ ಹೊರಹಾಕಬೇಕೆಂದು ಒತ್ತಾಯಿಸಿ ಬಿಜೆಪಿ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.-------------------------