ಬಳ್ಳಾರಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಹಾಗೂ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದಿರುವ ಘಟನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ರಾಜಕೀಯ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಲು ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಆದರೆ, ಪ್ರತಿಭಟನೆಯ ಹೆಸರಿನಲ್ಲಿ ವ್ಯಕ್ತಿಗಳ ಮೇಲೆ ಮೊಟ್ಟೆ ಎಸೆಯುವುದು, ಅವಮಾನಿಸುವುದು ಮತ್ತು ಹಲ್ಲೆ ನಡೆಸುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ. ಪ್ರಧಾನಿ ನಿವಾಸದಂತಹ ಅತ್ಯಂತ ಸೂಕ್ಷ್ಮ ಭದ್ರತಾ ಪ್ರದೇಶದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ಖಂಡನಾರ್ಹವಾದದ್ದು. ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಬೇಕಿತ್ತು. ಭಿನ್ನಾಭಿಪ್ರಾಯಗಳಿದ್ದರೆ ಚರ್ಚೆ, ಸಂವಾದ ಹಾಗೂ ಕಾನೂನುಬದ್ಧ ಹೋರಾಟದ ಮೂಲಕ ವ್ಯಕ್ತಪಡಿಸಬೇಕು. ಆದರೆ ಹಲ್ಲೆ, ಅವಮಾನ ಹಾಗೂ ಅಶಿಸ್ತಿನ ವರ್ತನೆಗೆ ಪ್ರೋತ್ಸಾಹ ನೀಡುವುದು ಸರಿಯಲ್ಲ. ರಾಜಕೀಯ ದ್ವೇಷದ ಹೆಸರಿನಲ್ಲಿ ವ್ಯಕ್ತಿಗಳ ಮೇಲೆ ದಾಳಿ ನಡೆಸುವ ಸಂಸ್ಕೃತಿಗೆ ಅವಕಾಶ ನೀಡಬಾರದು ಎಂದು ಹೇಳಿದರು.
ನಗರದ ಗಡಗಿ ಚನ್ನಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ತಿಳಿಗೊಳಿಸಿದರು. ಪಕ್ಷದ ಜಿಲ್ಲಾ ಪ್ರಮುಖರಾದ ಡಾ. ಎಸ್.ಜೆ.ವಿ. ಮಹಿಪಾಲ್, ಎಸ್. ಗುರುಲಿಂಗನಗೌಡ, ಗುತ್ತಿಗನೂರು ವಿರೂಪಾಕ್ಷಗೌಡ, ಸಾಧನಾ ಹಿರೇಮಠ, ವಿಜಯಲಕ್ಷ್ಮಿ, ಪುಷ್ಪಾ, ವೆಂಕಟರಮಣ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹಂಪಿರಮಣ, ಪಾಲಿಕೆ ಸದಸ್ಯೆ ಸುರೇಖಾ ಗೌಡ, ಅಮೂಲ್ಯಾ ಭಾಗವಹಿಸಿದ್ದರು.