ಕುಷ್ಟಗಿ: ತಾಲೂಕಿನ ಜಾಲಿಹಾಳ–ರ‍್ಯಾವಣಕಿ ಗ್ರಾಮದ ಹಳ್ಳಕ್ಕೆ ಹಲವು ವರ್ಷಗಳಿಂದ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಸಲ್ಲಿಸುತ್ತಿದ್ದ ಬೇಡಿಕೆಗೆ ಸ್ಪಂದಿಸಿ, 2025–26ನೇ ಸಾಲಿನ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಾಕ್ಸ್ ಕಲ್ವರ್ಟ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.
ಕಲ್ವರ್ಟ್ ನಿರ್ಮಾಣದಿಂದ ಮಳೆನೀರು ಸರಾಗವಾಗಿ ಹರಿದು ಹೋಗಲಿದ್ದು, ಮಳೆಗಾಲದಲ್ಲಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಪರಿಸ್ಥಿತಿ ತಪ್ಪಲಿದೆ. ಜಾಲಿಹಾಳ, ರ‍್ಯಾವಣಕಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹಾಗೂ ರೈತರಿಗೆ ಅನುಕೂಲವಾಗಲಿದೆ. ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಕನ್ನಡಪ್ರಭ ವರದಿ ಸ್ಮರಣೆ: ಜಾಲಿಹಾಳ–ರ‍್ಯಾವಣಕಿ ಹಳ್ಳಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಹಲವು ವರ್ಷಗಳಿಂದ ಬೇಡಿಕೆ ಇಡುತ್ತಿದ್ದರು ಹಾಗೂ ಮಳೆಗಾಲದ ಸಂಚಾರ ಸಮಸ್ಯೆ ಕುರಿತು 2025ರ ಜು. 21ರಂದು ‘ಜಾಲಿಹಾಳ–ರ‍್ಯಾವಣಕಿ ಹಳ್ಳಕ್ಕೆ ಸೇತುವೆ ನಿರ್ಮಿಸಿ’ ಎಂಬ ಶೀರ್ಷಿಕೆಯಡಿ ‘ಕನ್ನಡಪ್ರಭ’ದಲ್ಲಿ ವರದಿ ಪ್ರಕಟಿಸಲಾಗಿತ್ತು. ವಿದ್ಯಾರ್ಥಿಗಳು, ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿದ್ದ ಸಮಸ್ಯೆ ಮತ್ತು ಸೇತುವೆ ನಿರ್ಮಾಣದ ಅಗತ್ಯವನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿತ್ತು.ಸಮಸ್ಯೆಗೆ ಪರಿಹಾರ: ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಬಲಪಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು ಆದ್ಯತೆಯಾಗಿದೆ. ಮಳೆಗಾಲದಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಈ ಸ್ಥಳದಲ್ಲಿ ಬಾಕ್ಸ್ ಕಲ್ವರ್ಟ್ ನಿರ್ಮಾಣದಿಂದ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿ ಗುಣಮಟ್ಟದಿಂದ ಪೂರ್ಣಗೊಳ್ಳುವಂತೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಶಾಸಕ ದೊಡ್ಡನಗೌಡ ಪಾಟೀಲ್ ಹೇಳಿದರು.