ಸಿಎಂ ಕಾರ್ಯಕ್ರಮಕ್ಕೆ ಗ್ಯಾರಂಟಿ ಫಲಾನುಭವಿಗಳನ್ನು ಕರೆತನ್ನಿ: ರೆಡ್ಡಿ ಶ್ರೀನಿವಾಸ

KannadaprabhaNewsNetwork |  
Published : Sep 30, 2025, 12:00 AM IST
ಕೊಪ್ಪಳ ಜಿಪಂ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು. | Kannada Prabha

ಸಾರಾಂಶ

ಕೊಪ್ಪಳ ಜಿಪಂನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಸೋಮವಾರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಕೊಪ್ಪಳ: ಅ. 6ರಂದು ಕೊಪ್ಪಳದಲ್ಲಿ ನಡೆಯಲಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲು ಸಂಬಂಧಿಸಿದ ಎಲ್ಲ ಅಧಿಕಾರಿಗಳು ಅಗತ್ಯ ಕ್ರಮವಹಿಸಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.

ಇಲ್ಲಿಯ ಜಿಪಂನ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿ ಮಾಡಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಫಲಾನುಭವಿಗಳನ್ನು ಕರೆತರಲು ಅಧಿಕಾರಿಗಳಿಗೆ ಸಹಕರಿಸಬೇಕು ಎಂದು ಸೂಚಿಸಿದರು.

ಪ್ರತಿಯೊಂದು ಬೂತ್ ಮಟ್ಟದಲ್ಲಿ ಬಸ್ ವ್ಯವಸ್ಥೆ ಮಾಡಬೇಕು. ವಿಶೇಷವಾಗಿ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಫಲಾನುಭವಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಮಾತನಾಡಿ, ನಮ್ಮ ಜಿಲ್ಲೆಯಲ್ಲಿನ ಫಲಾನುಭವಿಗಳ ಪಟ್ಟಿಮಾಡಿ, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡು ಸಣ್ಣ ಉದ್ಯಮ ಪ್ರಾರಂಭಿಸಿದವರು, ಹೈನುಗಾರಿಕೆ ಮಾಡುತ್ತಿರುವವರು ಹಾಗೂ ಇತರ ಉತ್ತಮ ಕಾರ್ಯಕ್ಕೆ ಈ ಯೋಜನೆ ಬಳಸಿಕೊಂಡವರ ವಿಡಿಯೋ ಮತ್ತು ಫೋಟೋಗಳನ್ನು ಸಂಗ್ರಹಿಸಿ, ಅದನ್ನು ಒಂದು ಬುಕ್‌ಲೆಟ್ ತಯಾರಿಸಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯಿಂದ ಬಿಡುಗಡೆಗೊಳಿಸೋಣ ಎಂದರು.

ಕಾರ್ಯಕ್ರಮಕ್ಕೆ ಜನರನ್ನು ಕರೆ ತರಲು ಒಟ್ಟು 1,537 ಬಸ್‌ ವ್ಯವಸ್ಥೆ ಮಾಡಲಾಗಿದೆ. ಪ್ರತಿ ತಾಲೂಕುವಾರು ಜನಸಂಖ್ಯೆಗೆ ಅನುಗುಣವಾಗಿ ಬಸ್ ಕಲ್ಪಿಸಲಾಗುವುದು. ಸಿಡಿಪಿಒ ಮತ್ತು ಅಂಗನವಾಡಿ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳನ್ನು ಕರೆತರಲು ಎಲ್ಲ ರೀತಿಯಲ್ಲಿ ತಯಾರಿ ಮಾಡಿಕೊಂಡಿದ್ದಾರೆ ಎಂದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರಗತಿ ವರದಿ ನೀಡಿದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಗೊಂಡಬಾಳ, ಅಮರೇಶಪ್ಪ ಎಸ್.ಜಿ., ಕಾಸಿಮ್ ಸಾಬ್ ಮರ್ದಾನ್ ಸಾಬ್, ಗ್ಯಾರಂಟಿ ಯೋಜನೆಗಳ ನೋಡಲ್ ಅಧಿಕಾರಿಗಳು ಹಾಗೂ ಜಿಪಂ ಉಪಕಾರ್ಯದರ್ಶಿ ಟಿ. ಕೃಷ್ಣಮೂರ್ತಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ