ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆ ಶಿಕ್ಷಣ ಇಲಾಖೆ, ಅಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರ ಸಮನ್ವಯದ ಪ್ರಯತ್ನದಿಂದ ಮಂಡ್ಯ ಜಿಲ್ಲೆ ರಾಜ್ಯದಲ್ಲಿ ಐದನೇ ಸ್ಥಾನ ಗಳಿಸಿರುವುದು ಹೆಮ್ಮೆಯ ಸಂಗತಿ. ಶೇ.೦.೭ ಫಲಿತಾಂಶದ ವ್ಯತ್ಯಾಸದಲ್ಲಿ ಮೊದಲ ಸ್ಥಾನ ಕೈತಪ್ಪಿದೆ. ಮುಂದಿನ ದಿನಗಳಲ್ಲಿ ಶಿಕ್ಷಕರು ಹಾಗೂ ಇಲಾಖೆಯ ಅಧಿಕಾರಿಗಳು ಇನ್ನಷ್ಟು ಶ್ರಮ ವಹಿಸಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯನ್ನು ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನಕ್ಕೆ ಕೊಂಡೊಯ್ಯಬೇಕು. ಜಿಲ್ಲೆ ಉತ್ತಮ ಫಲಿತಾಂಶದೊಂದಿಗೆ ಮೊದಲ ಸ್ಥಾನ ಗಳಿಸಿದರೆ ಶಿಕ್ಷಕರಿಗೆ ವಿಶೇಷ ಉಡುಗೊರೆ ನೀಡಿ ಗೌರವಿಸಲಾಗುವುದು ಎಂದು ಘೋಷಿಸಿದರು.
ಶಾಸಕ ಪಿ.ರವಿಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು ೧,೮೦೦ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ. ಮಂಡ್ಯ ತಾಲೂಕಿನಲ್ಲಿ ಈಗಾಗಲೇ ೬೦ ಶಾಲೆಗಳನ್ನು ದುರಸ್ಥಿ ಮಾಡಲಾಗಿದ್ದು, ಮುಂದಿನ ಹಂತದಲ್ಲಿ ೪೦ ಶಾಲೆಗಳ ದುರಸ್ಥಿಗೆ ಅನುದಾನ ಒದಗಿಸಲಾಗಿದೆ. ಶೀಘ್ರದಲ್ಲೇ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.ಶಿಕ್ಷಕರ ಬೇಡಿಕೆಗಳಿಗೆ ಸರ್ಕಾರ ಬದ್ಧವಾಗಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಶಿಕ್ಷಕರು ಪಾರದರ್ಶಕವಾಗಿ ಹಾಗೂ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುವುದರ ಜೊತೆಗೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.
---
ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರನ್ನು ಅನ್ಯ ಕಾರ್ಯಗಳಿಗೆ ನಿಯೋಜಿಸಬಾರದು. ಇದರಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತಗೊಳ್ಳಲಿದೆ ಎಂದು ವಿಧಾನಪರಿಷತ್ ಶಾಸಕ ಕೆ.ವಿವೇಕಾನಂದ ಹೇಳಿದರು.
ಶಾಲೆಗಳು ಪ್ರಾರಂಭವಾಗಿ ನಾಲ್ಕು ತಿಂಗಳಾದರೂ ಮಕ್ಕಳಿಗೆ ಪಠ್ಯಪುಸ್ತಕಗಳನ್ನು ನೀಡಿಲ್ಲ. ಈಗಷ್ಟೇ ಕೆಲವು ಶಾಲೆಗಳಿಗೆ ನೀಡಲಾಗುತ್ತಿದೆ. ಶೂ-ಸಾಕ್ಸ್‌ಗಳನ್ನೂ ನೀಡಿಲ್ಲ. ಮುಂದಿನ ತಿಂಗಳು ವಿದ್ಯಾರ್ಥಿಗಳಿಗೆ ಮಧ್ಯಂತರ ಪರೀಕ್ಷೆ ಎದುರಾಗಲಿದೆ. ಪಠ್ಯಪುಸ್ತಕಗಳನ್ನು ನೀಡಲು ಇಷ್ಟು ವಿಳಂಬ ಮಾಡಿದರೆ ಮಕ್ಕಳ ಓದಿನ ಗತಿ ಏನು ಎಂದು ಪ್ರಶ್ನಿಸಿದರು.