ರಾಜ್ಯ ಕಾಂಗ್ರೆಸ್ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮಂಡಲ ಬಿಜೆಪಿ ವತಿಯಿಂದ ಖಾಲಿ ಚೊಂಬುಗಳೊಂದಿಗೆ ಕನಕಗಿರಿ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
ಕನಕಗಿರಿ: ರಾಜ್ಯ ಕಾಂಗ್ರೆಸ್ ಸರ್ಕಾರವು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಮಂಡಲ ಬಿಜೆಪಿ ವತಿಯಿಂದ ಖಾಲಿ ಚೊಂಬುಗಳೊಂದಿಗೆ ಪಟ್ಟಣದ ವಾಲ್ಮೀಕಿ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
ಮಂಡಲ ಅಧ್ಯಕ್ಷ ಸಣ್ಣ ಕನಕಪ್ಪ ಮಾತನಾಡಿ, ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ರಾಜ್ಯ ಸರ್ಕಾರ ಜನರಿಗೆ ದುಬಾರಿ ಉಡುಗೊರೆ ನೀಡಿದೆ. ಹಾಲು, ಮೊಸರು, ತುಪ್ಪ, ಅಡುಗೆ ಎಣ್ಣೆ ಸೇರಿ ನಾನಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಗ್ರಾಹಕರು ಚಿಂತೆಯಲ್ಲಿದ್ದಾರೆ. ಮಳೆಯಿಲ್ಲದೇ ಬದುಕು ಸಾಗಿಸುತ್ತಿರುವ ರೈತರಿಗೆ ಬೆಲೆ ಏರಿಕೆಯ ಬಿಸಿ ಹೆಚ್ಚಾಗಿದೆ. ಇದರಿಂದ ರಾಜ್ಯವ್ಯಾಪಿ ರೈತರು ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ. ಇನ್ನೂ ಮಹಿಳೆಯರಿಗೂ ಗ್ಯಾರಂಟಿ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ಸರ್ಕಾರ ದಿವಾಳಿಯಾಗಿರುವುದನ್ನು ಸ್ವತಃ ಮುಖ್ಯಮಂತ್ರಿಗಳೇ ಒಪ್ಪಿಕೊಂಡಿದ್ದು, ಇತ್ತ ಆರ್ಥಿಕ ಇಲಾಖೆ ಸದ್ಯಕ್ಕೆ ಯಾವ ಯೋಜನೆಗಳನ್ನು ಘೋಷಿಸದಂತೆ ಸೂಚಿಸಿದ್ದರೂ ಹೋದಲೆಲ್ಲ ಸಚಿವರು, ಶಾಸಕರು, ಜನರಿಗೆ ಪೊಳ್ಳು ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ಮುಂಬರುವ ತಾಪಂ ಹಾಗೂ ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಜನ ತಕ್ಕಪಾಠ ಕಲಿಸುತ್ತಾರೆ ಎಂದರು.
ಹಿರಿಯ ಮುಖಂಡ ಮಹಾಂತೇಶ ಸಜ್ಜನ ಮಾತನಾಡಿ, ಸಚಿವ ಶಿವರಾಜ ತಂಗಡಗಿ ಅವರು ಮಾತನಾಡುವುದನ್ನು ಕಡಿಮೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಕಡೆ ಗಮನ ಕೊಡಬೇಕು. ಗ್ರಾಮೀಣ ಭಾಗದ ರಸ್ತೆಗಳು ತೀರಾ ಹದಗೆಟ್ಟಿದ್ದು, ಜನರು ಓಡಾಟ ದುಸ್ತರವಾಗಿದೆ. ಈ ಬಗ್ಗೆ ಮಂತ್ರಿಗಳು ಕಣ್ತೆರೆದು ನೋಡಬೇಕು. ಇನ್ನೂ ಬರಗಾಲ ಘೋಷಣೆಗೆ ಸೀಮಿತವಾಗಿದ್ದು, ರೈತರು ಪರಿಹಾರಕ್ಕೆ ಎದುರು ನೋಡುವ ಪರಿಸ್ಥಿತಿ ನಿರ್ಮಾಣವಾದರೂ ಸರ್ಕಾರ ಪರಿಹಾರದ ಹಣ ಬಿಡುಗಡೆಗೊಳಿಸುತ್ತಿಲ್ಲ. ಕಾಂಗ್ರೆಸ್ ನುಡಿದಂತೆ ನಡೆಯುತ್ತಿಲ್ಲ. ಮತದಾರರ ಮೇಲೆ ಸವಾರಿ ಮಾಡುತ್ತಿದ್ದು, ಪ್ರತಿಯೊಬ್ಬ ಮತದಾರ ಎಚ್ಚೆತ್ತುಕೊಳ್ಳಬೇಕೆಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.