ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಲು ಬಿಎಸ್ಪಿ ಆಗ್ರಹ

KannadaprabhaNewsNetwork |  
Published : Nov 03, 2026, 01:45 AM IST
2ಕೆಎಂಎನ್ ಡಿ19 | Kannada Prabha

ಸಾರಾಂಶ

ಕಳೆದ ಹತ್ತು ವರ್ಷಗಳಿಂದ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸದಿರುವುದು ರೈತರಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ರಸಗೊಬ್ಬರ, ಕೂಲಿ ಸೇರಿದಂತೆ ಕೃಷಿ ಪರಿಕರಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಬೆಳೆದ ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯದಿದ್ದರೆ ಆರ್ಥಿಕವಾಗಿ ಮತ್ತಷ್ಟು ತೊಂದರೆ ಅನುಭವಿಸಬೇಕಾಗುತ್ತದೆ.

ಕನ್ನಡಪ್ರಭ ವಾರ್ತೆ ಹಲಗೂರು

ಹಾಲಿನ ದರ ಏರಿಕೆಗೆ ಖಂಡನೆ, ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಿ ಪ್ರತಿ ಟನ್ ಕಬ್ಬಿಗೆ 5,500 ರು., ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಪ್ರತಿ ಕೆ.ಜಿಗೆ 60 ರು.ಕ್ಕೆ ನಿಗದಿಪಡಿಸಬೇಕು ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಒಂದು ತಿಂಗಳಿಂದ ಕಬ್ಬು ಬೆಳೆಗಾರರು ವಿವಿಧ ಬೇಡಿಕೆ ಮುಂದಿಟ್ಟುಕೊಂಡು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಬೀದಿಗಿಳಿದು ಹೋರಾಟ ಮಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ ಹತ್ತು ವರ್ಷಗಳಿಂದ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸದಿರುವುದು ರೈತರಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ರಸಗೊಬ್ಬರ, ಕೂಲಿ ಸೇರಿದಂತೆ ಕೃಷಿ ಪರಿಕರಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತರಿಗೆ ಬೆಳೆದ ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯದಿದ್ದರೆ ಆರ್ಥಿಕವಾಗಿ ಮತ್ತಷ್ಟು ತೊಂದರೆ ಅನುಭವಿಸಬೇಕಾಗುತ್ತದೆ. ಸರ್ಕಾರಗಳ ವಿಳಂಬ ನೀತಿಯಿಂದ ಕಬ್ಬು ಕಟಾವು ಮತ್ತು ಸಾಗಣೆ ಕಾರ್ಯಕ್ಕೆ ಅಡ್ಡಿಯಾದರೆ ರೈತರಿಗೆ ನಷ್ಟ ಹೆಚ್ಚಾಗಲಿದೆ ಎಂದು ಎಚ್ಚರಿಸಿದರು.

ಕಬ್ಬು ಕೇವಲ ಸಕ್ಕರೆ ಉತ್ಪಾದನೆಗೆ ಸೀಮಿತವಾಗಿಲ್ಲ. ಅದರಿಂದ ಎಥೆನಾಲ್ ಕೂಡ ಉತ್ಪಾದಿಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಎಥೆನಾಲ್ ಉತ್ಪಾದನೆಗೆ ಉತ್ತೇಜನ ನೀಡುವ ಜತೆಗೆ, ಉತ್ಪಾದನೆಯಾಗುವ ಎಥೆನಾಲ್ ಖರೀದಿಗೆ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಬ್ಬು ಬೆಳೆಗಾರರ ಸಮಸ್ಯೆಗಳ ಕುರಿತು ಹಲವು ಬಾರಿ ಸಭೆ ನಡೆಸಿರುವುದಾಗಿ ಹೇಳುತ್ತಿದ್ದಾರೆ. ಆದರೆ, ರೈತರ ಪ್ರಮುಖ ಬೇಡಿಕೆ ಇನ್ನೂ ಈಡೇರಿಲ್ಲ. ಸರ್ಕಾರ ಕೂಡಲೇ ರೈತರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಅವರ ಹಿತ ಕಾಪಾಡಬೇಕು ಎಂದು ಆಗ್ರಹಿಸಿದರು.

ಹೈನುಗಾರಿಕೆ ಅವಲಂಬಿಸಿರುವ ಕುಟುಂಬಗಳಿಗೆ ನೆರವಾಗಲು ಪ್ರತಿ ಲೀಟರ್ ಹಾಲಿಗೆ 8 ಹೆಚ್ಚಳ ಮಾಡಿದ್ದು, 7 ರು. ರೈತರಿಗೆ ನೀಡುವುದಾಗಿ ಸರ್ಕಾರ ಹೇಳಿದೆ. ಮೊಸರಿನ ದರವನ್ನೂ ಪ್ರತಿ ಕೆ.ಜಿಗೆ 14 ರು ಹೆಚ್ಚಿಸಿ ಜನಸಾಮಾನ್ಯರ ಮೇಲೆ ಹೆಚ್ಚಿನ ಹೊರೆ ಹಾಕಿರವುದನ್ನು ಖಂಡಿಸಿದರು.

ಹಾಲಿನ ದರ ಪ್ರತಿ ಲೀಟರ್‌ಗೆ 2 ರಿಂದ 3 ರುವರೆಗೆ ಮಾತ್ರ ಹೆಚ್ಚಿಸಿ, ಉಳಿದ ಮೊತ್ತವನ್ನು ಸರ್ಕಾರವೇ ಭರಿಸಬಹುದಿತ್ತು. ಬರ ಪರಿಸ್ಥಿತಿ, ಉದ್ಯೋಗದ ಕೊರತೆ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಮೀಣ ಜನರು ಸಂಕಷ್ಟದಲ್ಲಿದ್ದಾರೆ. ಈ ವೇಳೆ ಹಾಲಿನ ದರ ಹೆಚ್ಚಳ ಜನಸಾಮಾನ್ಯರಿಗೆ ಮತ್ತಷ್ಟು ಹೊರೆ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಬಿಎಸ್ಪಿ ಮಳವಳ್ಳಿ ತಾಲೂಕು ಬಿಎಸ್ಪಿ ಅಧ್ಯಕ್ಷ ನಂಜುಂಡಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಎಚ್.ಎನ್. ವೀರಭದ್ರಯ್ಯ, ಮುಖಂಡರಾದ ಮಾಯಪ್ಪ, ಆನಂದ್ ಕುಮಾರ್, ಬಿ.ಎಸ್.ತಮ್ಮಯ್ಯ ಸೇರಿದಂತೆ ಹಲವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಲೆ ಏರಿಕೆಗೆ ಜನರ ವ್ಯಾಪಕ ಆಕ್ರೋಶ
ಟಾಯ್ಸ್‌ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ-ರಾಜ್ಯ ಜಟಾಪಟಿ