ಬಳ್ಳಾರಿ: ಜಿಲ್ಲೆಯ ರೈತರ ಬೆಳೆಗಳನ್ನು ರಕ್ಷಣೆ ಮಾಡಲು ತುಂಗಭದ್ರಾ ಜಲಾಶಯದಿಂದ ಬೇಸಿಗೆ ಬೆಳೆಗೆ ನೀರು ಕೊಡಬೇಕು ಎಂದು ಒತ್ತಾಯಿಸಿ ಬಿಜೆಪಿ ರೈತ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಸಿ, ನೀರು ವಿತರಣೆಗೆ ಕೂಡಲೇ ಕ್ರಮ ವಹಿಸುವಂತೆ ಆಗ್ರಹಿಸಲಾಯಿತು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ಸಚಿವ ಶಿವರಾಜ ತಂಗಡಗಿ ಅವರು ರೈತರ ಹಿತ ಕಾಯುವ ಬದಲು ತಮಗಿಷ್ಟ ಬಂದಂತೆ ನಿರ್ಧಾರ ತೆಗೆದುಕೊಳ್ಳಲು ಹೊರಟಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಸಹ ಈ ಬಗ್ಗೆ ಗಮನ ಹರಿಸಬೇಕು. ಬೇಸಿಗೆ ಬೆಳೆಗೆ ನೀರು ಬಿಡದೇ ಹೋದರೆ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಮಾತನಾಡಿ, ಶಿವರಾಜ ತಂಗಡಗಿ ರೈತರಿಗೆ ಅನ್ಯಾಯ ಮಾಡಲು ಹೊರಟಿದ್ದಾರೆ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ತಂತ್ರ ಅನುಸರಿಸುತ್ತಿದ್ದಾರೆ. ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರವಲ್ಲ. ರೈತರನ್ನು ದಾರಿ ತಪ್ಪಿಸಲು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದು ಅತ್ಯಂತ ಖಂಡನೀಯ. ಕೂಡಲೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಕರೆದು, ಬೇಸಿಗೆ ಬೆಳೆಗೆ ನೀರು ಕೊಡುವ ಕುರಿತು ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕ್ರಸ್ಟ್‌ಗೇಟ್ ನೆಪದಲ್ಲಿ ನೀರು ವಿನಾಕಾರಣ ವ್ಯರ್ಥ ಮಾಡಿದರೆ ಹೋರಾಟವನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.
ಸಚಿವ ಶಿವರಾಜ ತಂಗಡಗಿ ನೀರಾವರಿ ಸಲಹಾ ಸಮಿತಿ ಸಭೆ ಕರೆಯುವುದಿಲ್ಲ. ನೀರು ಬಿಡುವುದಿಲ್ಲ ಎಂದು ಏಕಪಕ್ಷೀಯ ಹೇಳುತ್ತಿದ್ದಾರೆ. ಜಲಸಂಪನ್ಮೂಲ ಸಚಿವರ ಜೊತೆ ಯಾವುದೇ ಚರ್ಚೆ ಮಾಡದೇ ತಂಗಡಗಿ ಸ್ವಯಂ ನಿರ್ಧಾರ ಕೈಗೊಂಡಿರುವುದು ರೈತ ವಿರೋಧಿ ನಿಲುವಾಗಿದೆ. ಕ್ರಸ್ಟ್ ಗೇಟ್ ಅಳವಡಿಕೆ ಸಂಬಂಧ ತಜ್ಞರ ಜೊತೆ ಚರ್ಚೆ ಮಾಡದೇ ಕ್ರಸ್ಟ್‌ಗೇಟ್ ಅಳವಡಿಕೆಯ ನಿರ್ಧಾರ ಕೈಗೊಳ್ಳುವುದನ್ನು ನಾವು ಒಪ್ಪುವುದಿಲ್ಲ. ನಿಜಕ್ಕೂ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ರೈತರ ಬಗ್ಗೆ ಕಾಳಜಿಯಿದ್ದರೆ ಬೇಸಿಗೆ ಬೆಳೆಗೆ ನೀರು ಬಿಡುವುದರ ಜೊತೆಗೆ ಕ್ರಸ್ಟ್‌ಗೇಟ್ ಅಳವಡಿಕೆಗೆ ಸಂಬಂಧ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎಂಬುದು ವೈಜ್ಞಾನಿಕವಾಗಿ ಚರ್ಚಿಸಿಯೇ ಸೂಕ್ತ ನಿರ್ಧಾರಕ್ಕೆ ಬರಬೇಕು ಎಂದು ಒತ್ತಾಯಿಸಿದರು.ಖಾಲಿ ಕೊಡಗಳನ್ನು ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ನಗರದ ಗಡಗಿಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ರಸ್ತೆ ತಡೆ ನಡೆಸಿದರು.
ಬಳಿಕ ರಾಜ್ಯ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಪಕ್ಷದ ಜಿಲ್ಲಾ ಪ್ರಮುಖರಾದ ಡಾ.ಅರುಣಾಕಾಮಿನೇನಿ, ಎಚ್.ಹನುಮಂತಪ್ಪ, ನಗರ ಘಟಕ ಅಧ್ಯಕ್ಷ ಜಿ.ವೆಂಕಟರಮಣ, ಗುತ್ತಿಗನೂರು ವಿರುಪಾಕ್ಷಗೌಡ, ಪಕ್ಷದ ರೈತ ಮೋರ್ಚಾ ಪದಾಧಿಕಾರಿಗಳು ಹಾಗೂ ಪಕ್ಷದ ಜಿಲ್ಲಾ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.