ಕನ್ನಡಪ್ರಭ ವಾರ್ತೆ ಬೆಂಗಳೂರು
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸೇವಾ ಪಾಕ್ಷಿಕ ಅಭಿಯಾನದಡಿ 75 ಮಂದಿ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಜತೆಗೆ ಸ್ವಚ್ಛತಾ ಕಾರ್ಯವೂ ನಡೆಯಿತು.
ಈ ವೇಳೆ ಮಾತಾನಾಡಿದ ಯಡಿಯೂರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವ್ಯಕ್ತಿತ್ವ, ನಾಯಕತ್ವ, ದೂರದೃಷ್ಟಿ ಕೇವಲ ಭಾರತೀಯರಿಗೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಆದರ್ಶ ಮತ್ತು ಪ್ರೇರಣೆಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್ ಇದ್ದರು.ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಧಾನಿ ಮೋದಿ ಅವರ ಜೀವನ ಕುರಿತ ಚಿತ್ರಪ್ರದರ್ಶನವನ್ನು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಉದ್ಘಾಟಿಸಿದರು. ಇದೇ ವೇಳೆ ರಕ್ತದಾನ ಶಿಬಿರ ನಡೆಸಿ 75 ಬಾಟಲ್ ರಕ್ತ ಸಂಗ್ರಹಿಸಲಾಯಿತು. ಸಂಸದ ಗೋವಿಂದ ಕಾರಜೋಳ, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್, ಸ್ಥಳೀಯ ಶಾಸಕ ಸಿ.ಕೆ.ರಾಮಮೂರ್ತಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ವಾರ್ಡ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಲಾಯಿತು. ಕರಿಮಾರಿಯಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ 75 ಕೆ.ಜಿ. ಗಾತ್ರದ ಕೇಕ್ ಕತ್ತರಿಸಲಾಯಿತು. ಈ ವೇಳೆ ಶಾಸಕ ಎಸ್.ಸುರೇಶ್ ಕುಮಾರ್, ಸಂಸದ ಪಿ.ಸಿ.ಮೋಹನ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿಗೌಡ ಮತ್ತಿತರರು ಉಪಸ್ಥಿತರಿದ್ದರು.ವಿಶೇಷ ಪೂಜೆ:
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಮಲ್ಲೇಶ್ವರದ ಕಾಡುಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಈ ವೇಳೆ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಂಸದ ಬ್ರಿಜೇಶ್ ಚೌಟ, ಮಾಜಿ ಶಾಸಕ ಪಿ.ರಾಜೀವ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.