ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತನ್ನಿ

KannadaprabhaNewsNetwork |  
Published : Dec 23, 2023, 01:45 AM IST
ಬಳ್ಳಾರಿಯ ವಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿದ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಆಸ್ಪತ್ರೆಯಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು. | Kannada Prabha

ಸಾರಾಂಶ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಬಳ್ಳಾರಿಯ ಜಿಪಂನ ನಜೀರ್ ಸಭಾಂಗಣದಲ್ಲಿ ಸಮಾಲೋಚನೆ ಸಭೆ ನಡೆಸಿದರು. ಜಿಲ್ಲೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಪ್ರಯತ್ನ ಮಾಡಬೇಕು ಎಂದರು.

ಬಳ್ಳಾರಿ: ಜಿಲ್ಲೆಯಲ್ಲಿ 6 ಸಾವಿರಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ವಂಚಿತರಾಗಿದ್ದಾರೆ ಎಂಬುದು ಶಿಕ್ಷಣ ಇಲಾಖೆಯ ಅಂಕಿ ಅಂಶದಿಂದಲೇ ತಿಳಿದು ಬಂದಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆ ತರುವ ಪ್ರಯತ್ನ ಮಾಡಬೇಕು. ಈ ಕುರಿತು ಡಿಡಿಪಿಐ ಸೂಕ್ತ ಕ್ರಮ ವಹಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಿಪಂನ ನಜೀರ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಮಕ್ಕಳ ಪಾಲನಾ ಸಂಸ್ಥೆ, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಸಮಾಲೋಚನಾ ಸಭೆ ನಡೆಸಿ ಅವರು ಮಾತನಾಡಿದರು. ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಾಣಂತಿಯರಿಗೆ ಸರಿಯಾದ ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲದಿರುವುದು ಕಂಡು ಬಂದಿದೆ. ಚಳಿಗಾಲ ಸಂದರ್ಭದಲ್ಲಿ ಬಾಣಂತಿಯರ ಕ್ಷೇಮ ಅತಿ ಮುಖ್ಯವಾದುದು. ಸಂಬಂಧಿಸಿದ ಅಧಿಕಾರಿಗಳು ತುರ್ತು ಕ್ರಮ ವಹಿಸಿ ಎಂದು ಸೂಚಿಸಿದರು.ಜಿಲ್ಲೆಯಲ್ಲಿ ಜನವರಿಯಿಂದ ಇಲ್ಲಿಯವರೆಗೆ 107 ಬಾಲ್ಯ ವಿವಾಹ ಪ್ರಕರಣಗಳು ನಡೆದಿದ್ದು, ಇದರಲ್ಲಿ 103 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆ ಹಿಡಿಯಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯ್ಕ ಅವರು ಆಯೋಗದ ಸದಸ್ಯರಿಗೆ ತಿಳಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಶಶಿಧರ ಕೋಸಂಬೆ, ಸಮುದಾಯ ಮಟ್ಟದಲ್ಲಿ ಹಾಗೂ ಗ್ರಾಪಂ ಮಟ್ಟದಲ್ಲಿ ಗ್ರಾಮಸಭೆ ನಡೆಸಿ, ವಿವಿಧ ಇಲಾಖೆಗಳ ಸಹಕಾರದೊಂದಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮ ಕುರಿತು, ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ನಿರ್ದೇಶನ ನೀಡಿದರು.ಕಂಪ್ಲಿಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ವಸತಿ ಶಾಲೆ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳಿಗೆ ಬಿಸಿ ನೀರಿನ ವ್ಯವಸ್ಥೆ ಇಲ್ಲ, ಶಾಲೆಯ ಆವರಣದಲ್ಲಿ ಹಂದಿ ಹಾವಳಿ ಇದೆ. 50ಕ್ಕೂ ಹೆಚ್ಚು ಮಕ್ಕಳು ಗೈರುಹಾಜರಾಗಿದ್ದಾರೆ. ಶಿಕ್ಷಕರು ಗೈರಾಗಿದ್ದರು. ಆಹಾರ ಪದ್ಧತಿಯಲ್ಲಿ ನ್ಯೂನತೆ ಕಂಡು ಬಂದಿದೆ ಎಂದರಲ್ಲದೆ, ಕೂಡಲೇ ಸೂಕ್ತ ಕಟ್ಟಡಕ್ಕಾಗಿ ಕೇಂದ್ರ ಕಚೇರಿಗೆ ಪತ್ರ ಬರೆಯಬೇಕು. ತ್ವರಿತವಾಗಿ ಬಿಸಿನೀರಿನ ವ್ಯವಸ್ಥೆ ಮಾಡಿಕೊಡಬೇಕು. ಯಾದಗಿರಿ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಘಟನೆ ಮರುಕಳಿಸಬಾರದು ಎಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನಿ, ಜಿಪಂ ಯೋಜನಾ ನಿರ್ದೇಶಕ ಪ್ರಮೋದ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಎಚ್. ವಿಜಯಕುಮಾರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮಿ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಮ್ಸ್ ಆಸ್ಪತ್ರೆಗೆ ಭೇಟಿ: ನಗರದ ವಿಮ್ಸ್ ಆಸ್ಪತ್ರೆಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಭೇಟಿ ನೀಡಿ ಪರಿಶೀಲಿಸಿದರು.

ವಿವಿಧ ವಾರ್ಡ್‌ಗಳಿಗೆ ತೆರಳಿ ಸ್ಥಳೀಯವಾಗಿ ದೊರೆಯುವ ಚಿಕಿತ್ಸೆ ಹಾಗೂ ವಿವಿಧ ವೈದ್ಯಕೀಯ ಸೌಕರ್ಯಗಳ ಕುರಿತು ರೋಗಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಮ್ಸ್‌ ಆಸ್ಪತ್ರೆಯ ಬಾಣಂತಿಯರ ಘಟಕಗಳಲ್ಲಿ ಶೌಚಾಲಯ ಮತ್ತು ಸ್ನಾನದ ಕೊಠಡಿಗಳ ನಿರ್ವಹಣೆ ಸರಿಯಾಗಿಲ್ಲ. ಬಾಣಂತಿಯರಿಗೆ ಬಿಸಿನೀರು ಸೌಕರ್ಯವಿಲ್ಲ. ಈ ಕುರಿತು ಗಮನ ಹರಿಸಿ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ವಿಮ್ಸ್‌ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದರು.

ಕಳೆದ ಎರಡು ಮೂರು ವರ್ಷಗಳಿಂದ ಪೌಷ್ಟಿಕ ಪುನಶ್ಚೇತನ ಘಟಕದಲ್ಲಿ ಕೆಲಸ ನಿರ್ವಹಿಸುವ ತಾಯಂದಿರ ದಿನಗೂಲಿಯ ಅನುದಾನ ನೀಡಿಲ್ಲ, ತಾಯಂದಿಯರು ಬಡವರು ಇರುತ್ತಾರೆ. ಸಂಬಂಧಪಟ್ಟ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳು 400 ಜನರ ದಿನಗೂಲಿ ಅನುದಾನಕ್ಕೆ ಕ್ರಮವಹಿಸುವಂತೆ ಸೂಚನೆ ನೀಡಿರುವೆ ಎಂದು ತಿಳಿಸಿದರು. ವಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಜರಿದ್ದರು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ