ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಪೆಟ್ರೋಲ್ ಮತ್ತು ಡೀಸೆಲ್ ದರ ಬೆಲೆ ಏರಿಕೆ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಹಳೇ ಬಸ್ ನಿಲ್ದಾಣದಿಂದ ಮೆರವಣಿಗೆ ಬಿಜೆಪಿ ಕಾರ್ಯಕರ್ತರು ಹೆದ್ದಾರಿ ಮೂಲಕ ಸಾಗಿ ಎಂಡಿಸಿಸಿ ಬ್ಯಾಂಕ್ ಮುಂಭಾಗ - ಮಾನವ ಸರಪಳಿ ನಿರ್ಮಿಸಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.ನಂತರ ತಾಲೂಕು ಕಚೇರಿ ಮುಂದೆ ಜಮಾವಣೆಗೊಂಡ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್. ನಿರಂಜನ್ ಕುಮಾರ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ - ದಿನನಿತ್ಯ ಒಂದಲ್ಲ ಒಂದು ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿದೆ, ಪಂಚ ಗ್ಯಾರಂಟಿ ಈ ಯೋಜನೆಯನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದು ಕಾಂಗ್ರೆಸ್ ಸರ್ಕಾರ ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಲೆಲ್ಲ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸುತ್ತಿದೆ. ಇಂತಹ ಸಮಯದಲ್ಲಿ ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಹೆಚ್ಚಿಸುವ ಮೂಲಕ ಜನರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಕಿಡಿಕಾರಿದರು.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಅರಕಲವಾಡಿ ನಾಗೇಂದ್ರ ಮಾತನಾಡಿ ಕಾಂಗ್ರೆಸ್ ಸರ್ಕಾರ ಬಿಟ್ಟಿ ಭಾಗ್ಯಗಳಿಗೆ ಹಣವನ್ನು ಸರಿ ಹೊಂದಿಸಿಕೊಳ್ಳಲು ಜನಸಾಮಾನ್ಯರ ಮೇಲೆ ಇಂಧನ ದರವನ್ನು ಏರಿಸಿ ಪರೋಕ್ಷವಾಗಿ ಜನರನ್ನು ಆರ್ಥಿಕ ಸಂಕಷ್ಟಕ್ಕೆ ಎಡೆಮಾಡಿಕೊಟ್ಟಿದೆ ಎಂದು ದೂರಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಿ. ಮಹದೇವಪ್ರಸಾದ್, ಹಾಪ್ ಕಾಮ್ಸ್ ಜಿಲ್ಲಾಧ್ಯಕ್ಷ ಕೆ.ಆರ್. ಲೋಕೇಶ್, ಬಿಜೆಪಿಯ ಎನ್. ಮಲ್ಲೇಶ್, ಎಲ್. ಸುರೇಶ್,ನಾಗೇಶ್, ಕನ್ನೇಗಾಲ ಸ್ವಾಮಿ, ದೇವರಹಳ್ಳಿ ನಾಗೇಂದ್ರ, ಮಾಡ್ರಹಳ್ಳಿ ನಾಗೇಂದ್ರ, ಚಿಕ್ಕಾಟಿ ಶಿವಣ್ಣ, ಮೂಡ್ನಾಕೂಡು ಪ್ರಕಾಶ್, ರಾಜಶೆಟ್ಟಿ ಭಾಗವಹಿಸಿದ್ದರು.