ಕನ್ನಡಪ್ರಭ ವಾರ್ತೆ ಬೆಳಗಾವಿ ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸಿ, ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಹರೀಶ ದ್ವಿವೇದಿ ಅವರು ಸಂಸದರು, ಶಾಸಕರು ಹಾಗೂ ಮಾಜಿ ಶಾಸಕರಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಮುಂಬರುವ ಜಿಪಂ ಹಾಗೂ ತಾಪಂ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಬಲಪಡಿಸಿ, ಚುನಾವಣೆಗೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಹರೀಶ ದ್ವಿವೇದಿ ಅವರು ಸಂಸದರು, ಶಾಸಕರು ಹಾಗೂ ಮಾಜಿ ಶಾಸಕರಿಗೆ ವಿವಿಧ ಜವಾಬ್ದಾರಿಗಳನ್ನು ವಹಿಸಿದರು.
ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಭಾನುವಾರ ಹರೀಶ ದ್ವಿವೇದಿ ನೇತೃತ್ವದಲ್ಲಿ ಸುಮಾರು 2 ಗಂಟೆಗಳ ಕಾಲ ಬೆಳಗಾವಿ ವಿಭಾಗ ಮಟ್ಟದ ಸಂಘಟನಾತ್ಮಕ ಸಭೆ ನಡೆಯಿತು. ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ಪಕ್ಷದ ಸಂಘಟನಾತ್ಮಕ ಸ್ಥಿತಿಗತಿ ಕುರಿತು ಸಭೆಯಲ್ಲಿ ಪರಾಮರ್ಶೆ ನಡೆಸಲಾಯಿತು.
ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಿದ್ಧತೆ, ಚುನಾವಣಾ ಕಾರ್ಯತಂತ್ರ ಹಾಗೂ ಸಂಘಟನೆಯನ್ನು ಬಲಪಡಿಸುವ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಿಷ್ಠಗೊಳಿಸುವುದು, ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ ಮತ್ತು ಜನಸಾಮಾನ್ಯರೊಂದಿಗೆ ನಿರಂತರ ಸಂಪರ್ಕ ಹೊಂದುವ ಮೂಲಕ ಚುನಾವಣೆಗೆ ಸಜ್ಜಾಗುವಂತೆ ಮುಖಂಡರಿಗೆ ಸೂಚಿಸಲಾಯಿತು.
ನಾಲ್ಕು ಜಿಲ್ಲೆಗಳಲ್ಲಿ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಿಗೆ ವೇಗ ನೀಡುವುದು, ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು. ಸಂಸದರು, ಶಾಸಕರು ಮತ್ತು ಮಾಜಿ ಶಾಸಕರಿಗೆ ನಿರ್ದಿಷ್ಟ ಜವಾಬ್ದಾರಿಗಳನ್ನು ವಹಿಸಿ, ಸಂಘಟನಾತ್ಮಕ ಚಟುವಟಿಕೆಗಳ ಪ್ರಗತಿಯತ್ತ ಗಮನ ಹರಿಸುವಂತೆ ಹರೀಶ ದ್ವಿವೇದಿ ಸೂಚಿಸಿದರು.
ಸಭೆಯಲ್ಲಿ ಸಂಸದರಾದ ಜಗದೀಶ ಶೆಟ್ಟರ್, ಪಿ.ಸಿ.ಗದ್ದಿಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ವಿಭಾಗ ಪ್ರಭಾರಿ ಸಂಜಯ ಪಾಟೀಲ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಬಾಲಚಂದ್ರ ಜಾರಕಿಹೊಳಿ, ಶಾಸಕರಾದ ಅಭಯ ಪಾಟೀಲ, ಶಶಿಕಲಾ ಜೊಲ್ಲೆ, ವಿಠ್ಠಲ ಹಲಗೇಕರ, ಸಿದ್ದು ಸವದಿ, ದುರ್ಯೋಧನ ಐಹೊಳೆ, ನಿಖಿಲ್ ಕತ್ತಿ, ಹನುಮಂತ ನಿರಾಣಿ, ಮುರುಗೇಶ್ ನಿರಾಣಿ, ಪಿ.ಎಚ್. ಪೂಜಾರ್, ಅನಿಲ ಬೆನಕೆ, ಎಸ್.ಕೆ. ಬೆಳ್ಳುಬ್ಬಿ, ಶ್ರೀಮಂತ ಪಾಟೀಲ, ರಮೇಶ ಕತ್ತಿ, ಮಂಗಲ ಅಂಗಡಿ, ಈರಣ್ಣ ಕಡಾಡಿ, ಅಣ್ಣಾಸಾಹೇಬ ಜೊಲ್ಲೆ, ವಿಭಾಗ ಸಹಪ್ರಭಾರಿ ಬಸವರಾಜ ಯಂಕಂಚಿ, ಗುರುಲಿಂಗಪ್ಪ ಅಂಗಡಿ, ಶಾಂತಗೌಡ ಪಾಟೀಲ ಸೇರಿದಂತೆ ಮಾಜಿ ಶಾಸಕರು ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.