ಕನ್ನಡಪ್ರಭ ವಾರ್ತೆ ಬಳ್ಳಾರಿ
ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಭಾನುವಾರ ಸಂಜೆ ಜಮಾಯಿಸಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಮುರಹರಗೌಡ ಗೋನಾಳ್, ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಪೈಕಿ ನಿರೀಕ್ಷೆಯಂತೆಯೇ ಬಿಜೆಪಿ ಮೂರು ಕಡೆ ಜಯಭೇರಿ ಬಾರಿಸಿದೆ. ಈ ಮೂಲಕ ಜನವಿರೋಧಿ ಕಾಂಗ್ರೆಸ್‌ಗೆ ಮತದಾರರು ಸೂಕ್ತ ಪಾಠ ಕಲಿಸಿದ್ದಾರೆ ಎಂದರು.ಇಡೀ ದೇಶದಲ್ಲಿ ಬಿಜೆಪಿ ಪರ ವಾತಾವರಣವಿದೆ. ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ. ನರೇಂದ್ರ ಮೋದಿ ಅವರು ಮತ್ತೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ ಎಂಬ ಸಂದೇಶವನ್ನು ಮೂರು ರಾಜ್ಯಗಳ ಮತದಾರರು ನೀಡಿದ್ದಾರೆ ಎಂದರು.
ಪಕ್ಷದ ಮುಖಂಡರಾದ ಮೋತ್ಕರ್ ಶ್ರೀನಿವಾಸ್, ಡಾ. ಮಹಿಪಾಲ್, ವೀರಶೇಖರರೆಡ್ಡಿ, ಮಲ್ಲನಗೌಡ, ಶಿವಶಂಕರ ರೆಡ್ಡಿ ಎಚ್. ವೀರಾಪುರ, ಬಿಜೆಪಿ ನಗರ ಘಟಕ ಅಧ್ಯಕ್ಷ ಕೆ.ಬಿ. ವೆಂಕಟೇಶ್ವರ, ಸಾಧನಾ ಹಿರೇಮಠ, ವಿಜಯಲಕ್ಷ್ಮಿ, ಸುರೇಖಾ ಮಲ್ಲನಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುಗುಣ, ಜ್ಯೋತಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷದ ಅಭಿಮಾನಿಗಳು ಭಾಗವಹಿಸಿದ್ದರು.