ಕನ್ನಡಪ್ರಭ ವಾರ್ತೆ ಮಡಿಕೇರಿ
ಮುಡಾದಿಂದ ಸಿದ್ದರಾಮಯ್ಯ ತಮ್ಮ ಪತ್ನಿಯ ಹೆಸರಿನಲ್ಲಿ ನಿವೇಶನಗಳನ್ನು ಪಡೆದುಕೊಂಡು ನಿಯಮ ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹೇಳಿದ್ದಾರೆ.ಮುಡಾ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ಮಡಿಕೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಬಿಜೆಪಿ ಕಾರ್ಯಕರ್ತರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿ ಅಸಮಧಾನ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತನಿಖೆಗೆ ಸಹಕರಿಸಬೇಕೆಂದು ಒತ್ತಾಯಿಸಿದರು.
ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಬರೋಬ್ಬರಿ 14 ನಿವೇಶನಗಳನ್ನು ನುಂಗಿದ್ದಾರೆ. ಇದನ್ನು ತನಿಖೆ ಮಾಡಲು ರಾಜ್ಯಪಾಲರು ಅನುಮತಿ ನೀಡಿದರೆ ಕಾಂಗ್ರೆಸ್ ನಾಯಕರು ಮನಸ್ಸೋ ಇಚ್ಛೆ ರಾಜ್ಯಪಾಲರನ್ನು ನಿಂದಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ನೈತಿಕತೆ ಇದ್ದರೆ ಮೊದಲು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದರು.
ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮೆರವಣಿಗೆ ಮೂಲಕ ಜಿಲ್ಲಾಡಳಿತದ ಭವನಕ್ಕೆ ತೆರಳಿ ಮನವಿ ಸಲ್ಲಿಸಿದರು. ಪ್ರತಿಭಟನಾ ಮೆರವಣಿಗೆಯ ಉದ್ಧಕ್ಕೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.