ಸಿದ್ದು ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork | Published : Sep 26, 2024 10:18 AM

ಸಾರಾಂಶ

ಚಿಕ್ಕಬಳ್ಳಾಪುರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಚಿಕ್ಕಬಳ್ಳಾಪುರ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆಹೋಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ತಿರಸ್ಕೃತವಾದ ಬೆನ್ನಲ್ಲೇ, ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ, ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ನೀಡಿದ ಅನುಮತಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ಎತ್ತಿ ಹಿಡಿದಿದೆ. ಸಿದ್ದರಾಮಯ್ಯ ಅವರು ಮುಡಾ ಹಗರಣದಲ್ಲಿ ಭಾಗಿಯಾಗಿರುವುದು ಇದರಿಂದ ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಇಂತಹ ತೀರ್ಪು ಹೊರಬಿದ್ದಿದೆ. ಪ್ರಾಸಿಕ್ಯೂಷನ್‌ಗೆ ತಡೆ ಕೋರಿ ಸಿದ್ದರಾಮಯ್ಯ ಹಾಕಿದ್ದ ಅರ್ಜಿ ವಜಾಗೊಂಡಿದ್ದು, ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಹಗರಣದ ಪ್ರಕರಣವು ನ್ಯಾಯಾಲಯದಲ್ಲಿ ಇರುವುದರಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಂತಹ ಉನ್ನತ ಸ್ಥಾನದಲ್ಲಿ ಮುಂದುವರೆಯುವುದು ಸರಿಯಲ್ಲ. ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳಕುಂಟೆ ಕೃಷ್ಣಮೂರ್ತಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಹೈಕೋರ್ಟಿನ ತೀರ್ಪನ್ನು ಗೌರವಿಸಿ, ಅಕ್ರಮದ ಹೊಣೆ ಹೊತ್ತು, ನೈತಿಕತೆಯಿಂದ ಗೌರವಯುತವಾಗಿ ರಾಜೀನಾಮೆ ನೀಡಬೇಕು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅವಕಾಶ ಕೊಟ್ಟಿದ್ದ ರಾಜ್ಯಪಾಲರ ಕ್ರಮವನ್ನು ರಾಜ್ಯ ಹೈಕೋರ್ಟ್‌ ಎತ್ತಿ ಹಿಡಿದಿದೆ. ಹೈಕೋರ್ಟ್‌ನಲ್ಲಿ ಸುದೀರ್ಘ‌ ವಾದ, ಪ್ರತಿವಾದದ ಬಳಿಕ ಈ ತೀರ್ಪು ಹೊರಬಿದ್ದಿದೆ. ಕಾಂಗ್ರೆಸ್ಸಿಗರು ರಾಜ್ಯಪಾಲರು, ರಾಜಭವನವನ್ನು ಕೇಂದ್ರದ ಏಜೆಂಟ್‌ ಎಂದು ಆರೋಪಿಸಿದ್ದರು. ಆದರೆ ಈಗ ನ್ಯಾಯಾಲಯ ಅರ್ಜಿ ವಜಾ ಮಾಡಿದೆ. ಕಾನೂನಿನ ಎದುರು ಎಲ್ಲರೂ ಒಂದೇ ಎಂದು ಹೈಕೋರ್ಟ್‌ ತಿಳಿಸಿದೆ. ಹೀಗಾಗಿ ಕಾಂಗ್ರೆಸ್‌ ನಾಯಕರು ರಾಜ್ಯಪಾಲರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಕಾರ್ಯದರ್ಶಿ ಕೆ.ಬಿ.ಮುರಳಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮಾಜವಾದದ ಅಹಿಂದ ನಾಯಕನ ಮುಖವಾಡ ಕಳಚಿ ಬಿದ್ದಿದೆ. ಅವರು ತಕ್ಷಣವೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ. ಭ್ರಷ್ಟ ಕಾಂಗ್ರೆಸ್, ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ- ಜೆಡಿಎಸ್ ನಿರಂತರ ಹೋರಾಟ ನಡೆಸುತ್ತಿವೆ. ಈ ಹೋರಾಟ ಇದೀಗ ತಾರ್ಕಿಕ ಅಂತ್ಯಕ್ಕೆ ಬಂದಿದೆ. ಭಂಡತನ ಬಿಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು. ಆದರೆ, ಸಿದ್ದರಾಮಯ್ಯನವರು ಗೂಂಡಾಗಿರಿಗೆ ಇಳಿದಿದ್ದಾರೆ. ರಾಜ್ಯಪಾಲರ ಮೇಲೆ ಆರೋಪ ಮಾಡುವುದನ್ನು ಬಿಟ್ಟು, ಕೂಡಲೇ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕಿದೆ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ಮುಖಂಡರಾದ ಸುರೇಂದ್ರಗೌಡ, ನಿರ್ಮಲ, ಎ.ವಿ.ಬೈರೇಗೌಡ, ಮುರಳೀಧರ್, ಅಶೋಕ್ ಕುಮಾರ್, ಎಸ್‌.ಆರ್.ಎಸ್‌.ದೇವರಾಜ್, ಲಕ್ಷ್ಮೀನಾರಾಯಣ ಗುಪ್ತ, ಮುಸ್ಟೂರು ಶಶಿಕುಮಾರ್, ಲಕ್ಷ್ಮೀಪತಿ, ಮಧುಚಂದ್ರ, ಬಾಲು, ಮಂಜುನಾಥ್ ಮತ್ತಿತರರಿದ್ದರು.

Share this article